ಇಎಸ್ಐ ಆಸ್ಪತ್ರೆ ಸ್ಥಾಪನೆಗೆ ಕೇಂದ್ರಕ್ಕೆ ಮನವಿ

| Published : Oct 18 2024, 01:20 AM IST

ಇಎಸ್ಐ ಆಸ್ಪತ್ರೆ ಸ್ಥಾಪನೆಗೆ ಕೇಂದ್ರಕ್ಕೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ನವದೆಹಲಿಯಲ್ಲಿ ಶಾಸಕ ಡಾ.ಬೆಲ್ದಾಳೆ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೀದರ್

ಮಹಾರಾಷ್ಟ್ರ ಹಾಗೂ ತೆಲಂಗಾಣ ಗಡಿಯಲ್ಲಿರುವ ಬೀದರ್ ಜಿಲ್ಲೆಯಲ್ಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಇಎಸ್ ಐ ಆಸ್ಪತ್ರೆ ಸ್ಥಾಪಿಸುವಂತೆ ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಮನ್ಸೂಖ ಮಾಂಡವಿಯಾ, ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿರುವ ಅವರು, ಗಡಿ ಭಾಗದ ಕಾರ್ಖಾನೆಗಳು ಸೇರಿದಂತೆ ವಿವಿಧೆಡೆ ಉದ್ಯೋಗದಲ್ಲಿ ತೊಡಗಿರುವ ದುಡಿಯುವ ವರ್ಗದವರ ಆರೋಗ್ಯ ರಕ್ಷಣೆಗಾಗಿ ಇಎಸ್ಐ ಆಸ್ಪತ್ರೆ ಸ್ಥಾಪನೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಬೀದರ್ ನಗರದ ಹೊರವಲಯದ ಕೊಳಾರ್ ನಲ್ಲಿ ಕೈಗಾರಿಕಾ ವಸಾಹತು ಪ್ರದೇಶವಿದ್ದು, 1600 ಎಕರೆ ಜಮೀನಿದೆ. ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ವಸಾಹತು ಪ್ರದೇಶದಲ್ಲೂ ಸಹ ಸುಮಾರು 800 ಎಕರೆ ಜಾಗವಿದೆ. ಈ ಪ್ರದೇಶದಲ್ಲಿ ಸಣ್ಣ ಹಾಗೂ ಮಧ್ಯಮ ಪ್ರಮಾಣದ ನೂರಾರು ಕಾರ್ಖಾನೆಗಳಿವೆ. ಇಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆ ಸ್ಥಾಪಿಸುವುದು ಅತೀ ಅಗತ್ಯವಿದೆ ಎಂದು ಮನವರಿಕೆ ಮಾಡಿದ್ದಾರೆ.

ಬೀದರ್ ಜಿಲ್ಲೆಯು ಉತ್ತಮ ರೈಲು ಸಂಪರ್ಕ, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಹೊಂದಿದೆ. ಇಲ್ಲಿ ವಾಯುಪಡೆ ಕೇಂದ್ರದ ಜೊತೆಗೆ ನಾಗರಿಕ ವಿಮಾನ (ಏರ್ ಪೋರ್ಟ್) ಸೌಲಭ್ಯ ಇದ್ದು, ಉತ್ತಮ ಸಂಪರ್ಕ ಜಾಲದ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಉದ್ಯಮಿಗಳು ಬಂಡವಾಳ ಹೂಡುವ ಸಾಧ್ಯತೆಗಳಿವೆ. ಮುಂಬರುವ ದಿನಗಳಲ್ಲಿ ದೊಡ್ಡ ದೊಡ್ಡ ಕೈಗಾರಿಕೆಗಳು ಸ್ಥಾಪನೆಯಾಗಿ ಸಹಸ್ರಾರು ಕಾರ್ಮಿಕರಿಗೆ ಉದ್ಯೋಗ ಸಿಗಬಹುದಾಗಿದೆ. ಈ ಎಲ್ಲ ದೃಷ್ಟಿಯಿಂದ ಇಲ್ಲಿ ಸುಸಜ್ಜಿತ ಇಎಸ್ಐ ಆಸ್ಪತ್ರೆ ಸ್ಥಾಪನೆ ಮಾಡಿ ಗಡಿ ಭಾಗದ ಕಾರ್ಮಿಕರ ಹಿತ, ಆರೋಗ್ಯ ಕಾಪಾಡುವಂತೆ ವಿನಂತಿಸಿದ್ದಾರೆ.