ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಬೇಕು.
ಗದಗ: ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವಲ್ಲಿ ಅಧಿಕಾರಿಗಳು ಮಕ್ಕಳಿಗೆ ನಿರಾಶೆಯಾಗದಂತೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅವರ ಬೇಡಿಕೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಸಲಹೆ ನೀಡಿದರು.ಬುಧವಾರ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮಕ್ಕಳ, ಮಹಿಳಾ ಹಾಗೂ ವಿಶೇಷಚೇತನರ ಗ್ರಾಮಸಭೆಯಲ್ಲಿ ಮಾತನಾಡಿದರು.
ಮಕ್ಕಳ ಬೇಡಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಅವರಿಗೆ ನಿರಾಶೆಯಾದರೆ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಬೇಕು ಎಂದ ಅವರು, ಈ ಪ್ರೌಢಶಾಲೆಯ ಮೂಲ ಸೌಲಭ್ಯದ ಅಭಿವೃದ್ಧಿಗಾಗಿ ಶಾಸಕರ ಅನುದಾನದಲ್ಲಿ ₹5 ಲಕ್ಷ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ತಿಳಿವಳಿಕೆ ನೀಡುವ ಸಲುವಾಗಿ ಇಂತಹ ಗ್ರಾಮಸಭೆಗಳಿಂದ ತಿಳಿವಳಿಕೆ ಬರುತ್ತದೆ. ಈ ದಿಸೆಯಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಅಧಿಕಾರಿಗಳು ಅವರ ಸಮಸ್ಯೆಗೆ ಸ್ಪಂದಿಸಬೇಕು ಎಂದರು.ಬಿಇಒ ವಿ.ವಿ. ನಡುವಿನಮನಿ, ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಅಧ್ಯಕ್ಷ ಕೆ.ಎಸ್. ಪೂಜಾರ ಮಾತನಾಡಿದರು. ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ, ಜಿಪಂ ಯೋಜನಾಧಿಕಾರಿ ಎಂ.ವಿ. ಚಳಗೇರಿ, ತಾಪಂ ಇಒ ಮಲ್ಲಯ್ಯ ಕೊರವನವರ, ಸಮಾಜ ಕಲ್ಯಾಣ ಇಲಾಖೆಯ ನಂದಾ ಹನಬರಟ್ಟಿ, ಗ್ರಾಮೀಣ ಸಿಪಿಐ ಸಿದ್ಧರಾಮೇಶ ಗಡೇದ, ವಿದ್ಯಾರ್ಥಿ ಪ್ರತಿನಿಧಿಗಳಾದ ನಂದೀಶ ಕಲಬಂಡಿ, ಪಾರ್ವತಿ ಪಾಟೀಲ ಗವಿಶಿದ್ದಪ್ಪ ಯಲಿಶಿರುಂಜ, ರಮಾಜಾನ ತಹಶೀಲ್ದಾರ, ಗ್ರಾಪಂ ಸದಸ್ಯರು ಇದ್ದರು. ಪಿಡಿಒ ಅಮೀರನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವೈ.ವೈ. ಬೆಟಗೇರಿ ನಿರೂಪಿಸಿದರು. ಕಾರ್ಯದರ್ಶಿ ಎಂ.ಎ. ಗಾಜಿ ವಂದಿಸಿದರು.