ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿ

| Published : Dec 14 2024, 12:50 AM IST

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ₹1600 ಕೋಟಿ ಘೋಷಣೆ ಮಾಡಿದೆ. ಆದರೆ, ₹57.04 ಕೋಟಿ ಅನುದಾನ ಮಾತ್ರ ಬಿಡುಗಡೆಗೊಳಿಸಿದೆ.

ಹುಬ್ಬಳ್ಳಿ:

ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಹು-ಧಾ ಮಹಾನಗರ ಜಿಲ್ಲಾ ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾ ಪದಾಧಿಕಾರಿಗಳು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಮಿನಿ ವಿಧಾನಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಸತೀಶ ಶೇಜವಾಡಕರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ, ಹಿಂದುಳಿದ ವರ್ಗಗಳ ಜನರ ಆರ್ಥಿಕ, ಔದ್ಯೋಗಿಕ, ಕೃಷಿ ಮತ್ತು ಶಿಕ್ಷಣಕ್ಕಾಗಿ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಹರಿಹಾಯ್ದರು.

ಈ ಹಿಂದೆ ಬಿಜೆಪಿ ಆಳಿತಾವಧಿಯಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ₹1000 ಕೋಟಿಗೂ ಅಧಿಕ ಅನುದಾನ ನೀಡಲಾಗಿದೆ. ಡಿ. ದೇವರಾಜ ಅರಸು, ಒಕ್ಕಲಿಗ, ಮರಾಠ, ವಿಶ್ವಕರ್ಮ, ವೀರಶೈವ ಲಿಂಗಾಯತ, ಅಂಬಿಗರ ಚೌಡಯ್ಯ, ಸವಿತಾ ಸಮಾಜ ಸೇರಿದಂತೆ ಎಲ್ಲ ನಿಗಮಗಳಿಗೂ ಹಣ ನೀಡಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ₹1600 ಕೋಟಿ ಘೋಷಣೆ ಮಾಡಿದೆ. ಆದರೆ, ₹57.04 ಕೋಟಿ ಅನುದಾನ ಮಾತ್ರ ಬಿಡುಗಡೆಗೊಳಿಸಿದೆ. ಇದರೊಟ್ಟಿಗೆ ಹೂಗಾರ, ಕುಂಬಾರ, ಗಾಣಿಗ, ಹಡಪದ ಸೇರಿದಂತೆ ಅನೇಕ ಸಣ್ಣ ಸಣ್ಣ ಹಿಂದುಳಿದ ಸಮುದಾಯಗಳ ಹೆಸರಲ್ಲಿ ನಿಗಮ ಸ್ಥಾಪಿಸಿದೆ. ಅವುಗಳಿಗೂ ಸಹ ಹಣ ಬಿಡುಗಡೆಗೊಳಿಸದೇ ಅನ್ಯಾಯ ಮಾಡಲಾಗುತ್ತಿದೆ. ಆದ್ದರಿಂದ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಕೂಡಲೇ ಅನುದಾನ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದರು.

ಮೋರ್ಚಾದ ಜಿಲ್ಲಾಧ್ಯಕ್ಷ ಶಂಕರ ಶೇಳಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ ಲೋಕರೆ, ಪ್ರಭು ನವಲಗುಂದಮಠ, ವೆಂಟಕೇಶ ಕಾಟವೆ, ದತ್ತಮೂರ್ತಿ ಕುಲಕರ್ಣಿ, ಅರುಣ ಲೋಕರೆ, ಬಸವರಾಜ ಬೆಳಗಲಿ, ಕೃಷ್ಣಾ ಉಪ್ಪಿನ, ರವಿ ನಾಯಕ, ರಾಜು ಕೊರ್ಯಾಣಮಠ ಸೇರಿದಂತೆ ಹಲವರಿದ್ದರು.