ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿದ್ದು, ಅವೆಲ್ಲಕ್ಕೂ ಅಧಿಕಾರಿಗಳ ಮೂಲಕ ಅಗತ್ಯ ಕ್ರಮ ಕೈಗೊಂಡು ಪರಿಹಾರ ಒದಗಿಸಲಾಗುವುದು ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದರು.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿದ್ದು, ಅವೆಲ್ಲಕ್ಕೂ ಅಧಿಕಾರಿಗಳ ಮೂಲಕ ಅಗತ್ಯ ಕ್ರಮ ಕೈಗೊಂಡು ಪರಿಹಾರ ಒದಗಿಸಲಾಗುವುದು ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ರಾಜಧಾನಿಗೆ ಬರುವ ಬದಲು ಆಯಾ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬಳಿಗೆ ಸರ್ಕಾರವೇ ತೆರಳಿ ಜನರ ಸಮಸ್ಯೆಗಳನ್ನು ಅರಿತು ಬಗೆಹರಿಸಬೇಕು ಎಂಬ ಪರಿಕಲ್ಪನೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ನಿರ್ದೇಶನದಂತೆ ಈ ಸಭೆ ನಡೆಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಈಗಾಗಲೇ 4 ರಿಂದ 6 ಬಾರಿ ಜನಸಂಪರ್ಕ ಸಭೆಗಳನ್ನು ಯಶಸ್ವಿಯಾಗಿ ನಡೆಸಿರುವ ಕೀರ್ತಿ ನಮ್ಮ ಉಸ್ತುವಾರಿ ಸಚಿವರಿಗೆ ಸಲ್ಲುತ್ತದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ರಾಜ್ಯದಲ್ಲೇ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಸುಮಾರು 2,012 ಕೋಟಿ ರು. ಈ ಐದು ಗ್ಯಾರಂಟಿ ಯೋಜನೆಗಳಿಗೆ ಈ ಜಿಲ್ಲೆಯಲ್ಲಿ ವಿನಿಯೋಗವಾಗುತ್ತಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಎರಡೂವರೆ ವರ್ಷದಲ್ಲಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ನಡೆಸಲಾಗಿದೆ. ಅದರಲ್ಲಿ ಒಟ್ಟು ನಾವು 829 ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಅವುಗಳಲ್ಲಿ 496 ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಆ ಪೈಕಿ ಶೇ.27 ರಷ್ಟು ಅರ್ಜಿಗಳನ್ನು ಸಕಾರಾತ್ಮಕವಾಗಿ ಇತ್ಯರ್ಥಪಡಿಸಿರುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳ ಜನತಾದರ್ಶನ ಕಾರ್ಯಕ್ರಮದಲ್ಲೂ ಈ ಜಿಲ್ಲೆಯ 49 ಅರ್ಜಿಗಳು ಸ್ವೀಕೃತಿಯಾಗಿವೆ. ಉಳಿದಂತೆ ಶಾಸಕರುಗಳು ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನತಾ ದರ್ಶನ ಮತ್ತು ಸಮ್ಮೇಳನಗಳನ್ನು ನಡೆಸಿದ್ದಾರೆ. ಅಲ್ಲದೆ, ಜಿಲ್ಲಾ ಪಂಚಾಯಿತಿಯಿಂದ ಗ್ರಾ.ಪಂ. ಮಟ್ಟದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ಡಿ.ರಾಜೇಗೌಡ, ಜಿ.ಎಚ್.ಶ್ರೀನಿವಾಸ್, ವಿಪ ಸದಸ್ಯ ಹರೀಶ್ ಕುಮಾರ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿಲ್ಲಾಮಟ್ಟ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಸಗ್ನಿ ಮಠ ಸಮೀಪದ ಮದ್ಯದಂಗಡಿ

