ಕನ್ನಡಪ್ರಭ ವಾರ್ತೆ ಹಾಸನ
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್) ಹಾಗೂ ಜಿಲ್ಲಾಸ್ಪತ್ರೆಗೆ ಆಗಮಿಸುವ ಪ್ರತಿಯೊಬ್ಬ ರೋಗಿಗೂ ಗುಣಮಟ್ಟದ ಚಿಕಿತ್ಸೆ ಮತ್ತು ಮೂಲಭೂತ ಸೌಲಭ್ಯಗಳು ಯಾವುದೇ ಕೊರತೆಯಿಲ್ಲದೆ ದೊರೆಯಬೇಕು. ರೋಗಿಗಳನ್ನು ಖಾಸಗಿ ಆಸ್ಪತ್ರೆಗಳತ್ತ ತಿರುಗಿಸುವ ಪ್ರವೃತ್ತಿಗೆ ಅವಕಾಶ ನೀಡದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್. ಪಿ. ಸ್ವರೂಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮೊದಲು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿನ ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದಲ್ಲದೇ ರೋಗಿಗಳನ್ನು ಮಾತನಾಡಿಸಿ ಆರೋಗ್ಯ ಸೇವೆ ಬಗ್ಗೆ ವಿಚಾರಿಸಿದರು. ಅವರ ಅಹವಾಲುಗಳನ್ನು ಆಲಿಸಿದರು. ರೋಗಿಗಳಿಗೆ ಅಗತ್ಯ ವೈದ್ಯಕೀಯ ಸೇವೆಗಳನ್ನು ತಕ್ಷಣವೇ ಒದಗಿಸುವಂತೆ ವೈದ್ಯರು ಮತ್ತು ಸಿಬ್ಬಂದಿಗೆ ನಿರ್ದೇಶನ ನೀಡಿದರು. ನಂತರ ಹಿಮ್ಸ್ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಳಿಕ ನಡೆದ ಸಭೆಯಲ್ಲಿ ಜಿಲ್ಲಾಸ್ಪತ್ರೆ ಹಾಗೂ ಹಾಸನ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಆಸ್ಪತ್ರೆಗಳಲ್ಲಿನ ಮೂಲಸೌಕರ್ಯ, ವೈದ್ಯಕೀಯ ಸೌಲಭ್ಯಗಳು ಮತ್ತು ಸಿಬ್ಬಂದಿ ಕೊರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ರೋಗಿಗಳ ಆರೋಗ್ಯ ರಕ್ಷಣೆಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಲಾಖೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಹಿಮ್ಸ್ ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯಾಗಿದ್ದು, ಅದರ ಹೆಗ್ಗಳಿಕೆಗೆ ಧಕ್ಕೆಯಾಗದಂತೆ ಸೇವಾ ಗುಣಮಟ್ಟ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪ್ರತಿದಿನ ಸಾವಿರಾರು ಹೊರರೋಗಿಗಳು ಹಾಗೂ ನೂರಾರು ಒಳರೋಗಿಗಳು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಆಡಳಿತಾತ್ಮಕ ಅಥವಾ ವೈದ್ಯಕೀಯ ಲೋಪ ಉಂಟಾಗಬಾರದು ಎಂದು ಎಚ್ಚರಿಕೆ ನೀಡಿದರು. ಕೆಲ ವೈದ್ಯರು ಮತ್ತು ಸಿಬ್ಬಂದಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದ ಅವರು, ಇಂತಹ ಪ್ರಕರಣಗಳು ಮರುಕಳಿಸಿದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಇರುವ ಬಗ್ಗೆ ವಿವರವಾದ ವರದಿ ಸಲ್ಲಿಸಿದರೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ನೇಮಕಾತಿ ಪ್ರಕ್ರಿಯೆಗೆ ವೇಗ ನೀಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಸಮಾಲೋಚಿಸಿ ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಹಾಗೂ ಮುಂದಿನ ವಿಧಾನಮಂಡಲ ಅಧಿವೇಶನದಲ್ಲೂ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು. ಜಿಲ್ಲೆಯ ಕೆಲ ಆ್ಯಂಬುಲೆನ್ಸ್‌ಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾಗಿರುವ ಬಗ್ಗೆ ಬಂದಿರುವ ದೂರುಗಳ ಪರಿಶೀಲನೆ ನಡೆಸಿ, ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಜೊತೆಗೆ ಹಿಮ್ಸ್ ಆಸ್ಪತ್ರೆಯ ಮುಂಭಾಗದ ಕ್ರೀಡಾಂಗಣ ಅಭಿವೃದ್ಧಿ ಹಾಗೂ ಆಸ್ಪತ್ರೆ ಆವರಣದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಸಭೆಯಲ್ಲಿ ಹಿಮ್ಸ್ ನಿರ್ದೇಶಕ ಡಾ. ರಾಜಣ್ಣ, ರಾಘವೇಂದ್ರ ಪ್ರಸಾದ್ ಸೇರಿದಂತೆ ವೈದ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.