ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಜಿಲ್ಲೆಯಲ್ಲಿ ಡಿ.20ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಳ್ಳುವ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಬೇಕು ಎಂದು ಡಾ.ರಾಜಕುಮಾರ್ ಕಲಾ ಸಂಘದ ಅಧ್ಯಕ್ಷ ದೊಡ್ಡಯ್ಯ ತಿಳಿಸಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಕನ್ನಡ ಭಾಷೆಯ ಸಾಹಿತ್ಯದಲ್ಲಿ ಅಪಾರ ಕೊಡುಗೆ ನೀಡಿರುವ ಮಹನೀಯರನ್ನು ಸ್ಮರಿಸಿಕೊಳ್ಳಬೇಕಿದೆ, ಕನ್ನಡ ಭಾಷೆ ಅನ್ನಕೊಡುವ ಭಾಷೆಯಾಗಬೇಕು. ಕನ್ನಡದ ಶ್ರೀಮಂತಿಕೆಯನ್ನು ಇನ್ನಷ್ಟು ಹೆಚ್ಚಿಸಬೇಕೆಂಬ ಉದ್ದೇಶದೊಂದಿಗೆ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದರು.
ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ , ಪುಸ್ತಕ ಮಾರಾಟ ಸೇರಿದಂತೆ ಹಲವು ವಿಶೇಷತೆಯನ್ನು ಹೊಂದಿರುವುದರಿಂದ ಕನ್ನಡಾಭಿಮಾನಿಗಳಾದ ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ ಪ್ರಚಾರ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಸುಮಾರು 34 ವರ್ಷಗಳ ನಂತರ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಕನ್ನಡಿಗರಾದ ನಾವು ಮಾತೃಭಾಷೆಯ ಹಬ್ಬಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಚೇತನ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಜಾಥಾ ನಡೆಸಿ ಸಾಹಿತ್ಯ ಸಮ್ಮೇಳನದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಉಪನ್ಯಾಸಕ ನಿಂಗರಾಜು, ಮುಖ್ಯ ಶಿಕ್ಷಕ ಕುಮಾರಸ್ವಾಮಿ, ಕಸಾಪ ಪದಾಧಿಕಾರಿಗಳಾದ ಚುಂಚಯ್ಯ, ಕೃಷ್ಣ, ಚಿಕ್ಕಮರಿಗೌಡ, ಮಾದೇಗೌಡ, ಶಿವರಾಜು, ಕೃಷ್ಣ, ಸುರೇಶ್ ಇತರರಿದ್ದರು.---------
29ಕೆಎಂಎನ್ ಡಿ3ಮಳವಳ್ಳಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಭೆಯನ್ನು ಡಾ.ರಾಜಕುಮಾರ್ ಕಲಾಸಂಘದ ಅಧ್ಯಕ್ಷ ದೊಡ್ಡಯ್ಯ ಉದ್ಘಾಟಿಸಿದರು.