ಬಹುಕೋಟಿ ರುಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವಿರುದ್ಧ ರಾಜ್ಯ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಮಗ್ರ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬಹುಕೋಟಿ ರುಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವಿರುದ್ಧ ರಾಜ್ಯ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಮಗ್ರ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯ ವಿರುದ್ಧ ನಡೆಸಲಾದ ಪರಿಶೀಲನೆ ವೇಳೆ ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಅಕ್ರಮವಾಗಿ ಹಣ ಸಂಗ್ರಹಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಂಸ್ಥೆಯು ವಿವಿಧ ಹೂಡಿಕೆ ಯೋಜನೆಗಳ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಹೆಚ್ಚಿನ ಲಾಭದ ಭರವಸೆ ನೀಡುತ್ತಿತ್ತು. ಆದರೆ ಹೂಡಿಕೆಗೆ ಸಂಬಂಧಿಸಿದ ಅಪಾಯಗಳ ಬಗ್ಗೆ ಹೂಡಿಕೆದಾರರಿಗೆ ಸೂಕ್ತ ಮಾಹಿತಿ ನೀಡಲಾಗುತ್ತಿರಲಿಲ್ಲ. ಶೇ.5ರಷ್ಟು ಮಾಸಿಕ ಬಡ್ಡಿಯ ಭರವಸೆ ನೀಡಿ ಸಾರ್ವಜನಿಕರನ್ನು ಆಕರ್ಷಿಸಲಾಗುತ್ತಿತ್ತು ಎಂದರು.ಸಂಸ್ಥೆಯು ಸೆಬಿ ಅಥವಾ ಇತರೆ ನಿಯಂತ್ರಣ ಸಂಸ್ಥೆಗಳ ಮಾನ್ಯತೆ ಹೊಂದಿರುವ ಪೋರ್ಟ್‌ಫೋಲಿಯೊ ವ್ಯವಸ್ಥಾಪಕ ಸಂಸ್ಥೆಯಾಗಿಲ್ಲ. ಆದರೂ ಸಾರ್ವಜನಿಕರಿಂದ ಹಣ ಸಂಗ್ರಹಿಸಿರುವುದು ಕೆಪಿಐಡಿ ಕಾಯ್ದೆ ಉಲ್ಲಂಘನೆಯಾಗಿದೆ ಎಂದು ಹೇಳಿದರು.ಪ್ರಾಥಮಿಕ ಮಾಹಿತಿ ಪ್ರಕಾರ ಸುಮಾರು 6,500ಕ್ಕೂ ಹೆಚ್ಚು ಠೇವಣಿದಾರರಿಂದ ₹ 50 ಕೋಟಿಗೂ ಅಧಿಕ ಹಣ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದೆ. ಚೆಕ್ ಮೂಲಕ ಹಣ ಸಂಗ್ರಹಿಸಲಾಗಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಠೇವಣಿದಾರರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಅವರ ಹಿತಾಸಕ್ತಿಯನ್ನು ಕಾಪಾಡಲು ಬದ್ಧವಾಗಿದೆ. ಕೆಪಿಐಡಿ ಕಾಯ್ದೆಯಡಿ ಕ್ರಮ ಜರುಗಿಸಲಾಗುತ್ತಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಠೇವಣಿದಾರರ ಹಣವನ್ನು 6 ತಿಂಗಳ ಅವಧಿಯಲ್ಲಿ ಮರಳಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಸಂಸ್ಥೆಯ ಮುಖ್ಯಸ್ಥ ಬಾಲರಾಜ್ ಮಾನೆ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದ್ದು, ಅವರ ಚಲನವಲನಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ಇಲ್ಲಿ ದೂರುಗಳನ್ನು ನೀಡಬಹುದು. ದೂರುದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ, ಸಹಕಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ಯಶಸ್ವಿಯಾಗಿ ದಾಳಿ ನಡೆಸಿದೆ ಎಂದರು.ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಮಾತನಾಡಿ, ಆದಿತ್ಯರಾಜ್ ಕ್ಯಾಪಿಟಲ್ ಸಂಸ್ಥೆಯ ಪ್ರಮುಖ ಆರು ಜನರ ವಿರುದ್ಧ ತಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಸ್ಥೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಹಾಗೂ ಸೆಬಿ ನೋಂದಣಿ ಇಲ್ಲದಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಹೇಳಿದರು.ದೇಶದ ವಿವಿಧ ಭಾಗಗಳಲ್ಲಿಯೂ ಇದೇ ಮಾದರಿಯ ಹಣಕಾಸು ವಂಚನೆ ಪ್ರಕರಣಗಳು ದಾಖಲಾಗುತ್ತಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಂಸ್ಥೆಯ ಮುಖ್ಯಸ್ಥ ಬಾಲರಾಜ್ ಮಾನೆ ಪರಾರಿಯಾಗಿದ್ದು, ದೇಶ ತೊರೆಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಆಳವಾದ ತನಿಖೆಗಾಗಿ ಸಿಐಡಿ ತನಿಖೆಗೆ ಶಿಫಾರಸು ಮಾಡಲಾಗಿದೆ. ದಾಳಿ ವೇಳೆ ಲ್ಯಾಪ್‌ಟಾಪ್, ದಾಖಲೆಗಳು ಹಾಗೂ ಇತರೆ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾಲ್ಕು ವಿವಿಧ ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟಿರುವುದು ಪತ್ತೆಯಾಗಿದೆ. ತನಿಖೆಗೆ ಅಗತ್ಯ ಸಹಕಾರ ದೊರೆಯದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಲ್ಲಿ ಪರಿಶೀಲನೆ ಮುಂದುವರಿದಿದೆ ಎಂದು ಹೇಳಿದರು.