ನೌಕರರ ಸಮ್ಮೇಳನದಲ್ಲಿ ಭಾಗವಹಿಸಲು ಮಹಿಪಾಲರಡ್ಡಿ ಜೋಳದಡಗಿ ಮನವಿ

| Published : Feb 26 2024, 01:34 AM IST

ಸಾರಾಂಶ

ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಈ ಐತಿಹಾಸಿಕ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೆ ಜಿಲ್ಲೆಯಿಂದ 2500 ನೌಕರರು ಭಾಗವಹಿಸಲಿದ್ದಾರೆ. ಜಿಲ್ಲೆಯ ಜನರು ಹೆಚ್ಚಾಗಿ ಪಾಲ್ಗೊಳ್ಳುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಫೆ.27 ಮಂಗಳವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಳಗ್ಗೆ 10:30ಕ್ಕೆ ನಡೆಯುವ ಕರ್ನಾಟಕ ರಾಜ್ಯ ಸರ್ಕಾರಿ ಮಹಾ ಸಮ್ಮೆಳನಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರಡ್ಡಿ ಪಾಟೀಲ್ ಜೋಳದಡಗಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ನಮ್ಮ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದಲ್ಲಿ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ನೌಕರರ ಸಮಸ್ಯೆಗಳನ್ನು ಚರ್ಚಿಸುವ ಸಮಯದಲ್ಲಿ ಮಹಾಸಮ್ಮೇಳನ ವಿಷಯ ಪ್ರಸ್ತಾಪವಾಗಿ ನಿಗದಿಪಡಿಸಲಾಗಿದೆ ಎಂದರು.

ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಮಾರಂಭಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಹಲವಾರು ಸಚಿವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ನೌಕರರ ಬೇಡಿಕೆಗಳಾದ ಹಳೆ ಪಿಂಚಣಿ ಯೋಜನೆ ಮರು ಜಾರಿ, 7ನೇ ವೇತನ ಆಯೋಗದ ವರದಿ ಅನುಷ್ಠಾನ ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಸೇರಿದಂತೆ ಹಲವಾರು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿ, ಅನುಷ್ಠಾನಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಈ ಐತಿಹಾಸಿಕ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೆ ಜಿಲ್ಲೆಯಿಂದ 2500 ನೌಕರರು ಭಾಗವಹಿಸಲಿದ್ದಾರೆ. ಇನ್ನು ಸಮಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಭಾಗವಹಿಸಿ, ಸಮ್ಮೇಳನ ಯಶಸ್ವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಸಂಘದ ಹಿರಿಯ ಉಪಾಧ್ಯಕ್ಷರಾದ ಬಸವರಾಜ ಕೆರೊಟಗಿ, ಕಾರ್ಯದರ್ಶಿ ಆರ್.ಎಂ. ನಾಟೇಕರ್, ಖಜಾಂಚಿ ಯಾಮರಡ್ಡಿ ಮುಂಡಾಸ ದುಪ್ಪಲ್ಲಿ, ಗೋವಿಂದಮೂರ್ತಿ, ಅನಂತಕುಮಾರ, ಮೋಹನ್ ಇದ್ದರು.