ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಸರ್ಕಾರವು ಪ್ರಾಥಮಿಕ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಭೂ-ಸ್ವಾಧೀನ ಪ್ರಕ್ರಿಯೆ ಸಂಬಂಧ ರೈತರು ತಮ್ಮ ಆಕ್ಷೇಪಣೆಗಳನ್ನು ದಾಖಲಿಸಲು ಕಾನೂನಾತ್ಮಕ ಅವಕಾಶವಿರುತ್ತದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ, ಕುದುರಗುಂಡಿ ಗ್ರಾಮ ಹಾಗೂ ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮಗಳ ರೈತರು ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಭೂಮಿ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಂಡಿದ್ದು ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ರೈತರಿಂದ ಅಹವಾಲು ಹಾಗೂ ಅಭಿಪ್ರಾಯ ಸಂಗ್ರಹಿಸಲು ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿತ್ತು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಭೂಮಿಗೆ ನೀಡಲಾಗುವ ಪರಿಹಾರದ ಮೊತ್ತದ ಬಗ್ಗೆ ರೈತರಲ್ಲಿ ಅಸಮಾಧಾನವಿದ್ದರೆ ಹೆಚ್ಚು ಪರಿಹಾರ ನೀಡುವಂತೆ ರೈತರು ಮನವಿ ಸಲ್ಲಿಸಬಹುದು. ಈ ಮನವಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಸರ್ಕಾರವು ಪ್ರಾಥಮಿಕ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಭೂ-ಸ್ವಾಧೀನ ಪ್ರಕ್ರಿಯೆ ಸಂಬಂಧ ರೈತರು ತಮ್ಮ ಆಕ್ಷೇಪಣೆಗಳನ್ನು ದಾಖಲಿಸಲು ಕಾನೂನಾತ್ಮಕ ಅವಕಾಶವಿರುತ್ತದೆ. ಪ್ರಾಧಮಿಕ ಅಧಿಸೂಚನೆ ಹೊರಡಿಸಿದ ನಂತರ ಭೂ-ಸ್ವಾಧೀನ ಪ್ರಕ್ರಿಯೆ ಅರ್ಧದಲ್ಲಿ ನಿಂತಿರುವುದರಿಂದ ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ನಂತರ ಕಾನೂನು ರೀತಿ ಕ್ರಮ ಕಗೊಳ್ಳುತ್ತೇವೆ ಎಂದರು.

ಸಭೆಯಲ್ಲಿ ಬೆಂಗಳೂರಿನ ವಿಶೇಷ ಭೂ ಸ್ವಾಧೀನ ಅಧಿಕಾರಿ ಎ.ಎನ್.ರಘುನಂದನ್, ಜಿಲ್ಲಾ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕ ದಿನೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.