ಸಿಆರ್ಎಫ್ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ ಅತ್ಯಂತ ಬ್ಯಾಡ್ ರೀಚ್ ಆಗಿರುವ ರಸ್ತೆಗಳನ್ನು ತಕ್ಷಣ ದುರಸ್ತಿ ಮಾಡಬೇಕು.
ಕಾರವಾರ: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಗುಂಡಿಗಳನ್ನು ದುರಸ್ತಿಗೊಳಿಸಿ ಮತ್ತು ಬಾಕಿ ಇರುವ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿಯ ಎಂಜಿನಿಯರ್ಗಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೂಚನೆ ನೀಡಿದರು.ಅವರು ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಗೋಕರ್ಣ ಸೇರಿದಂತೆ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ರಸ್ತೆಗಳ ಅವ್ಯವಸ್ಥೆಯ ಬಗ್ಗೆ ದೂರುಗಳನ್ನು ನೀಡುತ್ತಿದ್ದು, ಕೂಡಲೇ ಈ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಿಆರ್ಎಫ್ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ ಅತ್ಯಂತ ಬ್ಯಾಡ್ ರೀಚ್ ಆಗಿರುವ ರಸ್ತೆಗಳನ್ನು ತಕ್ಷಣ ದುರಸ್ತಿ ಮಾಡಬೇಕು. ಹೊನ್ನಾವರದ ಸೂಳೆಮುರ್ಕಿ ಕ್ರಾಸ್ನಲ್ಲಿ ಅಪಘಾತಗಳಾದಂತೆ ಸುರಕ್ಷಾತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊನ್ನಾವರದಲ್ಲಿ ಅವೈಜ್ಞಾನಿಕವಾಗಿ ಕಳಿಸಿರುವ ಡಿಪಿಆರ್ ರಿಜೆಕ್ಟ್ ಆಗಿದ್ದು, ಇದನ್ನು ಸರಿಪಡಿಸಿ ಪುನಃ ಕಳಿಸಬೇಕು. ಅಂಕೋಲಾದಲ್ಲಿ ಡಿಪಿಆರ್ ಅನುಮೋದನೆಯಾಗಿರುವ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಬೇಕು. ಶಿರಸಿ- ಹಾವೇರಿ ರಸ್ತೆಯನ್ನು ಸೂಕ್ತ ರೀತಿಯಲ್ಲಿ ಸರ್ವೇ ಮಾಡಿಸಿ, ಸಮಸ್ಯೆ ಇಲ್ಲದ ಕಡೆ ಕಾಮಗಾರಿ ಆರಂಭಿಸಲು ಅನುಮತಿ ನೀಡಬೇಕು. ಗ್ರಾಮ ಸಡಕ್ ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಮುಕ್ತಾಯಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗಳಿಗೆ ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ಕೈಗೊಂಡಿರುವ ಜಲಜೀವನ ಮಿಷನ್ ಕಾಮಗಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಕಳಪೆ ಕಾಮಗಾರಿಗಳು, ಗ್ರೌಂಡ್ ರಿಯಾಲಿಟಿಗೂ ಕಾಮಗಾರಿಗೂ ವ್ಯತ್ಯಾಸ, ಪೈಪ್ ಲೈನ್ ಮುಕ್ತಾಯಗೊಂಡರೂ ನೀರು ಸರಬರಾಜು ಆಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿ, ಬರಗಾಲದ ಈ ಸಮಯದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವುದು ಅತ್ಯಂತ ಅಗತ್ಯವಾಗಿದ್ದು, ಬಾಕಿ ಇರುವ ಸಣ್ಣ ಪುಟ್ಟ ದುರಸ್ತಿ ಕಾಮಗಾರಿಗಳನ್ನು ಕೈಗೊಂಡು ನೀರು ಒದಗಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.ಅಡಕೆ ಬೆಳಗಾರರಿಗೆ ದೋಟಿ ನೀಡುವಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಆದಷ್ಟು ಶೀಘ್ರದಲ್ಲಿ ಬಗೆಹರಿಸಲು ದಿಶಾ ಸಭೆಯ ಮೂಲಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವಂತೆ ತಿಳಿಸಿದ ಸಂಸದರು, ಜಿಲ್ಲೆಯನ್ನು ಕಾಫಿ ಬೋರ್ಡ್ನಲ್ಲಿ ಸೇರಿಸಲು ತೋಟಗಾರಿಕೆ ಇಲಾಖೆಯ ಮೂಲಕ ಪತ್ರ ಬರೆಯುವಂತೆ ಮತ್ತು ಜಿಲ್ಲೆಯಲ್ಲಿ ಕಾಫಿ ಬೆಳೆಯುವ ಬಗ್ಗೆ ಉತ್ತೇಜನ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಹರ್ಷಲ್ ಬೊಯರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್. ಮರಿಯಪ್ಪ, ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.