ಸಾರಾಂಶ
ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಹೊಸ ಕಂಚಿನ ಪರಶುರಾಮ ಮೂರ್ತಿ ನಿರ್ಮಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆಗಳು ಸೂಕ್ತ ತನಿಖೆ ನಡೆಸಬೇಕೆಂದು ಸಮಾಜ ಸೇವಕ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಉಮೇಶ್ ಕಲ್ಲೊಟ್ಟೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಕಾರ್ಕಳ
ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಹೊಸ ಕಂಚಿನ ಪರಶುರಾಮ ಮೂರ್ತಿ ನಿರ್ಮಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆಗಳು ಸೂಕ್ತ ತನಿಖೆ ನಡೆಸಬೇಕೆಂದು ಸಮಾಜ ಸೇವಕ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಉಮೇಶ್ ಕಲ್ಲೊಟ್ಟೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.ಅವರು ನೀಡಿರುವ ಮಾಹಿತಿಯ ಪ್ರಕಾರ, ಪರಶುರಾಮ ಥೀಮ್ ಪಾರ್ಕ್‌ಗೆ ಹೋಗುವ ಕಾಂಕ್ರೀಟ್ ರಸ್ತೆಯನ್ನು ಯಾವುದೇ ಇಲಾಖೆಯಿಂದ ಅನುಮತಿ ಪಡೆಯದೆ, ಸುಮಾರು 3 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಗುತ್ತಿಗೆದಾರರಿಗೆ ಬಿಲ್ಲು ಬಿಡುಗಡೆಯಾಗದೆ ಬಾಕಿ ಉಳಿದಿದೆ. ಈ ರಸ್ತೆಯ ನಿರ್ಮಾಣದಲ್ಲಿ ಅಕ್ರಮವಾಗಿ ಹಣ ಬಳಕೆಯಾಗಿರುವುದರಿಂದ ಜಿಎಸ್‌ಟಿ ಮತ್ತು ಆದಾಯ ತೆರಿಗೆ ಇಲಾಖೆಗಳು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.ಹೊಸ ಕಂಚಿನ ಮೂರ್ತಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ಪಿಐಎಲ್ ಪ್ರಕ್ರಿಯೆಯಲ್ಲಿರುವಾಗ, ಸರ್ಕಾರವು ಯಾವುದೇ ರೀತಿಯ ಹಣ ಬಿಡುಗಡೆ ಮಾಡಬಾರದು ಎಂದು ಮನವಿ ಸಲ್ಲಿಸಲಾಗಿದೆ. ಸರ್ಕಾರದಿಂದ ಶಿಲ್ಪಿಗೆ ಈಗಾಗಲೇ ಬಿಡುಗಡೆಯಾದ ಹಣ ವಸೂಲು ಮಾಡುವುದೇ ಸೂಕ್ತ ಕ್ರಮವಾಗಿದ್ದು, ಪುನಃ ಹಣ ಬಿಡುಗಡೆ ಮಾಡುವುದು ಕಾನೂನು ಬಾಹಿರವಾಗುತ್ತದೆ ಎಂದು ಅವರು ತಿಳಿಸಿದರು.ಈ ಕುರಿತು ಜಿಲ್ಲಾಧಿಕಾರಿ ಸೂಕ್ತ ತನಿಖೆ ನಡೆಸಿ, ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಬೇಕೆಂದು ಉಮೇಶ್ ಕಲ್ಲೊಟ್ಟೆ ಆಗ್ರಹಿಸಿದ್ದಾರೆ.