ಲ್ಲೆಯ ಎಲ್ಲಾ ಶಾಸಕರಿಂದ ಮತ್ತು ಅಧಿಕಾರಿಗಳಿಂದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಆಗಿರುವ ಬೆಳೆ ಹಾನಿ ಮತ್ತು ಇತರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಪರಿಹಾರ ಒದಗಿಸುವ ಕಾರ್ಯ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಕಾರವಾರ

ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿರುವ ಬೆಳೆ ಹಾನಿ, ರಸ್ತೆ, ಹಾನಿ ಕುಡಿಯುವ ನೀರು ಸಮಸ್ಯೆ, ಮತ್ತು ಹೆಸ್ಕಾಂ ಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಪರಿಶೀಲನೆ ನಡೆಸಿ, ತಕ್ಷಣದಲ್ಲಿ ಕೈಗೊಳ್ಳಬೇಕಾದ ತುರ್ತು ಪರಿಹಾರ ಕಾರ್ಯಗಳ ಕುರಿತು ಸೂಕ್ತ ಕ್ರಮಕೈಗೊಳ್ಳುವುದಾಗಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅತಿವೃಷ್ಟಿ, ಬರ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಶಾಸಕರಿಂದ ಮತ್ತು ಅಧಿಕಾರಿಗಳಿಂದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಆಗಿರುವ ಬೆಳೆ ಹಾನಿ ಮತ್ತು ಇತರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಪರಿಹಾರ ಒದಗಿಸುವ ಕಾರ್ಯ ಮಾಡಲಾಗುವುದು. ಅಡಕೆ ಗಿಡಗಳಿಗೆ ಬಾಧಿಸುತ್ತಿರುವ ಎಲೆಚುಕ್ಕಿ ರೋಗ, ಕೊಳೆ ರೋಗಗಳನ್ನು ತಡೆಗಟ್ಟುವ ಕುರಿತು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿರುವ ಸಮಸ್ಯೆಗಳಿಂದಾಗಿ ರೈತರಿಗೆ ಆರ್ಥಿಕವಾಗಿ ನಷ್ಟವಾಗಿದ್ದು, ರೈತರಿಗೆ ತುರ್ತಾಗಿ ಪರಿಹಾರ ಒದಗಿಸುವ ಕಾರ್ಯವಾಗಬೇಕಾಗಿದೆ. ಮುಂದಿನ ದಿನಗಳಲ್ಲಿ ಅಲ್ಪಾವಧಿ, ಮಧ್ಯಂತರ ಹಾಗೂ ದೀರ್ಘಾವಧಿ ಮೂರು ಹಂತಗಳಲ್ಲಿ ಪರಿಹಾರ ಒದಗಿಸುವ ಕಾರ್ಯ ಮಾಡಲಾಗುವುದು ಎಂದರು.

ಜಿಲ್ಲೆಯ ಎಲ್ಲ ಶಾಸಕರನ್ನು ಒಳಗೊಂಡು ಪಕ್ಷಾತೀತವಾಗಿ ಪ್ರತಿಯೊಂದು ಕ್ಷೇತ್ರದ ಕುರಿತು ಮಾಹಿತಿ ಪಡೆದು, ಆಗಿರುವ ಸಮಸ್ಯೆಯ ಕುರಿತು ವಿವಿಧ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವರದಿ ನೀಡಿ, ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಲಾಗುವುದು ಎಂದರು.

ಕೆಎಸ್‌ಎಂಸಿ&ಎ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ ಸೈಲ್, ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳು ಮಳೆಯಿಂದ ಹಾಳಾಗಿದ್ದು, ದುರಸ್ತಿಗೊಳಿಸುವ ಕಾರ್ಯ ಆಗಬೇಕಿದೆ, ಕೈಗಾ ರಸ್ತೆ ಹೆಚ್ಚಿನ ಪ್ರಮಾಣದಲ್ಲಿ ಹಾಳಾಗಿದ್ದು ತಕ್ಷಣದಲ್ಲಿ ದುರಸ್ತಿಯಾಗಬೇಕಿದೆ ಎಂದು ಒತ್ತಾಯಿಸಿದರು.

ಶಿರಸಿ -ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ, ಶಿರಸಿ ಭಾಗದಲ್ಲಿ ಗ್ರಾಮೀಣ ರಸ್ತೆಗಳು ಹಾಳಾಗಿವೆ. ಅಡಕೆ ಕೊಳೆರೋಗ ವ್ಯಾಪಕವಾಗಿದ್ದು ಇದಕ್ಕೆ ಸೂಕ್ತ ಔಷಧಿ ಕಂಡುಹಿಡಿದು ರೋಗಕ್ಕೆ ಪರಿಹಾರ ನೀಡಬೇಕಿದೆ ಎಂದು ಒತ್ತಾಯಿಸಿದರು.

ವಿಧಾನಪರಿಷತ್ ಶಾಸಕ ಗಣಪತಿ ಉಳ್ವೇಕರ್, ಹಾರವಾಡದಲ್ಲಿನ ಕಡಲ ಕೊರೆತಕ್ಕೆ ಶಾಶ್ವತ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದರು.

ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಮತ್ತಿತರರಿದ್ದರು.