ಎಸ್ಸಿ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ತಾಲೂಕಿನ ಹಾಬಲಕಟ್ಟಿ ಗ್ರಾಮದ ಭೋವಿ ಸಮಾಜದ ಜನರು ಕಳೆದ ಒಂಬತ್ತು ದಿನಗಳಿಂದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತಿದ್ದು, ಸರ್ಕಾರದ ಆದೇಶ ಇದ್ದರೂ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪ್ರಮಾಣಪತ್ರ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಭೋವಿ ಸಮಾಜದ ರಾಜ್ಯಾಧ್ಯಕ್ಷ ಲಕ್ಷ್ಮಣ ಭೋವಿ ಆರೋಪಿಸಿದರು.
ಕುಷ್ಟಗಿ: ಎಸ್ಸಿ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ತಾಲೂಕಿನ ಹಾಬಲಕಟ್ಟಿ ಗ್ರಾಮದ ಭೋವಿ ಸಮಾಜದ ಜನರು ಕಳೆದ ಒಂಬತ್ತು ದಿನಗಳಿಂದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತಿದ್ದು, ಸರ್ಕಾರದ ಆದೇಶ ಇದ್ದರೂ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪ್ರಮಾಣಪತ್ರ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಭೋವಿ ಸಮಾಜದ ರಾಜ್ಯಾಧ್ಯಕ್ಷ ಲಕ್ಷ್ಮಣ ಭೋವಿ ಆರೋಪಿಸಿದರು.
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಧರಣಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಆದೇಶಗಳನ್ನು ಪಾಲಿಸಬೇಕಾದ ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಂತೆ ವರ್ತಿಸುತ್ತಿರುವುದು ಸರಿಯಲ್ಲ. ಸಚಿವರ ಪ್ರಭಾವಕ್ಕೆ ಒಳಗಾಗಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸಮಾಜದ ಜನರಿಗೆ ನ್ಯಾಯ ದೊರೆಯುವ ವರೆಗೆ ಹೋರಾಟ ಮುಂದುವರಿಯಲಿದ್ದು, ಮುಂದಿನ ನಿರ್ಣಯವನ್ನು ವಿ.ಎಸ್. ಉಗ್ರಪ್ಪ ಸೂಚನೆಯಂತೆ ಹೋರಾಟ ಕೈಗೊಳ್ಳಲಾಗುವುದು ಎಂದರು.ಹಾಬಲಕಟ್ಟಿ ಗ್ರಾಮದ ಯುವಕ ಶರಣಪ್ಪ ಭೋವಿ ಮಾತನಾಡಿ, ತಹಸೀಲ್ದಾರ್ ರಾಜಕೀಯ ಒತ್ತಡಕ್ಕೆ ಮಣಿದು ನಮ್ಮ ವಿರುದ್ಧ ಮತ್ತೊಂದು ಜಾತಿಯವರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕುಟುಂಬದ ಮೂಲ ಮತ್ತು ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹತೆಯ ಆಧಾರದ ಮೇಲೆ ಎಸ್ಸಿ ಪ್ರಮಾಣಪತ್ರ ನೀಡಬೇಕು. ಈ ವಿಚಾರವನ್ನು ಅನಗತ್ಯವಾಗಿ ವಿಳಂಬ ಮಾಡದೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಮಾಣಪತ್ರಕ್ಕಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರಾದಾಗ ಖಾಸಗಿ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕಾಯಿತು. ಸರ್ಕಾರಿ ವೈದ್ಯರೂ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಧರಣಿ ನಿರತರು ಆರೋಪಿಸಿದರು.ಒಂಬತ್ತು ದಿನಗಳಿಂದ ಧರಣಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಸಮಸ್ಯೆ ಬಗೆಹರಿಸಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹವಾಗಿದೆ.
ಹನುಮಂತಪ್ಪ ಭೋವಿ, ಮುತ್ತಪ್ಪ ಭೋವಿ, ಮಹೇಶ ಒಡೆಯರ್, ಭೀಮಪ್ಪ, ಹಾಬಲಕಟ್ಟಿ ಗ್ರಾಮದ ಜನರು ಇದ್ದರು.ಸೂಕ್ತ ಕಾನೂನು ಕ್ರಮ: ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮದ ಜನರು ಧರಣಿ ನಡೆಸುತ್ತಿರುವ ಕುರಿತು ಈಗಾಗಲೆ ಮೇಲಧಿಕಾರಿಗಳ ಗಮನಕ್ಕೂ ತರಲಾಗಿದೆ. ಅವರ ಆದೇಶದನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕುಷ್ಟಗಿ ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಹೇಳಿದರು.