ಭ್ರೂಣಲಿಂಗ ಪತ್ತೆ ಮಾಹಿತಿ ನೀಡಿದಲ್ಲಿ ಬಹುಮಾನ: ಡಾ. ಲೆಸ್ಸಿ ಲುವಿಸ್‌

| Published : Oct 25 2025, 01:01 AM IST

ಭ್ರೂಣಲಿಂಗ ಪತ್ತೆ ಮಾಹಿತಿ ನೀಡಿದಲ್ಲಿ ಬಹುಮಾನ: ಡಾ. ಲೆಸ್ಸಿ ಲುವಿಸ್‌
Share this Article
  • FB
  • TW
  • Linkdin
  • Email

ಸಾರಾಂಶ

ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆ ನಡೆಯಿತು.

ಉಡುಪಿ: ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಹಚ್ಚುವುದು, ಹತ್ಯೆ ಮಾಡುವುದು ಕಾನೂನಿನಡಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕೃತ್ಯ ಕಂಡು ಬಂದಲ್ಲಿ ಸಾರ್ವಜನಿಕರು ಸೂಕ್ತ ಪ್ರಾಧಿಕಾರಕ್ಕೆ ಮಾಹಿತಿ ನೀಡಿ ಸಹಕರಿಸಬೇಕು ಎಂದು ಜಿಲ್ಲಾ ಮಟ್ಟದ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಅಧ್ಯಕ್ಷೆ ಡಾ. ಲೆಸ್ಸಿ ಲುವಿಸ್ ಹೇಳಿದ್ದಾರೆ.ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಭ್ರೂಣಲಿಂಗ ಪತ್ತೆ ಮಾಡುವ ವ್ಯಕ್ತಿಗಳು, ಸ್ಕ್ಯಾನಿಂಗ್ ಸೆಂಟರ್‌ಗಳು ಹಾಗೂ ಆಸ್ಪತ್ರೆಗಳ ವಿರುದ್ಧ ಸಾರ್ವಜನಿಕರು ಮಾಹಿತಿ ನೀಡಿದ್ದಲ್ಲಿ ಅವರುಗಳಿಗೆ ಸರ್ಕಾರದ ವತಿಯಿಂದ 50,000 ರು. ದಿಂದ 1 ಲಕ್ಷ ರು. ವರೆಗೆ ಬಹುಮಾನ ನೀಡಲಾಗುವುದು. ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿ ಇಡಲಾಗುವುದು ಎಂದರು.ಭ್ರೂಣಲಿಂಗ ಪತ್ತೆ ಮಾಡುವ ವೈದ್ಯಾಧಿಕಾರಿಗಳು ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳ ಮಾಲೀಕರಿಗೆ ಕಾನೂನಿನಡಿ 10 ಸಾವಿರ ರು. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಇದೇ ಅಪರಾಧ ಪುನರಾವರ್ತನೆಯಾದಲ್ಲಿ 50 ಸಾವಿರ ರು. ದಂಡದೊಂದಿಗೆ 5 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದರು.

ಸಮಾಜದಲ್ಲಿ ಹೆಣ್ಣು ಮಕ್ಕಳು ಜೀವಿಸಲು ಅವಕಾಶ ಮಾಡಿಕೊಡಬೇಕು. ಅವರನ್ನು ಭ್ರೂಣದಲ್ಲಿಯೇ ಹತ್ಯೆ ಮಾಡಿದ್ದಲ್ಲಿ ಲಿಂಗಾನುಪಾತದಲ್ಲಿ ವ್ಯಸ್ಯಾಸವಾಗುತ್ತದೆ. ಜಿಲ್ಲೆಯಲ್ಲಿ 2025 ರ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗೆ 1000 ಗಂಡು ಮಕ್ಕಳಿಗೆ 997 ಹೆಣ್ಣು ಮಕ್ಕಳಿದ್ದಾರೆ ಎಂದರು.ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ,ಜಿಲ್ಲಾ ಆಸ್ಪತ್ರೆ ರೇಡಿಯಾಲಜಿಸ್ಟ್ ಡಾ. ಆಮ್ನಾ ಹೆಗ್ಡೆ, ಕೆ.ಎಂ.ಸಿ. ಮಣಿಪಾಲ ಪ್ರಸೂತಿತಜ್ಞ ಡಾ. ಪ್ರತಾಪ್ ಕುಮಾರ್, ಸಮಾಜ ಸೇವಕಿ ತಾರಾ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.