ಜಿಲ್ಲೆಯ ಸಮಸ್ಯೆಗೆ ಸ್ಪಂದಿಸುವೆ: ಅಂಜಲಿ

| Published : Mar 27 2024, 01:03 AM IST

ಸಾರಾಂಶ

ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಸೇರಿದಂತೆ ಎಲ್ಲರಿಗೂ ಅನುಕೂಲವಾಗಿದೆ ಎಂದು ಅಂಜಲಿ ನಿಂಬಾಳ್ಕರ ತಿಳಿಸಿದರು.

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಜನರ ಸಮಸ್ಯೆಗೆ ಪ್ರಾಮಾಣಿಕವಾಗಿ ಸ್ಪಂದಿಸಿ ಬಗೆಹರಿಸಲು ಪ್ರಯತ್ನ ಮಾಡುತ್ತೇನೆ. ಈ ಲೋಕಸಭಾ ಚುನಾವಣೆ ಅನ್ಯಾಯ ವಿರುದ್ಧ, ನ್ಯಾಯದ ಪರವಾಗಿ ನಡೆಯುತ್ತಿದ್ದು, ಜಿಲ್ಲೆಯ ಜನತೆ ನನ್ನನ್ನು ಅತ್ಯಧಿಕ ಮತಗಳಿಂದ ಬೆಂಬಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳವಾರ ಪಟ್ಟಣದ ಅರ್ಬನ್ ಬ್ಯಾಂಕ್ ಸಭಾಂಗಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಸೇರಿದಂತೆ ಎಲ್ಲರಿಗೂ ಅನುಕೂಲವಾಗಿದೆ ಎಂದರು. ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ನಮ್ಮ ಸರ್ಕಾರ ಯಾವುದೇ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ ಎಂದ ಅವರು, ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದಿಂದ ಬಡವರಿಗೆ, ಯುವಕರಿಗೆ ಯಾವುದೇ ಪ್ರಯೋಜನವಾಗಿಲ್ಲ. ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಸುಳ್ಳು ಭರವಸೆಯನ್ನು ನೀಡಿದ್ದನ್ನು ಯುವಜನತೆ ಮರೆತಿಲ್ಲ ಎಂದ ಅವರು, ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಜನತೆ ಬದಲಾವಣೆ ಬಯಸುತ್ತಿದ್ದಾರೆಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು, ಬಿಜೆಪಿಗರು ಬರೀ ಸುಳ್ಳನ್ನೇ ಹೇಳುತ್ತಾರೆ. ಆದರೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ನುಡಿದಂತೆ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರು ಖಾನಾಪುರದಲ್ಲಿ ಈ ಹಿಂದೆ ಶಾಸಕಿಯಾಗಿ ಉತ್ತಮ ಕೆಲಸ ಮಾಡಿದ್ದು, ಇದೀಗ ಇವರು ಸಂಸದರಾದರೆ ಕ್ಷೇತ್ರದ ಸಮಸ್ಯೆ ಬಗ್ಗೆ ಸಮಗ್ರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಲಿದ್ದಾರೆ ಎಂದ ಅವರು, ಜಿಲ್ಲೆಯಲ್ಲಿ ಚಿತ್ರಣ ಬದಲಾಗಬೇಕಿದೆ. ಆ ನಿಟ್ಟಿನಲ್ಲಿ ಅಂಜಲಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಸಂಸತ್ತಿಗೆ ಕಳುಹಿಸಲು ನಾವೆಲ್ಲರೂ ಪ್ರಯತ್ನಿಸಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ ಗಾಂವಕರ್, ಉಪಾಧ್ಯಕ್ಷರಾದ ರಾಮಾ ಮೊಗೇರ, ಆರ್.ಎಚ್. ನಾಯ್ಕ, ಕಾಂಗ್ರೆಸ್ ಶಿಸ್ತು ಸಮಿತಿಯ ಸಂಚಾಲಕ ನಿವೇದಿತ ಆಳ್ವ ಮಾತನಾಡಿದರು.

ವೇದಿಕೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಯನಾ ನಾಯ್ಕ, ಜಿಪಂ ಮಾಜಿ ಅಧ್ಯಕ್ಷೆ ಜಯಶ್ರೀ ಮೊಗೇರ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮೀ ಗೊಂಡ, ಹಿರಿಯ ಕಾಂಗ್ರೆಸ್ ಮುಖಂಡ ಎಲ್.ಎಸ್. ನಾಯ್ಕ, ವೆಂಕ್ಟಯ್ಯ ಭೈರುಮನೆ, ಶ್ರೀಕಂಠ ಹೆಬ್ಬಾರ್, ಜಿಪಂ ಮಾಜಿ ಸದಸ್ಯ ಆಲ್ಬರ್ಟ ಡಿಕೋಸ್ಟ, ಪುರಸಭಾ ಸದಸ್ಯ ಅಬ್ದುಲ್ ರವೂಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುರೇಶ ನಾಯ್ಕ ನಿರೂಪಿಸಿದರು.ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಡಿಯೇ ಸಿದ್ಧ: ಸಚಿವ ಮಂಕಾಳುಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಿಯೇ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್. ವೈದ್ಯ ಭರವಸೆ ನೀಡಿದರು.ಭಟ್ಕಳದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಸಂಬಂಧಿಸಿದಂತೆ ಈ ಹಿಂದೆ ನೀಡಿದ ಹೇಳಿಕೆಗೆ ನಾನು ಈಗಲೂ ಬದ್ಧನಿದ್ದೇನೆ. ಸದ್ಯಕ್ಕೆ ಜಿಲ್ಲೆಯ ಮೆಡಿಕಲ್ ಕಾಲೇಜನ್ನು ಮೇಲ್ದರ್ಜೆಗೇರಿಸುವ ಕೆಲಸ ಮಾಡಲಾಗುತ್ತಿದೆ. ಇಲ್ಲಿ 450 ಬೆಡ್ ವ್ಯವಸ್ಥೆ ಮಾಡಿ ಜನತೆಗೆ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುವ ಕೆಲಸ ಮಾಡಲಾಗಿದೆ.

ಕಾಂಗ್ರೆಸ್‌ ಸರ್ಕಾರ ಪಕ್ಕಾ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬರುವುದು ಖಚಿತ ಎಂದು ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು, ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯ ಸಂಸದರಾಗಿ ಆಯ್ಕೆ ಆಗುವ ಅಂಜಲಿ ನಿಂಬಾಳ್ಕರ ಅವರು ಕೇಂದ್ರ ಮಂತ್ರಿ ಆಗಲಿದ್ದಾರೆಂದು ಭವಿಷ್ಯ ನುಡಿದರು.