ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ತರಲು ಸಂಕಲ್ಪ ಮಾಡಿ

| Published : Dec 20 2023, 01:15 AM IST

ಸಾರಾಂಶ

2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ದೃಢ ಸಂಕಲ್ಪ ಮಾಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕರೆ ನೀಡಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಇಂಟೆಕ್‌ನ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು

ಇಂಟೆಕ್‌ ಜಿಲ್ಲಾ ಸಮಿತಿಯ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ದೃಢ ಸಂಕಲ್ಪ ಮಾಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕರೆ ನೀಡಿದರು

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಇಂಟೆಕ್‌ನ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು

ಕಾಂಗ್ರೆಸ್ ಪಕ್ಷ ಸರ್ವ ಜನಾಂಗದ ಶ್ರೇಯಸ್ಸು ಬಯಸುತ್ತದೆ. ದಲಿತರು, ಅಲ್ಪಸಂಖ್ಯಾತರು, ಶೋಷಿತರು, ಸೇರಿದಂತೆ ಎಲ್ಲಾ ವರ್ಗ, ಜಾತಿ, ಧರ್ಮಗಳನ್ನು ಒಟ್ಟಿಗೆ ಕೊಂಡೊಯ್ಯುವ ಮೂಲಕ ಎಲ್ಲರಿಗೂ ಸಾಮಾಜಿಕ ನ್ಯಾಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮುನ್ನಡೆಯುತ್ತಿದೆ. ದೇಶದ ಸಮಗ್ರತೆ ಮತ್ತು ಐಕ್ಯತೆಗಾಗಿ ಕಾಂಗ್ರೆಸ್ ಪಕ್ಷವನ್ನು ಈ ದೇಶದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ಅನಿವಾರ್ಯ ಎಂದು ಪ್ರತಿಪಾದಿಸಿದರು

ಇನ್ನು ಮೂರು-ನಾಲ್ಕು ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಇದನ್ನು ಸಮರ್ಥವಾಗಿ ಎದುರಿಸಲು ನಾವು ಸಜ್ಜಾಗಬೇಕು. ಕಾಂಗ್ರೆಸ್ ಸರ್ಕಾರದ ಕೊಡುಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮನೆ, ಮನೆಗೆ ತಲುಪಿಸುವುದರ ಮೂಲಕ ಹೆಚ್ಚು ಪ್ರಚಾರ ಮಾಡುತ್ತಲೇ ಚುನಾವಣೆಯನ್ನು ಗೆಲ್ಲಬೇಕು. ಅದಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಇನ್ನಷ್ಟು ಬಲಗೊಳ್ಳಬೇಕು ಎಂದರೆ ಇಂತಹ ಎಲ್ಲಾ ಘಟಕಗಳು, ವಿಭಾಗಗಳು ಸಕ್ರಿಯವಾಗಬೇಕು. ದುರ್ಗದಲ್ಲಿ ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದು, ಇಡೀ ಜಿಲ್ಲೆಯಲ್ಲಿ ಬಡಗಿ ನೌಕರರು, ಕಟ್ಟಡ ಕಾರ್ಮಿಕರು ಒಳಗೊಂಡಂತೆ ಎಲ್ಲಾ ವಿಧದ ಕಾರ್ಮಿಕರನ್ನು ಸಂಘಟಿಸಿರುವ ಎ.ಜಾಕೀರ್ ಹುಸೇನ್ ಅವರ ಜೊತೆ ನಾನು ಸದಾ ಇರುವುದಾಗಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು

ಕೆಪಿಸಿಸಿಯ ಇಂಟೆಕ್ ವಿಭಾಗದ ರಾಜ್ಯಾಧ್ಯಕ್ಷ ಜಿ.ಆರ್.ದಿನೇಶ್ ಮಾತನಾಡಿ, ಇದು ರಾಷ್ಟ್ರೀಯ ಮಟ್ಟದಲ್ಲಿ ಇರುವ ಸಂಘಟನೆ. ಕಳೆದ ಹಲವು ದಶಕಗಳಿಂದ ಕಾರ್ಯನಿರ್ವಹಿಸಿದ್ದು, ಈಗ ಒಂದು ವರ್ಷದಿಂದ ರಾಜ್ಯದಲ್ಲಿಯೂ ಅಸ್ತಿತ್ವಕ್ಕೆ ಬಂದಿದೆ, ಈ ಸಂಘಟನೆಯನ್ನು ಇಡೀ ರಾಜ್ಯದಲ್ಲಿ ಬಲಪಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡಿ ಸಮಿತಿಗಳನ್ನು ರಚನೆ ಮಾಡಲಾಗುತ್ತಿದೆ ಎಂದರು

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ, ಇಂಟೆಕ್‌ನಲ್ಲಿ ಕಟ್ಟಡ ಕಾರ್ಮಿಕರ ವಿಭಾಗವೂ ಒಂದಾಗಿದೆ. ಕಟ್ಟಡ ಕಾರ್ಮಿಕರು ಈ ದೇಶದ ಅಭಿವೃದ್ಧಿಯಲ್ಲಿ ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದರು.

ಕೆಪಿಸಿಸಿ ಇಂಟೆಕ್‌ನ ರಾಜ್ಯ ಉಪಾಧ್ಯಕ್ಷ ಎ.ಜಾಕೀರ್ ಹುಸೇನ್ ಮಾತನಾಡಿ, ಚಿತ್ರದುರ್ಗದಲ್ಲಿ ಕಳೆದು ೨೫ ವರ್ಷಗಳ ಹಿಂದೆ ತುಂಬಾ ಶ್ರಮವಹಿಸಿ ಬಡಗಿ ಕೆಲಸಗಾರರ ಸಂಘವನ್ನು ಸ್ಥಾಪಿಸಿದ್ದೇವೆ. ಆ ಮೂಲಕ ಇಡೀ ಜಿಲ್ಲೆಯ ವಿವಿಧ ವಲಯಗಳ ಕಾರ್ಮಿಕರವನ್ನೂ ಸೇರಿಸಿಕೊಂಡು ಬಲವಾದ ಸಂಘಟನೆ ಮಾಡಿದ್ದೇನೆ ಎಂದರು

ಕಾರ್ಯಕ್ರಮದಲ್ಲಿ ಕೆಪಿಸಿಸಿ ಇಂಟೆಕ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಅಲಿ, ರಾಷ್ಟ್ರೀಯ ಕಾರ್ಯದರ್ಶಿ ವಿಜಯ್ ನಾಯಕ್, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಜ್ಯೊತಿ, ಸಂಘಟನಾ ಕಾರ್ಯದರ್ಶಿ ಮಹಮದ್ ಖಾಸಿಂ ಭಾಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ನಗರಸಭೆ ಮಾಜಿ ಅಧ್ಯಕ್ಷ ಸರ್ದಾರ್, ಎಸ್ಟಿ ವಿಭಾಗದ ಅಧ್ಯಕ್ಷ ಅಂಜಿನಪ್ಪ, ಟಿಪ್ಪು ಅಭಿಮಾನಿಗಳ ಮಹಾವೇದಿಕೆಯ ಟಿಪ್ಪು ಖಾಸಿಂ ಅಲಿ, ಮುಖಂಡರಾದ ಅಶೋಕ್ ನಾಯ್ಡು, ಷಬ್ಬೀರ್, ಪತ್ರಕರ್ತ ಹನೀಫ್ ಇನ್ನಿತರರು ಹಾಜರಿದ್ದರು.