ತೆರವಿಗೆ ಸಚಿವರ ಸೂಚನೆ ಚಿಕ್ಕಮಗಳೂರು: ಗಿರಿ ಮಾರ್ಗದ ಅತ್ತಿಗುಂಡಿ ಬಿಸಗ್ನಿ ಮಠ ಸಮೀಪ ಮದ್ಯ ಮಾರಾಟದ ಅಂಗಡಿಯನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಅದನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಜನಸಂಪರ್ಕ ಸಭೆಯಲ್ಲಿ ಗ್ರಾಮಸ್ಥರ ಪರವಾಗಿ ಸುರೇಂದ್ರ ಅವರು ಮಾತನಾಡಿ, ಮಠವಿರುವ ಸ್ಥಳದಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಮಠದಲ್ಲಿ ಪೂಜೆ ಮಾಡಲು ಅಡೆತಡೆಯಾಗುತ್ತಿದೆ. ಅದನ್ನು ತೆರವುಗೊಳಿಸುವಂತೆ ಸೂಚಿಸಿದರೂ ಅಧಿಕಾರಿಗಳು ಅದರ ಬಗ್ಗೆ ಗಮನಹರಿಸುತ್ತಿಲ್ಲ ಎಂದು ದೂರಿದರು.

ಅಕ್ರಮವಾಗಿ ಈ ಮದ್ಯದಂಗಡಿಯನ್ನು ತೆರೆದಿದ್ದರೆ ಕೂಡಲೇ ಮುಚ್ಚಿಸುವಂತೆ, ಒಂದು ವೇಳೆ ಪರವಾನಗಿ ಪಡೆದಿದ್ದರೂ ಪರವಾನಗಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದರಲ್ಲದೆ, ತಮ್ಮ ಊರಿಗೆ ಸಮಯಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡಲು ಸಮಸ್ಯೆಯಾಗುತ್ತಿದೆ ಎಂದು ನಿವೇದಿಸಿಕೊಂಡರು.

ಇದಕ್ಕೆ ಸ್ಪಂದಿಸಿದ ಸಚಿವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಗೌಡನಹಳ್ಳಿ ಗ್ರಾಮದ ಲೋಕೇಶ್ ಎಂಬುವರು ಕಳೆದು ಐದು ವರ್ಷಗಳಿಂದಲೂ ತಮ್ಮ ಊರಿಗೆ ನ್ಯಾಯಬೆಲೆ ಅಂಗಡಿ ಇಲ್ಲದೆ ಇರುವುದರಿಂದ ಪಡಿತರ ಪಡೆಯಲು ಪಕ್ಕದ ಊರಿನ ನ್ಯಾಯಬೆಲೆ ಅಂಗಡಿಗೆ ತೆರಳಬೇಕಾಗಿದ್ದು, ಪಡಿತರ ಪಡೆಯಲು ಹೋದ ಸಂದರ್ಭದಲ್ಲಿ ನ್ಯಾಯಬೆಲೆ ಅಂಗಡಿ ತೆರೆದಿರುವುದಿಲ್ಲ ಇಲ್ಲವೆ ಸರ್ವರ್ ಸಮಸ್ಯೆಯಿಂದ ತೊಂದರೆಯಾಗುತ್ತಿದೆ. ನಮ್ಮ ಊರಿಗೆ ನೂತನವಾಗಿ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಅವಕಾಶ ಮಾಡಿಕೊಡಬೇಕೆಂದು ಕೋರಿದರು.

ಹೀಗೆ ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಸಚಿವರ ಸಮ್ಮುಖದಲ್ಲಿ ಸಮಸ್ಯೆಗಳ ಬಗ್ಗೆ ಅಲವತ್ತುಕೊಂಡರು. ಒಟ್ಟು 123 ದೂರು ಅರ್ಜಿಗಳು ಸ್ವೀಕೃತಗೊಂಡಿದ್ದು, ಇವುಗಳಲ್ಲಿ 60 ಅರ್ಜಿದಾರರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ನಿವೇದಿಸಿಕೊಂಡರು. ಸಚಿವರು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳು ತುರ್ತು ಕ್ರಮ ವಹಿಸಿ ಎಂದು ಸೂಚಿಸಿದರು.