ಸಾರಾಂಶ
ಹುಬ್ಬಳ್ಳಿ: ಸಾರಿಗೆ ಸಂಸ್ಥೆಗೆ 2019ರಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಕೋವಿಡ್‌ನಿಂದ ಸ್ಥಗಿತಗೊಂಡಿತ್ತು. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ವಾಕರಸಾ ಸಂಸ್ಥೆಯಲ್ಲಿ 1000 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೆಂಗಳೂರಿನ ಕರಾರಸಾ ಸಂಸ್ಥೆಯ ಸಭಾಂಗಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ ನೇಮಕಗೊಂಡ ಚಾಲಕರಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದರು.ವಾಕರಸಾ ಸಂಸ್ಥೆಯ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಮಾತನಾಡಿ, ಸಂಸ್ಥೆಗೆ ಇನ್ನೂ ಚಾಲನಾ ಸಿಬ್ಬಂದಿಗಳ ಅವಶ್ಯಕತೆ ಇದೆ. ಘಟಕಗಳ ಸುಧಾರಣೆ ಮಾಡಬೇಕಾಗಿದೆ. ಅದಕ್ಕಾಗಿ ವಿಶೇಷ ಹೆಚ್ಚು ಅನುದಾನವನ್ನು ಸರ್ಕಾರದಿಂದ ಒದಗಿಸಬೇಕು ಎಂದು ಮನವಿ ಮಾಡಿದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ನೇಮಕಾತಿ ಪ್ರಕ್ರಿಯೆ, ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶ ಕುರಿತು ಮಾಹಿತಿ ನೀಡಿದರು.ಇದೇ ವೇಳೆ ಸಚಿವರು ಸಾಂಕೇತಿಕವಾಗಿ 46 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿದರು. ನಂತರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶ ಅನಾವರಣಗೊಳಿಸಿದರು.
ಸಂಸ್ಥೆ ಉಪಾಧ್ಯಕ್ಷ ಪೀರಸಾಬ್ ಕೌತಾಳ, ಅಕ್ರಂ ಪಾಷಾ, ಎಂ. ರಾಚಪ್ಪ, ಇಬ್ರಾಯಿಮ್ ಮೈಗೂರು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಡ್ರೀಮ್ ಸ್ಟೆಪ್ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ವಿವೇಕಾನಂದ ವಿಶ್ವಜ್ಞ ಸ್ವಾಗತಿಸಿದರು. ಸುನೀಲ ಪತ್ರಿ ನಿರೂಪಿಸಿದರು.