ನೇಕಾರರ ಸಮಸ್ಯೆಗಳಿಗೆ ಸ್ಪಂದನೆ: ಬಿ.ನಾಗೇಂದ್ರಕುಮಾರ್

| Published : Oct 13 2025, 02:00 AM IST

ಸಾರಾಂಶ

ಕೈಮಗ್ಗ ಕ್ಷೇತ್ರಕ್ಕೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಸುವ ನಿಟ್ಟಿನಲ್ಲಿ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಡನೆ ಸಮಾಲೋಚಿಸಲಾಗುವುದು. ವಿಶೇಷವಾಗಿ ರಾಜ್ಯದ ವಿವಿಧ ಭಾಗಗಳಲ್ಲಿರುವ ನೇಕಾರ ಸಮುದಾಯದ ಸಮಸ್ಯೆಗಳನ್ನು ಆಲಿಸಿ ಅವರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ನೇಕಾರಿಕೆಯನ್ನು ನೆಚ್ಚಿಕೊಂಡು ಜೀವನ ನಡೆಸುತ್ತಿರುವ ನೇಕಾರ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಭರವಸೆ ನೀಡಿದರು.

ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಭಾನುವಾರ ನಗರದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದ ವೇಳೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ನೇಕಾರಿಕೆ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಆಧುನೀಕತೆಯ ಕಾರಣದಿಂದಾಗಿ ಸಾಕಷ್ಟು ಅಭಿವೃದ್ಧಿಯೂ ಕಂಡುಬಂದಿದೆ. ಪ್ರಸ್ತುತ ಸಂದರ್ಭಕ್ಕೆ ಪೂರಕವಾಗಿ ಉದ್ಯಮವನ್ನು ಅಭಿವೃದ್ಧಿಪಡಿಸುವುದು ನಿಗಮದ ಗುರಿಯಾಗಿದೆ ಎಂದು ಹೇಳಿದರು.

ಕೈಮಗ್ಗ ಕ್ಷೇತ್ರಕ್ಕೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಸುವ ನಿಟ್ಟಿನಲ್ಲಿ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಡನೆ ಸಮಾಲೋಚಿಸಲಾಗುವುದು. ವಿಶೇಷವಾಗಿ ರಾಜ್ಯದ ವಿವಿಧ ಭಾಗಗಳಲ್ಲಿರುವ ನೇಕಾರ ಸಮುದಾಯದ ಸಮಸ್ಯೆಗಳನ್ನು ಆಲಿಸಿ ಅವರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಾಗುವುದು ಎಂದರು.

ಸಚಿವರು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿ ಮತ್ತು ಕೆ.ಆರ್. ಪೇಟೆ ಕ್ಷೇತ್ರದ ಸ್ಥಳೀಯ ನಾಯಕರ ಸಹಕಾರದಿಂದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರೆತಿದ್ದುಘಿ, ಅಕಾರವನ್ನು ಜನಸೇವೆಗೆ ಬಳಸುವುದರ ಮೂಲಕ ಕ್ಷೇತ್ರದಲ್ಲಿ ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

ಮುಡಾ ನಿರ್ದೇಶಕ ಎನ್. ದೊಡ್ಡಯ್ಯ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್. ಸಂದೇಶ್, ಜಿಲ್ಲಾ ಕುಂಬಾರರ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಕೃಷ್ಣ, ಪರಿಶಿಷ್ಟ ಪಂಗಡಗಳ ಸಮುದಾಯ ಸಂಘಟನೆ ಅಧ್ಯಕ್ಷ ಶ್ರೀನಿವಾಸ್, ಮುಖಂಡರಾದ ಮಲ್ಲೇಶ್, ಮನೋಜ್ ನಾಯಕ್ ಇತರರು ಹಾಜರಿದ್ದರು.