ಸಾರಾಂಶ
ತಾಲೂಕಿನ ಕಸಬಾ ಹೋಬಳಿ, ಗುಡಿಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರುಗೊಂಡನಹಳ್ಳಿ ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ಒಂದು ವರ್ಷಗಳಿಂದಲೂ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು ಸಂಬಂಧಪಟ್ಟ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿಗಳ ಮೂಲಕವೂ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.
ಕನ್ನಡಪ್ರಭ ವಾರ್ತೆ ತಿಪಟೂರು
ತಾಲೂಕಿನ ಕಸಬಾ ಹೋಬಳಿ, ಗುಡಿಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರುಗೊಂಡನಹಳ್ಳಿ ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ಒಂದು ವರ್ಷಗಳಿಂದಲೂ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು ಸಂಬಂಧಪಟ್ಟ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿಗಳ ಮೂಲಕವೂ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ. ಲಕ್ಷಾಂತರ ರೂ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದ್ದರೂ, ಸರಿಯಾದ ನಿರ್ವಹಣೆ ಇಲ್ಲದೆ ಕೆಟ್ಟು ಹೋಗಿವೆ. ಈ ನೀರಿನ ಘಟಕ ಮಾರುಗೊಂಡನಹಳ್ಳಿ, ನಾಗತೀಹಳ್ಳಿ, ಗೌಡನಕಟ್ಟೆ, ಗೊಲ್ಲರಹಟ್ಟಿ ಸೇರಿದಂತೆ ಸುತ್ತಮುತ್ತಲ ಹತ್ತಾರು ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಆಸರೆಯಾಗಿತ್ತು. ಆದರೆ ಈಗ ಶುದ್ಧ ನೀರಿಲ್ಲದೆ ಪರದಾಡುವಂತಾಗಿದೆ. ಗ್ರಾಮ ಪಂಚಾಯಿತಿಗೆ ದೂರು ನೀಡಿದರೆ ನಮಗೂ ಇದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಾರೆ. ಘಟಕವನ್ನು ಉದ್ಘಾಟನೆ ಮಾಡಿ ಹಣ ಬಿಡುಗಡೆ ಮಾಡಿದರೆ ತಮ್ಮ ಕೆಲಸ ಮುಗಿಯಿತು ಎಂಬಂತಾಗಿದೆ. ಉಪವಿಭಾಗಾಧಿಕಾರಿಗಳ ನೇತೃತ್ವದ ಟಾಸ್ಕ್ ಪೋರ್ಸ್ ಸಭೆಗಳಲ್ಲೂ ಈ ಬಗ್ಗೆ ಗಮನಹರಿಸಲಾಗಿತ್ತು. ಖುದ್ದು ಉಪವಿಭಾಗಾಧಿಕಾರಿಗಳು ಸಹ ಗ್ರಾಮೀಣ ಕುಡಿಯುವ ನೀರಿನ ಕಾರ್ಯನಿರ್ವಾಹಕ ಇಂಜಿನಿಯರ್ ಸೇರಿದಂತೆ ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದರೆ ವರ್ಷ ಕಳೆದರೂ ಯಾವ ಅಧಿಕಾರಿಗಳೂ ಗಮನಹರಿಸಿಲ್ಲ. ಕುಡಿಯುವ ನೀರಿನ ನಿರ್ವಹಣೆಯ ಕೊರತೆಯಿಂದ ಇಂತಹ ಎಷ್ಟೋ ಘಟಕಗಳು ತಾಲೂಕಿನಲ್ಲಿ ಕೆಟ್ಟು ನಿಂತಿವೆ. ಸಂಬಂದಪಟ್ಟ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಗ್ರಾಮೀಣರು ಶುದ್ಧ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಜನರ ತೆರಿಗೆ ಹಣದಲ್ಲಿ ಇಂತಹ ಯೋಜನೆಗಳನ್ನು ಸರ್ಕಾರ ನೀಡಿದ್ದರೂ ಪ್ರಯೋಜನವಿಲ್ಲದಂತಾಗಿದೆ. ಆದರೆ ಅದೇ ಜನರಿಗೆ ತೊಂದರೆಯಾದರೆ ಸರ್ಕಾರ ಏಕೆ ಕ್ರಮಕೈಗೊಳ್ಳುವುದಿಲ್ಲ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಬೇಸರ ತರಿಸಿದೆ. ಸಾರ್ವಜನಿಕರ ಉಪಯೋಗಕ್ಕೆ ಬಾರದೆ ಹೋದರೆ ಇಂತಹ ಯೋಜನೆಗಳನ್ನು ತಂದರೂ ಪ್ರಯೋಜನವಿಲ್ಲ. ಶುದ್ಧ ಕುಡಿಯುವ ನೀರಿಗಾಗಿ ಅಲೆದಾಡುವ ಸ್ಥಿತಿ ಹಳ್ಳಿಗಳಲ್ಲಿ ನಿರ್ಮಾಣವಾಗಿದೆ. ಕೂಡಲೆ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಬೇಕು. ಇಲ್ಲವಾದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.