ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ

| Published : Sep 24 2025, 01:00 AM IST

ಸಾರಾಂಶ

ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಪ್ರಕ್ರಿಯೆಗೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು.

ಕನ್ನಡಪ್ರಭ ವಾರ್ತೆ ಕೋಲಾರಕನಿಷ್ಠ ಬೆಂಬಲ ಬೆಲೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್‌ ೧ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಮತ್ತು ತೂಕ ಮತ್ತು ಗುಣಮಟ್ಟದಲ್ಲಿ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತರಿಂದ ರಾಗಿ ಖರೀದಿಸಲು ಪೂರ್ವ ಸಿದ್ಧತಾ ಕ್ರಮಗಳ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ ಕ್ವಿಂಟಾಲ್ ರಾಗಿಗೆ ೪,೮೮೬ ರೂ.ಗಳು ಬೆಂಬಲ ಬೆಲೆ ಸರ್ಕಾರ ನಿಗದಿಪಡಿಸಿದೆ.ರೈತರಿಗೆ ಮಾಹಿತಿ ನೀಡಿ

ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಪ್ರಕ್ರಿಯೆಗೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಖರೀದಿ ಕೇಂದ್ರಗಳ ನೋಂದಣಿಗೆ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್‌ಗಳು, ವಿದ್ಯುತ್ ಸಂಪರ್ಕ, ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ, ರೈತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಂಗ್ರಹಕ್ಕೆ ಉಗ್ರಾಣ ವ್ಯವಸ್ಥೆ

ರೈತರಿಂದ ಖರೀದಿಸಿದ ರಾಗಿಯನ್ನು ಕ್ರೊಡೀಕರಿಸಿ ಶೇಖರಿಸಲು ಉಗ್ರಾಣಗಳು ವ್ಯವಸ್ಥಿತ ಗುಣಮಟ್ಟದಲ್ಲಿ ಇದೆಯೇ ಎಂದು ಪರಿಶೀಲಿಸಿ, ಅವಶ್ಯವಿದ್ದಲ್ಲಿ ಹೆಚ್ಚುವರಿ ಉಗ್ರಾಣಗಳನ್ನು ನಿಗಧಿಪಡಿಸಿ, ರೈತರು ಕಡ್ಡಾಯವಾಗಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ನೋಂದಾಯಿಸಿಕೊಂಡು, ಫ್ರೂಟ್ಸ್ ಐಡಿ ಪಡೆದಿರಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಫ್ರೂಟ್ಸ್ ಐಡಿ ಕಡ್ಡಾಯ ಎಂದು ಹೇಳಿದರು.ಮುಳಬಾಗಿಲು ತಾಲೂಕಿನಲ್ಲಿ ಹೆಚ್ಚಾಗಿ ಭತ್ತ ಬೆಳೆಯುವುದರಿಂದ ಮಾತ್ರ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ನಿರ್ಧರಿಸಿದ್ದು, ಜಿಲ್ಲೆಯ ಯಾವುದೇ ಭಾಗದ ರೈತರು ತಾವು ಬೆಳೆದಂತಹ ಭತ್ತ ತಂದು ಮಾರಾಟ ಮಾಡಬಹುದು. ಬಂಗಾರಪೇಟೆ ಮತ್ತು ಮಾಲೂರು ತಾಲ್ಲೂಕುಗಳಲ್ಲಿ ಹೆಚ್ಚಾಗಿ ರೈತರು ರಾಗಿ ಬೆಳೆಯುವುದರಿಂದ ಆ ಭಾಗದಲ್ಲಿ ಅವಶ್ಯಕತೆ ಇದ್ದರೆ ಹೋಬಳಿ ಮಟ್ಟದಲ್ಲಿಯೂ ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡುವಂತೆ ತಿಳಿಸಿದರು.

ಪ್ರಶಿಕ್ಷಣಾರ್ಥಿಗಳ ಸೇರಿಸಿಕೊಳ್ಳಿ

ಖರೀದಿ ಕೇಂದ್ರಗಳಿಗೆ ಸಿಬ್ಬಂದಿ ಕೊರತೆ ಇರುವುದರಿಂದ ಕಾಲೇಜುಗಳ ಪ್ರಶಿಕ್ಷಣಾರ್ಥಿಗಳನ್ನು ಸೇರಿಸಿಕೊಳ್ಳಲು ಸೂಚಿಸಿದರು. ಸಭೆಯಲ್ಲಿ ಜಿಪಂ ಸಿಇಓ ಪ್ರವೀಣ್ ಪಿ.ಬಾಗೇವಾಡಿ, ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಲತಾ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರಸಾದ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಮಾ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಕುಮಾರಸ್ವಾಮಿ ಇದ್ದರು.