ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಗ್ರಾಮ ಪಂಚಾಯತಿಗಳು ಶ್ರೀ ಸಾಮಾನ್ಯರು ಹಾಗೂ ಗ್ರಾಮೀಣ ಜನರ ಕಲ್ಯಾಣಕ್ಕೆ ಪೂರಕವಾಗಿ ಕೆಲಸ ಮಾಡುವ ಮೂಲಕ ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಲು ಸಂಕಲ್ಪ ಮಾಡಬೇಕು ಎಂದು ಶಾಸಕ ಎಚ್.ಟಿ.ಮಂಜು ಕರೆ ನೀಡಿದರು.ತಾಲೂಕಿನ ಸಂತೆಬಾಚಹಳ್ಳಿ ಹೋಬಳಿಯ ಸಾರಂಗಿ ಗ್ರಾಮ ಪಂಚಾಯತ್ ಕೇಂದ್ರದಲ್ಲಿ ನಿರ್ಮಿಸಿರುವ ರಾಜೀವ್ ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಫಲವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಗ್ರಾಪಂ ಸದಸ್ಯರು, ಪಿಡಿಒ ಹಾಗೂ ಕಾರ್ಯದರ್ಶಿ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆಯುತ್ತಿದ್ದರೂ ಇಂದಿಗೂ ನನಸಾಗಿಲ್ಲ. ಎಲ್ಲೆಡೆ ಭ್ರಷ್ಟಾಚಾರ ಹೆಚ್ಚಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಫಲವು ಅರ್ಹ ಫಲಾನುಭವಿಗಳಿಗೆ ಸಿಗುವ ಬದಲಿಗೆ ಉಳ್ಳವರ ಪಾಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂವಿಧಾನದ ಆಶಯಗಳ ಈಡೇರಿಕೆಗಾಗಿ ನಾಗರಿಕ ಸಮಾಜದಲ್ಲಿ ವಾಸಿಸುವ ಪ್ರತಿಯೊಬ್ಬರೂ ತಮ್ಮ ಪಾಲಿನ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿ ಮುಗಿಸುವ ಮೂಲಕ ದನಿಯಿಲ್ಲದ ಬಡ ಜನರಿಗೆ ಶಕ್ತಿ ತುಂಬುವ ಕೆಲಸವನ್ನು ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಎಚ್ಚರದಿಂದ ಮಾಡಬೇಕು ಎಂದು ನಿರ್ದೇಶನ ನೀಡಿದರು.ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಹೇಮಾಕ್ಷಮ್ಮ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಾಜು, ತಾಪಂ ಇಒ ಸುಷ್ಮಾ, ತಹಸೀಲ್ದಾರ್ ಡಾ.ಯು.ಎಸ್. ಅಶೋಕ್, ತಾಲೂಕು ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ಸೇರಿ ಗ್ರಾಪಂ ಸದಸ್ಯರು ಮತ್ತು ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.