ಗಣರಾಜ್ಯೋತ್ಸವ: ಸಂಭ್ರಮ, ಸಡಗರದಿಂದ ಆಚರಿಸಲು ತೀರ್ಮಾನ

| Published : Jan 14 2024, 01:33 AM IST

ಗಣರಾಜ್ಯೋತ್ಸವ: ಸಂಭ್ರಮ, ಸಡಗರದಿಂದ ಆಚರಿಸಲು ತೀರ್ಮಾನ
Share this Article
  • FB
  • TW
  • Linkdin
  • Email

ಸಾರಾಂಶ

ಧ್ವಜಾರೋಹಣ, ಸಾಂಸ್ಕೃತಿಕ, ಕವಾಯತು, ಭಾಷಣ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಪೂರೈಕೆ ಹೀಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಸ್ವಾಗತ, ಧ್ವಜಾರೋಹಣ ಮತ್ತು ವೇದಿಕೆ, ಸಾಂಸ್ಕೃತಿಕ, ಕವಾಯತು, ಉಪಾಹಾರ, ಭಾಷಣ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಪೂರೈಕೆ ಹೀಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.

ಕಳೆದ ಬಾರಿಯಂತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತೆ ಸಲಹೆ ಮಾಡಿದರು. ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳಿಗೆ ಉಪಾಹಾರ ಕಲ್ಪಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ರಾಷ್ಟ್ರಕವಿ ಕುವೆಂಪು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ಮಂಗೇರಿರ ಮುತ್ತಣ್ಣ, ಸ್ಕ್ವಾಡ್ರನ್‌ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಗಳನ್ನು ಶುಚಿಗೊಳಿಸಿ, ದೀಪಾಲಂಕಾರ ಮಾಡುವಂತೆ ನಗರಸಭಾ ಅಧಿಕಾರಿಗಳಿಗೆ ತಿಳಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಚಿವರ ಭಾಷಣದಲ್ಲಿ ಬೆಳಕು ಚೆಲ್ಲುವಂತಾಗಬೇಕು. ಆ ನಿಟ್ಟಿನಲ್ಲಿ ಭಾಷಣ ಸಿದ್ಧಪಡಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಕ್ರೀಡಾಂಗಣ ಸ್ವಚ್ಛತೆ ಹಾಗೂ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ, ಕ್ರೀಡಾಂಗಣವನ್ನು ಒಂದು ವಾರಕ್ಕೆ ಮೊದಲೇ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಪೂರ್ವಾಭ್ಯಾಸ ಹಾಗೂ ಗಣರಾಜ್ಯೋತ್ಸವ ದಿನದಂದು ಕುಡಿಯುವ ನೀರು ಒದಗಿಸುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚಿಸಿದರು.

ಗಣರಾಜ್ಯೋತ್ಸವ ದಿನದಂದು ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು. ಈಗಾಗಲೇ ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕರಾದ ದಮಯಂತಿ, ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪೂರ್ವ ತಯಾರಿ ಮಾಡಿಕೊಳ್ಳುವ ಸಂದರ್ಭ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಗಣರಾಜ್ಯೋತ್ಸವ ಆಚರಣೆ ಸಂಬಂಧ ಹಲವು ಮಾಹಿತಿ ನೀಡಿದರು.

ಜಿ.ಪಂ. ಉಪಕಾರ್ಯದರ್ಶಿ ಧನರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ವಿಶಾಲ್ ಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ಜಿಲ್ಲಾ ಖಜಾನಾಧಿಕಾರಿ ಬಿ.ಎನ್.ರಘುನಾಥ್, ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಪಿಎಂಜಿಎಸ್‌ವೈ ಎಂಜಿನಿಯರ್ ಪ್ರಭು, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾದ ಅನಿತಾ ಭಾಸ್ಕರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಇತರರು ಇದ್ದರು.