ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ನಿರ್ದಾಕ್ಷಿಣ್ಯ ಕ್ರಮ

| Published : Aug 10 2024, 01:35 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಹುಕ್ಕೇರಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ನೇತೃತ್ವದ ತಂಡ ವಿವಿಧ ಕಡೆಗಳಲ್ಲಿ ಭೇಟಿ ನೀಡಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಅತಿವೃಷ್ಟಿ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ದುಡಗುಂಟಿ ಅವರು, ಸಂತ್ರಸ್ಥರು ಸೇರಿದಂತೆ ಜನ ಹಾಗೂ ಜಾನುವಾರುಗಳ ಬಗ್ಗೆ ಮುಂಜಾಗೃತಾ ಕ್ರಮ ವಹಿಸಬೇಕು. ಈ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ನೇತೃತ್ವದ ತಂಡ ವಿವಿಧ ಕಡೆಗಳಲ್ಲಿ ಭೇಟಿ ನೀಡಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಅತಿವೃಷ್ಟಿ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ದುಡಗುಂಟಿ ಅವರು, ಸಂತ್ರಸ್ಥರು ಸೇರಿದಂತೆ ಜನ ಹಾಗೂ ಜಾನುವಾರುಗಳ ಬಗ್ಗೆ ಮುಂಜಾಗೃತಾ ಕ್ರಮ ವಹಿಸಬೇಕು. ಈ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಆಡಳಿತ ಯಂತ್ರದ ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಸಲಹೆ-ಸೂಚನೆ ನೀಡಿದರು. ಇದರೊಂದಿಗೆ ಆಡಳಿತ ಯಂತ್ರಕ್ಕೆ ಚುರುಕು ನೀಡಿದ್ದಲ್ಲದೇ ಲೆಕ್ಕಕ್ಕೆ ಸಂಬಂಧಿಸಿದ ದಾಖಲೆಗಳ ನಿರ್ವಹಣೆ, ಆಡಳಿತ ಸುಧಾರಣೆ ಕುರಿತು ಮಾರ್ಗದರ್ಶನ ಮಾಡಿದರು. ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ದುಡಗುಂಟಿ ನೇತೃತ್ವದ ತಂಡ, ಔಷಧಗಳ ದಾಸ್ತಾನುಗಳನ್ನು ಪರಿಶೀಲಿಸಿ ಡೆಂಘೀ ಹರಡದಂತೆ ಎಚ್ಚರಿಕೆ ವಹಿಸಬೇಕು. ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು ಎಂದು ಸೂಚಿಸಿತು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತಾಗಬೇಕು. ಜೆಜೆಎಂ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಶಿಥಿಲ ಅಂಗನವಾಡಿ, ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಯೋಜನೆ ರೂಪಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ರೈತರಿಗೆ ಅಗತ್ಯ ಬೀಜ, ರಸಗೊಬ್ಬರ ಪೂರೈಸಬೇಕು. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.

ಈ ವೇಳೆ ಜಿಪಂ ಸಿಬ್ಬಂದಿಗಳಾದ ಶಶಿಕಾಂತ ನೇಸರಗಿ, ಸುವರ್ಣಾ ಮಹೇಂದ್ರಕರ ಮತ್ತಿತರರು ಉಪಸ್ಥಿತರಿದ್ದರು.