ಸಾರಾಂಶ
ಮುಧೋಳ ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಚಾಲನೆ ನೀಡಿದರು.
ಕನ್ನಡ ಪ್ರಭ ವಾರ್ತೆ ಮುಧೋಳ
ತಾಲೂಕಿನಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳು ಮತ್ತು ಬೇಡಿಕೆಗಳಿದ್ದು, ಸಾರ್ವಜನಿಕರು ಆಯಾ ಇಲಾಖೆಗಳ ಮೂಲಕ ತಮ್ಮ ಅಹವಾಲು ಸಲ್ಲಿಸಿದ್ದಾರೆ, ಈ ಅಹವಾಲುಗಳನ್ನು ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿರುವ ಸಮಸ್ಯೆಗಳಿಗೆ ತುರ್ತು ಪರಿಹಾರ ನೀಡಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ, ತಾಪಂ ಹಾಗೂ ತಾಲೂಕು ಮಟ್ಟದ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮುಧೋಳ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಪ್ರಮುಖವಾಗಿ ಕಬ್ಬಿಗೆ ವೈಜ್ಞಾನಿಕ ದರ ನಿಗದಿಪಡಿಸುವುದು, ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಿಸುವುದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಉಪಕರಣಗಳನ್ನು ಸಮರ್ಪಕವಾಗಿ ವಿತರಿಸುವುದು, ವೈಯಕ್ತಿಕ ಸಮಸ್ಯೆಗಳ ಕುರಿತು ಜನರು ಅಹವಾಲು ಸಲ್ಲಿಸಿದ್ದಾರೆ. ಅವುಗಳ ಪರಿಹಾಯಕ್ಕೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿ.ಪಂ ಸಿಇಒ ಶಶಿಧರ ಕುರೇರ, ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಹಸೀಲ್ದಾರ್ ವಿನೋದ ಹತ್ತಳ್ಳಿ, ತಾ.ಪಂ ದೊಓ ಸಂಜೀವ ಹಿಪ್ಪರಗಿ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.