ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆ ಸರಿಯಾಗಿ ಪಾಲಿಸಿದರೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ರೀತಿಯ ಭಯ ಅಥವಾ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.
ಹೊಸಪೇಟೆ: ಮಾಹಿತಿ ಹಕ್ಕು ಕಾಯ್ದೆಯಡಿ ಎದುರಾಗುವ ಸವಾಲು,ಗೊಂದಲ ಹಾಗೂ ಕಾಯ್ದೆಯ ದುರುಪಯೋಗದ ಕುರಿತು ಅಧಿಕಾರಿಗಳಿಗೆ ಸ್ಪಷ್ಟ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದೆ. ಅಧಿಕಾರಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಗುರುವಾರ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಮಾಹಿತಿ ಹಕ್ಕು ಕಾಯ್ದೆ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದರ ಜತೆಗೆ, ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮ ನಿಗದಿತ ಉದ್ದೇಶದಂತೆ ಅನುಷ್ಠಾನಗೊಳ್ಳುತ್ತಿವೆಯೇ ಎಂಬುದನ್ನು ಸಾರ್ವಜನಿಕರು ತಿಳಿದುಕೊಳ್ಳಲು ಅವಕಾಶ ಕಲ್ಪಿಸಿರುವ ಮಹತ್ವದ ಕಾನೂನು ಅಸ್ತ್ರವಾಗಿದೆ. ಹೀಗಾಗಿ ಅಧಿಕಾರಿಗಳು ಕಾಯ್ದೆಯ ನಿಯಮ ಸಮರ್ಪಕವಾಗಿ ಅರಿತು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆ ಸರಿಯಾಗಿ ಪಾಲಿಸಿದರೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ರೀತಿಯ ಭಯ ಅಥವಾ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಅರ್ಜಿದಾರರು ಕಾನೂನುಬದ್ಧವಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿಯಿಂದ ಮಾಹಿತಿ ಕೇಳಿದಲ್ಲಿ ನಿಗದಿತ ಅವಧಿಯೊಳಗೆ ಸಂಬಂಧಿಸಿದ ಮಾಹಿತಿ ಒದಗಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಸ್ಪಷ್ಟಪಡಿಸಿದರು.ಕೆಲವೊಮ್ಮೆ ಅಧಿಕಾರಿಗಳ ಮೇಲೆ ಒತ್ತಡ ಹೇರುವ ಅಥವಾ ದುರುದ್ದೇಶದಿಂದಲೂ ಮಾಹಿತಿ ಹಕ್ಕು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಇಂತಹ ಸಂದರ್ಭಗಳಲ್ಲಿ ಅಧಿಕಾರಿಗಳು ಆತಂಕಪಡದೆ ಕಾಯ್ದೆಯಡಿ ತಮ್ಮ ಕರ್ತವ್ಯ ಮತ್ತು ಅಧಿಕಾರ ಅರಿತು ಕಾನೂನುಬದ್ಧವಾಗಿ ಕ್ರಮವಹಿಸಬೇಕು. ಅರ್ಜಿಯ ಸ್ವರೂಪ, ಕೇಳಿರುವ ಮಾಹಿತಿಯ ವ್ಯಾಪ್ತಿ ಹಾಗೂ ಕಾಯ್ದೆಯ ನಿಯಮಾನುಸಾರ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.
ಮಾಹಿತಿ ಹಕ್ಕು ಕಾಯ್ದೆ ಕೇವಲ ಅರ್ಜಿದಾರರ ಹಕ್ಕು ಎಂಬ ದೃಷ್ಟಿಯಿಂದ ಮಾತ್ರ ನೋಡದೆ ಜವಾಬ್ದಾರಿಯುತ ಆಡಳಿತ, ಪಾರದರ್ಶಕತೆ ಮತ್ತು ಸಾರ್ವಜನಿಕರೊಂದಿಗೆ ಸರ್ಕಾರದ ವಿಶ್ವಾಸ ಬಲಪಡಿಸುವ ವ್ಯವಸ್ಥೆಯಾಗಿ ಅಧಿಕಾರಿಗಳು ಅರ್ಥೈಸಿಕೊಳ್ಳಬೇಕು. ಇದಕ್ಕಾಗಿ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಪರಿಣಿತಿ ಹೊಂದಿರುವ ತಜ್ಞರು ಭಾಗವಹಿಸಿದ್ದು, ಅಧಿಕಾರಿಗಳು ಕಾಯ್ದೆಗೆ ಸಂಬಂಧಿಸಿದ ಯಾವುದೇ ಸಂದೇಹಗಳಿದ್ದರೂ ಹಿಂಜರಿಕೆಯಿಲ್ಲದೆ ಪ್ರಶ್ನಿಸಿ ಸ್ಪಷ್ಟತೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಕೃಷಿ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ವೆಂಕಟರವಣಪ್ಪ ಮಾಹಿತಿ ಹಕ್ಕು ಕಾಯ್ದೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಾಗಾರದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗರಿಮಾ ಪನ್ವಾರ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.