ಸಾರಾಂಶ
ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಭೂಮರೆಡ್ಡಿ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕೊಪ್ಪಳದಲ್ಲಿ ಉಕ್ಕು ಕೈಗಾರಿಕೆ ಸ್ಥಾಪನೆ ಮಾಡದಂತೆ ಮನವಿ ಮಾಡಿದರು.
ಕೊಪ್ಪಳ: ಬಲ್ದೋಟ ಸಮೂಹದ ಉದ್ದೇಶಿತ ₹54 ಸಾವಿರ ಕೋಟಿ ವೆಚ್ಚದ ಉಕ್ಕು ಕೈಗಾರಿಕಾ ಘಟಕದ ಸ್ಥಾಪನೆ ವಿರುದ್ಧ ವ್ಯಕ್ತವಾಗುತ್ತಿರುವ ವಿರೋಧ ಗಮನದಲ್ಲಿಟ್ಟುಕೊಂಡು ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕ ಹೇಳಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜೆಡಿಎಸ್ ಪದಾಧಿಕಾರಿಗಳು, ಬಲ್ದೋಟ ಸಮೂಹ ಹಾಗೂ ರಾಜ್ಯ ಸರ್ಕಾರ ಉಕ್ಕು ಘಟಕ ಸ್ಥಾಪನೆಗೆ ಒಪ್ಪಂದ ಮಾಡಿಕೊಂಡ ಆನಂತರ ಕೊಪ್ಪಳದಲ್ಲಿ ವ್ಯಕ್ತವಾದ ವಿರೋಧ ಗಮನದಲ್ಲಿಟ್ಟುಕೊಂಡು ಶುಕ್ರವಾರ ಬೆಳಗ್ಗೆ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಭೂಮರೆಡ್ಡಿ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಜೆ.ಪಿ. ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಘಟಕದ ಸ್ಥಾಪನೆಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಮಾಹಿತಿ ನೀಡಿ ಮಧ್ಯಪ್ರವೇಶಿಸುವಂತೆ ಮನವಿ ಪತ್ರ ಸಲ್ಲಿಸಿದರು.ಸಮುದಾಯದ ಆರೋಗ್ಯ ಹಾಗೂ ಕೃಷಿ ಕ್ಷೇತ್ರಗಳ ಮೇಲೆ ಮಾರಕ ಪೆಟ್ಟು ನೀಡುವ ಈ ಯೋಜನೆ ಯಾವುದೇ ಕಾರಣಕ್ಕೂ ಅನುಷ್ಠಾನವಾಗಬಾರದು. ಕೇಂದ್ರ ಸರ್ಕಾರದ ನಿಯಮಾವಳಿಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಅಭಿವೃದ್ಧಿಗೆ ಕೈಗಾರಿಕಾ ಘಟಕಗಳ ಸ್ಥಾಪನೆ ಅಗತ್ಯ. ಆದರೆ ಸಮುದಾಯದ ಆರೋಗ್ಯ, ಪರಿಸರ ಹಾಗೂ ಕೃಷಿ ಕ್ಷೇತ್ರಗಳಿಗೆ ಮಾರಕವಾಗುವ ಯಾವುದೇ ಯೋಜನೆಗಳನ್ನು ಒಪ್ಪಲಾಗದು. ಕೊಪ್ಪಳ ಜನತೆಯ ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು ಎಂದಿದ್ದಾರೆ.