ದೊಡ್ಡಬಳ್ಳಾಪುರ: ಒಳಮೀಸಲಾತಿ ವಿಷಯದಲ್ಲಿ ನ್ಯಾ.ನಾಗಮೋಹನ್ ದಾಸ್ ಆಯೋಗ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ಯಾವುದೇ ಕಾರಣಕ್ಕೂ ಸರ್ಕಾರ ಅದನ್ನು ಜಾರಿಗೊಳಿಸಬಾರದು ಎಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ಮುಖಂಡ ಜಿ.ಲಕ್ಷ್ಮೀಪತಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರದಿ ಹೊಲೆಯ ಸೇರಿದಂತೆ ಎಲ್ಲ ಬಲಗೈ ಸಮುದಾಯಗಳಿಗೆ ಮರಣ ಶಾಸನವಾಗಿದೆ. ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನಸಂಖ್ಯೆಯನ್ನು 14 ಭಾಗಗಳಾಗಿ ವಿಂಗಡಿಸಿ ಅಲೆಮಾರಿ, ಮಾದಿಗ, ಆದಿಕರ್ನಾಟಕ, ಆದಿ ದ್ರಾವಿಡ ಹಾಗೂ ಆದಿ ಆಂಧ್ರಗಳೆಂದು ತೋರಿಸಲಾಗಿದೆ. ಬಲಗೈ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೌಲಭ್ಯ ದೊರೆಯದಂತೆ ವರದಿ ತಯಾರಾಗಿದೆ. ವರದಿ ತಿರಸ್ಕರಿಸದಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ ಆಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾ.25ರಂದು ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ಹೋರಾಟಕ್ಕೆ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಒಕ್ಕೂಟದ ಮುಖಂಡ ಲೋಕೇಶ್‌ ಮಾತನಾಡಿ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ವರದಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಬೇಕು. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿಅಂಶಗಳೊಂದಿಗೆ ವರದಿಯ ಅಂಕಿ ಅಂಶಗಳನ್ನು ಹೋಲಿಕೆ ಮಾಡಿ ವ್ಯತ್ಯಾಸಗಳು ಕಂಡುಬಂದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳಬೇಕು. ಅಲ್ಲದೆ ಈಗಾಗಲೇ ರಾಜ್ಯ ಸರ್ಕಾರವು ಯಾವುದೇ ಮಾನದಂಡವನ್ನು ಅನುಸರಿಸದೇ ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಮುಖಂಡ ಶ್ರೀನಿವಾಸ್‌ ಮಾತನಾಡಿ, ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ನೇರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶವು ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಮಾರಕವಾಗಿದೆ ಎಂದರು.


ಛಲವಾದಿ ಮಹಾಸಭಾ ಮಾಜಿ ಅಧ್ಯಕ್ಷ ಗುರುರಾಜಪ್ಪ ಮಾತನಾಡಿ, ಬಲಗೈ ಸಮುದಾಯದ ನ್ಯಾಯಯುತ ಹಕ್ಕಿಗಾಗಿ ನಡೆಯುತ್ತಿರುವ ಈ ಹೋರಾಟ ಜ್ಞಾನಪ್ರಕಾಶ್‌ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪ್ರೊ.ಚಂದ್ರಪ್ಪ, ಹನುಮಂತರಾಯಪ್ಪ, ಗಂಗಾಧರ್‌, ರಾಮಣ್ಣ, ಕಮಲಮ್ಮ, ಸ್ವಾಮಿ, ಪೊನ್ನೂರು ಮತ್ತಿತರರು ಉಪಸ್ಥಿತರಿದ್ದರು.

23ಕೆಡಿಬಿಪಿ4-

ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿ.ಲಕ್ಷ್ಮೀಪತಿ ಮಾತನಾಡಿದರು.