ಸಾರಾಂಶ
ಬ್ಯಾಡಗಿ: ಬ್ರಿಟಿಷ್ ವಸಾಹತುಶಾಹಿಯಿಂದ ಭಾರತ ಸ್ವತಂತ್ರವಾದ ಬಳಿಕ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ರಚನೆಯಾಯಿತು. ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಗೊಳಿಸಲು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ಎಲ್ಲ ತ್ಯಾಗವನ್ನು ನೆನಪಿಸಿಕೊಳ್ಳುವಂಥ ದಿನವಾಗಿದೆ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.ಭಾರತೀಯರನ್ನು ಗುಲಾಮರಂತೆ ನಡೆಸಿಕೊಂಡ ಬ್ರಿಟಿಷರು ಸುಮಾರು 200 ವರ್ಷಗಳ ಕಾಲ ಭಾರತವನ್ನು ಆಳಿದ್ದು, ನಮ್ಮ ಹಕ್ಕುಗಳನ್ನು ಕಸಿದುಕೊಂಡ ಬ್ರಿಟಿಷ್ ಅಧಿಕಾರಿಗಳು ತಮ್ಮ ಆಳ್ವಿಕೆಯಲ್ಲಿ ಭಾರತೀಯ ನಾಗರಿಕರ ಜೀವನ ಶೋಚನೀಯ ಸ್ಥಿತಿಯನ್ನು ತಲುಪುವಂತೆ ಮಾಡಿದ್ದರು. ಇಂತಹ ಸಂದರ್ಭದಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ದೇಶವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ಸ್ವಾತಂತ್ರ್ಯ ಚಳವಳಿಗಳು ಇತಿಹಾಸದಲ್ಲಿ ಸ್ಮರಣೀಯವಾಗಿಸಿವೆ ಎಂದರು.
ತಾಲೂಕಿನ ಎಲ್ಲ ಕುಟಂಬಗಳಿಗೆ ಸರ್ಕಾರದ ಗ್ಯಾರಂಟಿ ಯೋಜನೆ ತಲುಪಿಸುವ ಮೂಲಕ ಸಮಗ್ರ ನೀರಾವರಿ ಯೋಜನೆ, ರಸ್ತೆ, ಶಾಲಾ ಕೊಠಡಿಗಳ ನಿರ್ಮಾಣ ಸೇರಿದಂತೆ ಜನಪರ ಕಾರ್ಯಕ್ರಮ ಜಾರಿಗೊಳಿಸಿ ಅಭಿವೃದ್ಧಿಗೆ ಯತ್ನಿಸಲಾಗುತ್ತಿದೆ ಎಂದರು.ಮರೆಯದ ತ್ಯಾಗ: ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಫೈರೋಜ್ ಸೋಮನಕಟ್ಟಿ ಅವರು, ಸ್ವಾತಂತ್ರ್ಯವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹೋರಾಟಗಾರರು ಮಾಡಿದ ತ್ಯಾಗವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಮ್ಮ ವೀರರು ಅನುಭವಿಸಿದ ನೋವಿನಿಂದ ಚೆಲ್ಲಿದ ರಕ್ತದಿಂದ ನಾವು ಮುಕ್ತವಾಗಿ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಪ್ರತಿಯೊಬ್ಬ ನಾಗರಿಕನೊಳಗೆ ದೇಶಭಕ್ತಿಯ ಭಾವನೆಗಳು ಜಾಗೃತಗೊಳ್ಳಬೇಕು ಎಂದರು.
ಇದಕ್ಕೂ ಮುನ್ನ ಪೊಲೀಸ್, ಎನ್‌ಸಿಸಿ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದವರನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವೇದಿಕೆಯಲ್ಲಿ ಪುರಸಭೆ ಸದಸ್ಯರು, ತಾಲೂಕಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.