ಸಾರಾಂಶ
ಕನಕಪುರ ತಾಲೂಕು ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆಗಳಿಗೆ ಕೂಡಲೇ ಸ್ಪಂದಿಸಿ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡುವಂತೆ ಜಿಲ್ಲಾಧಿಕಾರಿ ಯಶವಂತ್ ಗುರುಕಾರ್ ಹೇಳಿದರು. ಕನಕಪುರದಲ್ಲಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆಕನ್ನಡಪ್ರಭ ವಾರ್ತೆ ಕನಕಪುರ
ತಾಲೂಕು ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆಗಳಿಗೆ ಕೂಡಲೇ ಸ್ಪಂದಿಸಿ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡುವಂತೆ ಜಿಲ್ಲಾಧಿಕಾರಿ ಯಶವಂತ್ ಗುರುಕಾರ್ ಹೇಳಿದರು.ಸೋಮವಾರ ನಗರಸಭಾ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಹೆಚ್ಚಾಗಿ ಅಲೆದಾಡುತ್ತಿರುವ ಬಗ್ಗೆ ವ್ಯಾಪಕ ದೂರಿದೆ. ಈ ಇಲಾಖೆಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಿಗರು ಸಾರ್ವಜನಿಕ ಸಮಸ್ಯೆಗೆ ಹೆಚ್ಚಿನ ಹೊತ್ತು ನೀಡಬೇಕು. ಇವರು ತಮ್ಮ ಕೇಂದ್ರ ಸ್ಥಾನಗಳಲ್ಲಿ ವಾಸವಿರಬೇಕು. ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಕೇಂದ್ರ ಸ್ಥಾನದಲ್ಲಿ ಪಡೆದು ಅವರ ಸಮಸ್ಯೆಗೆ ಸ್ಪಂದಿಸಬೇಕು ಎಂದರು.
ಗ್ರಾಮೀಣ ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ಸಾವು ನೋವುಗಳು ಹೆಚ್ಚು ಸಂಭವಿಸುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳ ಚಲನವಲನಗಳ ಮೇಲೆ ನಿಗಾ ಇಟ್ಟು ನಿಯಂತ್ರಿಸಿ ರೈತರ ಪ್ರಾಣ ಹಾಗೂ ಬೆಳೆ ರಕ್ಷಣೆಗೆ ಮುಂದಾಗಬೇಕೆಂದು ಸೂಚಿಸಿದರು.ರಾಜ್ಯವ್ಯಾಪಿ ಡೆಂಘೀ ಜ್ವರ ವ್ಯಾಪಕವಾಗಿ ಹರಡುತ್ತಿದ್ದು ನಗರಸಭೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ತಾಲೂಕು ಆರೋಗ್ಯ ಇಲಾಖೆ ಈ ರೋಗದ ಬಗ್ಗೆ ಮಾಹಿತಿ ಹಾಗೂ ಎಚ್ಚರದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ತಿಳಿಸಿದರು.
ಸಭೆಯಲ್ಲಿ ತಹಸೀಲ್ದಾರ್ ಸ್ಮಿತಾ ರಾಮು, ನಗರಸಭಾ ಆಯುಕ್ತ ಎಂ.ಎನ್.ಮಹಾದೇವ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಮೋಹನ್ ಬಾಬು, ಡಿಡಿಎಲ್ಆರ್ ಹನುಮಪ್ಪ, ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇತರರಿದ್ದರು.