ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ತನಿಖೆ ನಡೆಯಲಿ: ಬೊಮ್ಮಾಯಿ

| Published : Jun 14 2024, 01:10 AM IST / Updated: Jun 14 2024, 12:04 PM IST

ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ತನಿಖೆ ನಡೆಯಲಿ: ಬೊಮ್ಮಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ನಾನಿನ್ನು ರಾಜೀನಾಮೆ ಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾಂವಿ ಕ್ಷೇತ್ರದ ಶಾಸಕ. ನಾನು ರಾಜೀನಾಮೆ ಕೊಟ್ಟ ನಂತರ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಇರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆ ತೆಗೆದುಕೊಳ್ಳುವುದೇ ಅಪರಾಧ. ಅದು ಮರ್ಡರ್ ಆಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.

ಕೊಲೆಯಲ್ಲಿ ಹಲವಾರು ರೀತಿ ಇವೆ. ಇದೊಂದು ಗಂಭೀರ ಪ್ರಕರಣ, ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದರು.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ನಾನಿನ್ನು ರಾಜೀನಾಮೆ ಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾಂವಿ ಕ್ಷೇತ್ರದ ಶಾಸಕ. ನಾನು ರಾಜೀನಾಮೆ ಕೊಟ್ಟ ನಂತರ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದರು.

ತಮ್ಮ ಪುತ್ರನಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ, ಟಿಕೆಟ್ ವಿಚಾರದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷ ಮಾಡುವ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು. ಪಕ್ಷ ಯಾರಿಗೇ ಟಿಕೆಟ್ ಕೊಟ್ಟರೂ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

ಉ.ಕ. ಅನ್ಯಾಯದ ಪ್ರಶ್ನೆ ಇಲ್ಲ:  

ಕೇಂದ್ರ ಸಂಪುಟದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯದ ಪ್ರಶ್ನೆಯೇ ಇಲ್ಲ. ಕರ್ನಾಟಕಕ್ಕೆ ಹೆಚ್ಚು ಸಚಿವ ಸ್ಥಾನಗಳು ಸಿಕ್ಕಿವೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗಿ ಮೋದಿ ಅವರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಭಾಗಿಯಾದ ಸೌಭಾಗ್ಯ ನನ್ನದು. ಕರ್ನಾಟಕಕ್ಕೆ ಎಷ್ಟು ಮಂತ್ರಿ ಸ್ಥಾನ ಕೊಡಬೇಕೋ ಅಷ್ಟು ಕೊಟ್ಟಿದ್ದಾರೆ. ಇನ್ನೇನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಮೂವರಿಗೆ ಸಂಪುಟ ದರ್ಜೆ ಮತ್ತು ಇಬ್ಬರಿಗೆ ರಾಜ್ಯ ಖಾತೆ ಕೊಡಲಾಗಿದೆ. ಪ್ರದೇಶವಾರು ಸಚಿವ ಸ್ಥಾನ ಹಂಚಿಕೆ ಬಗ್ಗೆ ವಿಚಾರ ಮಾಡಬಾರದು. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ನಾವೆಲ್ಲ ಕೆಲಸ ಮಾಡಬೇಕು ಎಂದು ಹೇಳಿದರು.