ಸಾರಾಂಶ
ಕನ್ನಡಪ್ರಭ ವಾರ್ತೆ ಕೊಪ್ಪಳ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪದವೀಧರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ) ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿತು.ಕಲ್ಯಾಣ ಕರ್ನಾಟಕ ಭಾಗಕ್ಕೆ ಶಿಕ್ಷಕರ ನೇಮಕಾತಿ ಆದೇಶ ಹೊರಡಿಸಿರುವುದು ಸ್ವಾಗತರ್ಹ. ರಾಜ್ಯದಲ್ಲಿ 2024-25ನೇ ಸಾಲಿನಲ್ಲಿ ಈಗಾಗಲೇ ಸುಮಾರು 20000 ಶಿಕ್ಷಕರು ಸೇವಾ ನಿವೃತ್ತಿ ಹೊಂದಿದ್ದಾರೆ. 2025- 26ನೇ ಸಾಲಿನಲ್ಲಿ 40,000 ಶಿಕ್ಷಕರು ಸೇವಾ ನಿವೃತ್ತಿ ಹೊಂದಲಿದ್ದಾರೆ. ಆದರೆ, ಈಗ ಕೇವಲ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿರುವುದು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ಆದ್ದರಿಂದ ಹುದ್ದೆಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿದರು.
ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಸರ್ಕಾರಿ ಬಿ ಇಡಿ ಕಾಲೇಜುಗಳು ಇಲ್ಲ. ಈ ಹಿನ್ನೆಲೆ 48,000 ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳ ಪೈಕಿ 22 ಸಾವಿರ ಅಂದರೆ ಶೇ. 45.80ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದರಲ್ಲಿ ಅರ್ಧದಷ್ಟು ಶಿಕ್ಷಕರನ್ನೂ ನೇಮಕ ಮಾಡಿಕೊಂಡಿಲ್ಲ. 2024ರ ಶೈಕ್ಷಣಿಕ ಸಾಲಿನಲ್ಲಿ 25,000 ಶಾಲೆಗಳಲ್ಲಿ ಒಬ್ಬರಿಬ್ಬರು ಶಿಕ್ಷಕರಿದ್ದಾರೆ. ಇದನ್ನೆಲ್ಲ ಪರಿಗಣಿಸಿ ಹೆಚ್ಚುವರಿಯಾಗಿ ಕನಿಷ್ಠ 10000ಕ್ಕೂ ಅಧಿಕ ಶಿಕ್ಷಕರ ನೇಮಕ ಮಾಡಿಕೊಳ್ಳುವುದು ಅಗತ್ಯವಿದೆ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.ನೇಮಕಾತಿಯ ಅಧಿಸೂಚನೆಗೆ ಸಂಬಂಧಿಸಿದಂತೆ ಬಿಇಡಿ ಪದವಿ ಮಾನದಂಡದ ಮೇಲೆ ನೇಮಕ ಮಾಡಿಕೊಳ್ಳುವ 6ರಿಂದ 8 ನೇ ತರಗತಿಗೆ ಶಿಕ್ಷಕರ ನೇಮಕಾತಿಯಲ್ಲಿ ಕೇವಲ 78 ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ. ಹೈ.ಕರ್ನಾಟಕದಲ್ಲಿ 14,107 ಶಿಕ್ಷಕರ ಹುದ್ದೆ ಖಾಲಿ ಇವೆ. ಕನಿಷ್ಠ 12,000 ಅಧಿಕವಾಗಿ ಪ್ರಾಥಮಿಕ ಮತ್ತು ಪ್ರೌಢ(ಮಾಧ್ಯಮಿಕ) ಶಿಕ್ಷಕರ ನೇಮಕಾತಿಯನ್ನು ಹೆಚ್ಚಿಸಬೇಕು ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಲಾಯಿತು.ಈ ವೇಳೆ ಎಸ್ಎಫ್ಐ ಜಿಲ್ಲಾಧ್ಯಕ್ಷ ಗ್ಯಾನೇಶ ಕಡಗದ, ಜಿಲ್ಲಾ ಕಾರ್ಯದರ್ಶಿ ಬಾಲಾಜಿ, ಮಾರುತಿ, ಅಮರೇಶ್ ಲಿಂಗದಹಳ್ಳಿ, ಅಮರಯ್ಯ ಹಿರೇಮಠ್, ಜಗದೀಶ ಗೌಡ, ಪ್ರಸನ್ನಕುಮಾರ, ಮರಿಯಪ್ಪ ಮೊದಲಾದವರು ಇದ್ದರು.