ಲೀಡ್‌ ಭಾರತ ಬಲಿಷ್ಠ ರಾಷ್ಟ್ರವಾಗಲು ಸಂವಿಧಾನ ಅಡಿಪಾಯ- ಸಚಿವ ಸತೀಶ ಜಾರಕಿಹೊಳಿ

| Published : Jan 27 2024, 01:18 AM IST

ಸಾರಾಂಶ

ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ

ಕನ್ನಡಪ್ರಭ ವಾರ್ತೆ ಬೆಳಗಾವಿ

ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಪರಕೀಯರ ಆಡಳಿತದಲ್ಲಿದ್ದ ಭಾರತವು ಕೇವಲ ೭೫ ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟವಾಗಿ ಹೊರಹೊಮ್ಮಲು ಈ ಸಂವಿಧಾನವೇ ಬುನಾದಿಯಾಗಿದೆ ಎಂದರೆ ತಪ್ಪಾಗಲಾರದು. ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ ಎಂದು ಲೋಕೋಪಯೊಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನ ಜಾರಿಗೆ ಬಂದ ಈ ಅಮೃತಗಳಿಗೆಯಲ್ಲಿ ನಮ್ಮ ಭಾರತ ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ನಾಗರಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಗಣರಾಜ್ಯೋತ್ಸವ ದಿನವಾದ ಇಂದಿನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸಂವಿಧಾನ ಜಾಗೃತಿ ಜಾಥಾವನ್ನು ಸರ್ಕಾರ ಹಮ್ಮಿಕೊಂಡಿದೆ ಎಂದರು.ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರವು ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿನ ಜನರಲ್ಲಿ ಸಂವಿಧಾನದ ಕುರಿತು ಜಾಗೃತಿ ಮೂಡಿಸಲಿದೆ. ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ರಾಷ್ಟ್ರೀಯ ಮಟ್ಟದ ಸಮಾವೇಶ ಫೆಬ್ರವರಿ 25 ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಗಣರಾಜ್ಯೋತ್ಸವದ ಹೊಸ್ತಿಲಿನಲ್ಲಿ ಜ.18 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಇಡೀ ಜಗತ್ತಿಗೆ ಸಾಂಸ್ಕೃತಿಕ, ಸಾಮಾಜಿಕ ಮತ್ತು ರಾಜಕೀಯ ಚಿಂತನೆಗಳಿಗೆ ಹೊಸ ದಿಕ್ಕು ನೀಡಿದ ವಚನ ಚಳವಳಿಯ ನಾಯಕ ಬಸವಣ್ಣನವರನ್ನು ನಮ್ಮ ಸರ್ಕಾರವು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ ಎಂದು ಹೇಳಿದರು.

ನಾಗರೀಕ ಪೊಲೀಸ್ ಪಡೆ, ಕೆಎಸ್ಆರ್‌ಪಿ ಪುರುಷ ಮತ್ತು ಮಹಿಳಾ ತುಕಡಿ, ಅಬಕಾರಿ ಇಲಾಖೆ, ಗೃಹ ರಕ್ಷಕ ದಳ, ಎನ್.ಸಿ.ಸಿ, ಭಾರತ ಸೇವಾದಳ ಮಹೇಶ್ವರಿ ಅಂದ ಮಕ್ಕಳ ಶಾಲೆ ಸೇರಿದಂತೆ ವಿವಿಧ ಶಾಲಾ ಮಕ್ಕಳು ಪರೇಡನಲ್ಲಿ ಭಾಗವಹಿಸಿದ್ದವು.

ಸಂಸದೆ ಮಂಗಲ ಅಂಗಡಿ, ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ, ಕುಡಚಿ ಶಾಸಕ ಮಹೇಶ್ ತಮ್ಮಣ್ಣವರ, ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೋಲಿಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಪಂ ಸಿಇಓ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ,ಮೇಯರ್‌ ಶೋಭಾ ಸೋಮನಾಚೆ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.