ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಿ

| Published : Aug 30 2025, 01:00 AM IST

ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾದ ಗೊಂದಲ ಪರಿಹರಿಸುವಂತೆ ಒತ್ತಾಯಿಸಿ ಎಐಡಿಎಸ್‌ಒ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

- ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ಎಐಡಿಎಸ್‌ಒ ಪ್ರತಿಭಟನೆ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾದ ಗೊಂದಲ ಪರಿಹರಿಸುವಂತೆ ಒತ್ತಾಯಿಸಿ ಎಐಡಿಎಸ್‌ಒ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ಸಂಘಟನೆ ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಪ್ರತಿಭಟಿಸಿದ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಾಜ್ಯದಲ್ಲಿ ಉಂಟಾಗಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಸರಿಪಡಿಸಲು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ನಂತರ ಉಪ ವಿಭಾಗಾಧಿಕಾರಿ ಕಚೇರಿ ಮುಖಾಂತರ ಸರ್ಕಾರ, ಉನ್ನತ ಶಿಕ್ಷಣ ಸಚಿವರಿಗೆ ಮನವಿ ಅರ್ಪಿಸಿದರು.

ಸಂಘಟನೆ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರ್ ಮಾತನಾಡಿ, ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಲು ರಾಜ್ಯ ಸರ್ಕಾರ ಮುಂದಾಗಬೇಕು. ಇಡೀ ರಾಜ್ಯಾದ್ಯಂತ ಪದವಿ ತರಗತಿ ಆರಂಭವಾಗಿ ತಿಂಗಳಾದರೂ ಈವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರೇ ಇಲ್ಲ. ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿವೆ ಎಂದರು.

ಇದುವರೆಗೂ ಪದವಿ ತರಗತಿಗಳು ಸರಿಯಾಗಿ ನಡೆಯದೇ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನೇ ಈಗ ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದರೂ ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿ ನನೆಗುದಿಗೆ ಬಿದ್ದಿದೆ ಎಂದು ತಿಳಿಸಿದರು.

ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರ ಪಾಲಿಸವುದು ಕಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾಗಿ ಸ್ಪಷ್ಟ ನಿಲುವು ತಾಳಬೇಕು. ಈ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಟಿ.ಎಸ್.ಸುಮನ್, ಗಂಗಾಧರ, ವರಲಕ್ಷ್ಮೀ, ಪ್ರೇಮಕುಮಾರ, ಅನುಷಾ, ಕವನ, ಮಧು, ಪರಶುರಾಮ, ಎಚ್.ವಿ. ಮಂಜುನಾಥ ಇತರರು ಪ್ರತಿಭಟನೆಯಲ್ಲಿದ್ದರು.

- - -

(ಕೋಟ್‌) ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಡವರು, ಮಧ್ಯಮ ವರ್ಗ, ರೈತಾಪಿ ವರ್ಗ, ಗ್ರಾಮೀಣ ಕುಟುಂಬಗಳ ಹಿನ್ನೆಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಓದುತ್ತಾರೆ. ಪದವಿವರೆಗೆ ಇಂತಹ ಕುಟುಂಬಗಳ ಮಕ್ಕಳು ಓದುವುದೇ ಕಷ್ಟ. ಅಂತಹದ್ದರಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿರುವ ಗೊಂದಲಗಳನ್ನು ಸರಿಪಡಿಸಿ, ಪದವಿ ಕಾಲೇಜುಗಳಲ್ಲಿ ಸಮರ್ಪಕವಾಗಿ ಬೋಧನಾ ಕಾರ್ಯವಾಗುವಂತೆ ಸರ್ಕಾರ ನೋಡಿಕೊಳ್ಳಲಿ.

- ಪೂಜಾ ನಂದಿಹಳ್ಳಿ, ಜಿಲ್ಲಾ ಅಧ್ಯಕ್ಷೆ.

- - -

-29ಕೆಡಿವಿಜಿ1.ಜೆಪಿಜಿ:

ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಸರಿಪಡಿಸಲು ಒತ್ತಾಯಿಸಿ ದಾವಣಗೆರೆ ಸರ್ಕಾರಿ ಪದವಿ ಕಾಲೇಜು ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಎಐಡಿಎಸ್‌ಒ ರಾಜ್ಯ ಮುಖಂಡ ಮಹಾಂತೇಶ್ ಬಿಳೂರ ಮಾತನಾಡಿದರು. -29ಕೆಡಿವಿಜಿ2.ಜೆಪಿಜಿ:

ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಸರಿಪಡಿಸಲು ಒತ್ತಾಯಿಸಿ ದಾವಣಗೆರೆ ಸರ್ಕಾರಿ ಪದವಿ ಕಾಲೇಜು ಮುಂಭಾಗ ಪ್ರತಿಭಟನೆ ನಡೆಯಿತು.