ಸಾರಾಂಶ
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಶಾಲಾ, ವಸತಿ ನಿಲಯಗಳಲ್ಲಿ ಅವಶ್ಯಕ ವ್ಯವಸ್ಥೆಗಳನ್ನು ಕಲ್ಪಿಸಲು ವಿಶೇಷ ಗಮನ ನೀಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಶಾಲಾ, ವಸತಿ ನಿಲಯಗಳಲ್ಲಿ ಅವಶ್ಯಕ ವ್ಯವಸ್ಥೆಗಳನ್ನು ಕಲ್ಪಿಸಲು ವಿಶೇಷ ಗಮನ ನೀಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅಧಿಕಾರಿಗಳಿಗೆ ಸೂಚಿಸಿದರು.ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಇತ್ತೀಚೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಮೂಲಸೌಕರ್ಯಗಳನ್ನು ಒದಗಿಸುವ ಜೊತೆಗೆ ಸರ್ಕಾರ ಒದಗಿಸುವ ಅನುದಾನ ದುರುಪಯೋಗ ಆಗದಂತೆ ನಿಗಾ ವಹಿಸಬೇಕು ಎಂದರು.
ಎಲ್ಲಾ ಶಾಲೆಗಳಲ್ಲಿ ಹಾಜರಾತಿ ವ್ಯವಸ್ಥೆ ಸಮರ್ಪಕವಾಗಿ ನಿಭಾಯಿಸಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಬೇಕು. ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ನಿರಂತರ ಪರಿಶೀಲನೆ ನಡೆಸುವ ಮೂಲಕ ಅಕ್ರಮವಾಗಿ ಭ್ರೂಣ ಪತ್ತೆ ಮತ್ತು ಹತ್ಯೆ ಬಗ್ಗೆ ನಿಗಾ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಯುವ ಜೊತೆಗೆ ಬಾಲ ಗರ್ಭಿಣಿಯರ ಪ್ರಕರಣಗಳ ಬಗ್ಗೆ ಸಂಬಂಧಿಸಿದ ಪೋರ್ಟಲ್ ನಲ್ಲಿ ಸಮರ್ಪಕ ದಾಖಲಾತಿ ಮಾಡಬೇಕು. ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಬಗ್ಗೆ ವಿಶೇಷ ಗಮನ ನೀಡಿ ಅವಶ್ಯಕ ಚಿಕಿತ್ಸೆಯನ್ನು ದೊರಕಿಸಬೇಕು. ಎಎನ್‌ಎಂ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಅರಿವು ಮೂಡಿಸಿ, ಸರಿಯಾದ ಮಹಿತಿ ಅಪ್ಲೋಡ್ ಮಾಡಿ ಪೊಲೀಸ್ ಇಲಾಖೆಗೆ ಸಲ್ಲಿಸುವಂತೆ ಸೂಚನೆ ನೀಡಿದರು.