ಸಾರಾಂಶ
ಹಾವೇರಿ: ಶೀಘ್ರ ವರದಿ ಪಡೆದು ೭ನೇ ವೇತನ ಆಯೋಗ ಅನುಷ್ಠಾನ, ಹಳೇ ಪಿಂಚಣಿ ಮರು ಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಈ ಮೂರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಅಮೃತಗೌಡ ಪಾಟೀಲ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ವಿಧಾನಸಭಾ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾ ನೌಕರರ ಸಂಘದ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು. ರಾಜ್ಯ ೭ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು. ಸರ್ಕಾರ ಈಗಾಗಲೇ ನೀಡಿರುವ ಶೇ. ೧೭ ಮಧ್ಯಂತರ ಪರಿಹಾರ ಭತ್ಯೆಯೂ ಸೇರಿದಂತೆ ಶೇ. ೪೦ ಫಿಟ್‌ಮೆಂಟ್ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ೨೦೨೨ ಜು. 1ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದರು.ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕರ್ನಾಟಕದಲ್ಲೂ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್) ಅನುಷ್ಠಾನಗೊಳಿಸಬೇಕು. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಲು ಕ್ರಮವಹಿಸುವಂತೆ ಮನವಿ ಮಾಡಿಕೊಂಡರು.
ಜಿಲ್ಲಾ ಕಾರ್ಯದರ್ಶಿ ಎಂ.ಎ. ಎಣ್ಣಿ, ರಾಜ್ಯ ಪರಿಷತ್ ಸದಸ್ಯ ಎಸ್.ಜಿ. ಸುಣಗಾರ, ಖಜಾಂಚಿ ಸಿದ್ದಣ್ಣ ಯಲಿಗಾರ, ಗೌರವಾಧ್ಯಕ್ಷ ಸಿ.ಜಿ. ಬ್ಯಾಡಗಿ, ಕಾರ್ಯಾಧ್ಯಕ್ಷ ವಾಚಪ್ಪ ಲಮಾಣಿ, ವಿವಿಧ ವೃಂದ ಸಂಘಗಳ ಅಧ್ಯಕ್ಷರಾದ ಪಿ.ಟಿ. ಕಾಮನಳ್ಳಿ, ಬಿ.ಎಂ. ಬೇವಿನಮರದ, ಮಲ್ಲಿಕಾರ್ಜುನ ಶಾಂತಗೇರಿ, ನಿಸ್ಸಿಮಗೌಡ್ರ ಇತರ ಪದಾಧಿಕಾರಿಗಳು, ನೌಕರರು ಉಪಸ್ಥಿತರಿದ್ದರು.