ಹುಕ್ಕೇರಿ ಸಮಗ್ರ ಅಭಿವೃದ್ಧಿಗೆ ಸಂಕಲ್ಪ: ಶಾಸಕ ನಿಖಿಲ್ ಕತ್ತಿ

| Published : Oct 28 2025, 01:00 AM IST

ಹುಕ್ಕೇರಿ ಸಮಗ್ರ ಅಭಿವೃದ್ಧಿಗೆ ಸಂಕಲ್ಪ: ಶಾಸಕ ನಿಖಿಲ್ ಕತ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಹುಕ್ಕೇರಿಯನ್ನು ಮಾದರಿ ಪಟ್ಟಣವನ್ನಾಗಿ ರೂಪಿಸಲು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಹುಕ್ಕೇರಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಡಲಾಗಿದೆ. ಈ ನಿಟ್ಟಿನಲ್ಲಿ ಹುಕ್ಕೇರಿಯನ್ನು ಮಾದರಿ ಪಟ್ಟಣವನ್ನಾಗಿ ರೂಪಿಸಲು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು.

ಪುರಸಭೆ ಮುಂಭಾಗದಲ್ಲಿ ಸೋಮವಾರ ಆಯೋಜಿಸಿದ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ₹1.10 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡ ಸೇತುವೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಹಾಯಧನದ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಪಟ್ಟಣದ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಇತರೆ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದರು.

ಪುರಸಭೆ ವ್ಯಾಪ್ತಿಯಲ್ಲಿ ವಸತಿ ರಹಿತರಿಗೆ ವಿವಿಧ ಯೋಜನೆಗಳಡಿ ಮನೆ ಮಂಜೂರು ಮಾಡಲಾಗಿದೆ. ಒಳಚರಂಡಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸಮರ್ಪಕ ಘನತ್ಯಾಜ್ಯ ವಿಲೇವಾರಿಗೆ ಕ್ರಮ ವಹಿಸಲಾಗಿದೆ. ಜನರಿಗೆ ಶುದ್ಧ ಮತ್ತು ನಿರಂತರ ಕುಡಿಯುವ ನೀರು ಪೂರೈಸಲಾಗುತ್ತಿದೆ. ಜೊತೆಗೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ, ಪುರಸಭೆ ಅಧ್ಯಕ್ಷ ಇಮ್ರಾನ್ ಮೋಮಿನ್, ಉಪಾಧ್ಯಕ್ಷೆ ಜ್ಯೋತಿ ಬಡಿಗೇರ, ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಂತೇಶ ತಳವಾರ, ಮುಖ್ಯಾಧಿಕಾರಿ ಈಶ್ವರ ಸಿದ್ನಾಳ, ಅಭಿಯಂತರ ರಾಜಶೇಖರ ಪಟ್ಟಣಶೆಟ್ಟಿ, ಗುತ್ತಿಗೆದಾರ ಮಲ್ಲಪ್ಪಾ ಬಿಸಿರೊಟ್ಟಿ, ಸದಸ್ಯರಾದ ಎ.ಕೆ.ಪಾಟೀಲ, ರಾಜು ಮುನ್ನೋಳಿ, ಆನಂದ ಗಂಧ, ಸದಾಶಿವ ಕರೆಪ್ಪಗೋಳ, ಚಂದು ಮುತ್ನಾಳೆ, ಭೀಮಶಿ ಗೋರಖನಾಥ, ರುಕ್ಮೀಣಿ ಹಳಿಜೋಳ, ಪ್ರಕಾಶ ಪಟ್ಟಣಶೆಟ್ಟಿ, ಸಲೀಮ್ ಕಳಾವಂತ, ಅಧಿಕಾರಿಗಳಾದ ರಾಘವೇಂದ್ರ ಭರಮನ್ನವರ, ಗೀತಾ ಕಾಕತಿಕರ, ಎಂ.ಬಿ.ಗುಡಕೇತರ, ರೇವತಿ ಆರ್., ಶಂಕರ ಕರನಿಂಗ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ವೈಯಕ್ತಿಕ ಸೌಲಭ್ಯದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನ ಹಾಗೂ ಸಣ್ಣ ಉದ್ದಿಮೆದಾರರಿಗೆ ಸಹಾಯಧನ ವಿತರಿಸಲಾಯಿತು. 58 ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಇಬ್ಬರು ಸಣ್ಣ ಉದ್ದಿಮೆ ಫಲಾನುಭವಿಗಳಿಗೆ ಸಹಾಯಧನ ಹಂಚಿಕೆ ಮಾಡಲಾಯಿತು. 8 ಜನ ವಿಕಲಚೇತನ ಫಲಾನುಭಿಗಳಿಗೆ ಬ್ಯಾಟರಿ ಚಾಲಿತ ತ್ರಿಚಕ್ರ ವಾಹನ ಹಾಗೂ ಪೌರ ಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನೂ ಸಹ ಇದೇ ವೇಳೆ ವಿತರಿಸಲಾಯಿತು. ಜೊತೆಗೆ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೊಸದಾಗಿ ಖರೀದಿಸಿದ ಟ್ರ್ಯಾಕ್ಟರ್ ಮತ್ತು ಟ್ರೇಲರನ್ನು ಪುರಸಭೆಗೆ ಹಸ್ತಾಂತರಿಸಲಾಯಿತು.