ಸಾರಾಂಶ
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರ ನೇಮಿಸಲು ಆಗ್ರಹಿಸಿ ಶುಕ್ರವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
- ಹರಿಹರ ನಗರದಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
- - -ಕನ್ನಡಪ್ರಭ ವಾರ್ತೆ ಹರಿಹರ
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರ ನೇಮಿಸಲು ಆಗ್ರಹಿಸಿ ಶುಕ್ರವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಗಾಂಧಿ ಸರ್ಕಲ್‌ನಲ್ಲಿ ಕೆಲ ಸಮಯ ಮಾನವ ಸರಪಳಿ ರಚಿಸಿ, ನಂತರ ತಾಲೂಕು ಕಚೇರಿಗೆ ಆಗಮಿಸಿ ಗ್ರೇಡ್-೨ ತಹಸೀಲ್ದಾರ್ ಪುಷ್ಪಾವತಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿಜಯಕುಮಾರ್ ಮಾತನಾಡಿ, ಕಾಲೇಜು ಶಿಕ್ಷಣ ಇಲಾಖೆಯಡಿ ರಾಜ್ಯದಲ್ಲಿ ೪೩೨ ಪದವಿ ಕಾಲೇಜುಗಳ ೬,೦೦೦ ಕಾಯಂ ಉಪನ್ಯಾಸಕರ ಪೈಕಿ ೩,೦೦೦ಕ್ಕಿಂತ ಹೆಚ್ಚು ಉಪನ್ಯಾಸಕರು ನಿವೃತ್ತರಾಗಿದ್ದಾರೆ. ಉಳಿದಿರುವ ೩,೦೦೦ ಕಾಯಂ ಉಪನ್ಯಾಸಕರು, ೧೨,೦೦೦ ಅತಿಥಿ ಉಪನ್ಯಾಸಕರ ನೆರವಿನಿಂದ ರಾಜ್ಯದ ಪದವಿ ಕಾಲೇಜುಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಶ್ರಮಿಸುತ್ತಿರುವುದು ದುರಂತದ ಸಂಗತಿ. ಸರ್ಕಾರ ಕೂಡಲೇ ಕಾಯಂ ಉಪನ್ಯಾಸಕರ ನೇಮಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಎಬಿವಿಪಿ ಜಿಲ್ಲಾ ಸಂಚಾಲಕ ರಮೇಶ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ೧೨,೦೦೦ ಅತಿಥಿ ಉಪನ್ಯಾಸಕರ ನೇಮಕಕ್ಕೆ ೫೫,೦೦೦ ಅರ್ಜಿಗಳು ಸಲ್ಲಿಕೆಯಾಗಿವೆ. ರಾಜ್ಯದ ಎಲ್ಲ ವಿ.ವಿ.ಗಳಲ್ಲಿ ತರಗತಿಗಳು ಆರಂಭವಾಗಿ ತಿಂಗಳಾದರೂ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಕೈಗೊಂಡಿಲ್ಲ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡರಾದ ವೆಂಕಟೇಶ್, ಮಿಥುನ್, ಶಶಿಧರ್, ಪ್ರಜ್ವಲ್, ವಸಂತ ಕುಮಾರ, ರಾಜೇಶ್, ಸತೀಶ್ ಹಾಗೂ ಇತರರಿದ್ದರು.- - -
-22HRR06: ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕ್ಕೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹರಿಹರದ ಗಾಂಧಿ ಸರ್ಕಲ್‌ನಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು.