Relocation of wild elephants: Vijayendra supports resignation of Congress MLA

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಅಭಯಾರಣ್ಯಗಳಿಗೆ ಓಡಿಸುತ್ತಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ಶಾಸಕರ ರಾಜೀನಾಮೆ ಸರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಡಾನೆ ಸೇರಿದಂತೆ ವನ್ಯಜೀವಿಗಳ ಹಾವಳಿ ನಿಯಂತ್ರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕಾಡಾನೆ ಹಾವಳಿಯನ್ನು ತಪ್ಪಿಸಲು ಸರ್ಕಾರ ಕೆಲ ಸ್ಥಳಗಳನ್ನು ಗುರುತಿಸಿ ಅಲ್ಲಿ ಅರಣ್ಯ ಬೆಳೆಸಿ ಆನೆ ಬಿಡಾರ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.

ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸಿ:

ಸಾವಿರಾರು ಆಶಾ ಕಾರ್ಯಕರ್ತೆಯರು ಕಳೆದ 7 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮೈಕೊರೆಯುವ ಚಳಿಯಲ್ಲಿಯೂ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಗೌರವಧನವನ್ನು 15 ಸಾವಿರ ರು. ಗೆ ಹೆಚ್ಚಿಸಿ ಆ ತಾಯಂದಿರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ಹಿರಿಯೂ ಉಪ ಚುನಾವಣೆ ಅಭ್ಯರ್ಥಿ ವಿಚಾರದಲ್ಲಿ ತಮ್ಮ ಮತ್ತು ಜೆಡಿಎಸ್‌ ನಡುವೆ ಯಾವ ಗೊಂದಲವೂ ಇಲ್ಲ. ಪಕ್ಷದ ವರಿಷ್ಠರ ಗಮನಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು ನೀಡಿದ್ದೇವೆ. ಜೆಡಿಎಸ್‌ನವರು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದಿದ್ದಾರೆ. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದರು.