ಭಟ್ಕಳ: ಪಟ್ಟಣದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯೋಗದಲ್ಲಿ 2025-26ನೇ ಸಾಲಿನಲ್ಲಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ ಉದ್ಘಾಟಿಸಿದರು.

ಆನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ನಾಡು ನುಡಿಯ ಅಭಿಮಾನ ಸದಾ ಉಳಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ, ಪಠ್ಯ ಪುಸ್ತಕದ ಆಚೆಗೂ ಜ್ಞಾನ ವಿಸ್ತರಿಕೊಂಡು ನಿಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಬೆಳೆಯಬೇಕು. ಮೊಬೈಲನ್ನು ಜ್ಞಾನ ವೃದ್ಧಿಸಿಕೊಳ್ಳಲು ಮಾತ್ರ ಬಳಸಿಕೊಂಡು ದಿನಪತ್ರಿಕೆ, ಸಾಹಿತ್ಯಕ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ ಡಿ.ಬಿ. ನಾಯ್ಕ, ಸಾಹಿತಿ ಮಾನಾಸುತ ಶಂಭು ಹೆಗಡೆ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್ ಕೆರೆಕಟ್ಟೆ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ ಶಿರೂರು ಸಾಂದರ್ಭಿಕವಾಗಿ ಮಾತನಾಡಿದರು.

ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. 36 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ ದಿ ನ್ಯೂ ಇಂಗ್ಲಿಷ್ ಶಾಲೆಯ ನಿವೃತ್ತ ಮುಖ್ಯಾಧ್ಯಾಪಕ ಆರ್.ಡಿ. ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆರೆಕಟ್ಟೆ ಅವರನ್ನು ಗೌರವಿಸಲಾಯಿತು.


ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪಿ.ಆರ್. ನಾಯ್ಕ ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಮಂಜುನಾಥ ನಾಯಕ ಉಪಸ್ಥಿತರಿದ್ದರು. 2025-26ನೇ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕ ಗಳಿಸಿದ 99 ವಿದ್ಯಾರ್ಥಿಗಳನ್ನು ಹಾಗೂ ಅವರ ಸಾಧನೆಗೆ ಬೆಂಬಲವಾಗಿ ನಿಂತ 25 ಕನ್ನಡ ಭಾಷಾ ಶಿಕ್ಷಕರನ್ನು ಗೌರವಿಸಲಾಯಿತು.

ಕಸಾಪ ಗೌರವ ಕೋಶಾಧ್ಯಕ್ಷ ಶ್ರೀಧರ್ ಶೇಟ್ ಕಾರ್ಯಕ್ರಮ ನಿರೂಪಿಸಿದರು. ಆನಂದಾಶ್ರಮ ಪ್ರೌಢಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.