ಹಿಂದೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಪುರುಷರಲ್ಲಿ ಕಂಡುಬರುತ್ತಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು, ಯುವಜನರು ಹಾಗೂ ಚಿಕ್ಕ ಮಕ್ಕಳಲ್ಲಿಯೂ ಹೃದಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ೨೫ ರಿಂದ ೩೫ ವರ್ಷದ ಯುವಜನರಲ್ಲಿ ಹೃದಯಾಘಾತ ಮತ್ತು ಹೃದಯ ಸ್ತಂಭನದಂತಹ ಸಮಸ್ಯೆಗಳು ವರದಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಪ್ರಸ್ತುತ ಯುವಜನರಲ್ಲಿ ಹೃದ್ರೋಗ ಸಮಸ್ಯೆಗಳು ಹೆಚ್ಚುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಹೀಗಾಗಿ ಹೃದಯದ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ಪಂದನ ಆಸ್ಪತ್ರೆ, ಕಾರ್ಡಿಯೋಲಾಜಿಕಲ್ ಸೊಸೈಟಿ ಆಫ್ ಇಂಡಿಯಾ, ಮೈಸೂರು ಚಾಪ್ಟರ್ ಹಾಗೂ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ವಿಶ್ವ ಹೃದಯ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದರು.
ಹಿಂದೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಪುರುಷರಲ್ಲಿ ಕಂಡುಬರುತ್ತಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು, ಯುವಜನರು ಹಾಗೂ ಚಿಕ್ಕ ಮಕ್ಕಳಲ್ಲಿಯೂ ಹೃದಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ೨೫ ರಿಂದ ೩೫ ವರ್ಷದ ಯುವಜನರಲ್ಲಿ ಹೃದಯಾಘಾತ ಮತ್ತು ಹೃದಯ ಸ್ತಂಭನದಂತಹ ಸಮಸ್ಯೆಗಳು ವರದಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.ಮನುಷ್ಯನ ಜೀವನ ಅಮೂಲ್ಯ. ದೇವರು ನೀಡಿರುವ ಈ ಬದುಕನ್ನು ಸಾರ್ಥಕವಾಗಿ ಕಳೆಯಬೇಕಾದರೆ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬೇಕು. ಆರೋಗ್ಯವೇ ನಿಜವಾದ ಸಂಪತ್ತು. ಎಷ್ಟೇ ಹಣ, ಆಸ್ತಿ ಇದ್ದರೂ ಆರೋಗ್ಯವಿಲ್ಲದಿದ್ದರೆ ಅವುಗಳನ್ನು ಅನುಭವಿಸಲು ಸಾಧ್ಯವಿಲ್ಲ. ಆದ್ದರಿಂದ ಭೌತಿಕ ಸಂಪತ್ತಿಗಿಂತ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಹೃದಯವು ಹುಟ್ಟಿನಿಂದ ಸಾವಿನವರೆಗೂ ನಿರಂತರವಾಗಿ ಕಾರ್ಯನಿರ್ವಹಿಸುವ ಅಂಗವಾಗಿದೆ. ದೇಹದ ಇತರೆ ಅಂಗಗಳಂತೆ ಅದಕ್ಕೆ ವಿಶ್ರಾಂತಿ ಇರುವುದಿಲ್ಲ. ಹೀಗಾಗಿ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ವಿಶೇಷ ಕಾಳಜಿ ವಹಿಸಬೇಕು. ಅನಾರೋಗ್ಯಕರ ಆಹಾರ ಪದ್ಧತಿ, ದೈಹಿಕ ಚಟುವಟಿಕೆಯ ಕೊರತೆ, ಮಾನಸಿಕ ಒತ್ತಡ ಹಾಗೂ ದುಶ್ಚಟಗಳು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಇವುಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ದಿನದ ೨೪ ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯನ್ನಾದರೂ ದೈಹಿಕ ಆರೋಗ್ಯಕ್ಕಾಗಿ ಮೀಸಲಿಡಬೇಕು. ನಿಯಮಿತವಾಗಿ ವ್ಯಾಯಾಮ, ನಡಿಗೆ ಹಾಗೂ ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಬಹುದು. ದೇಹಕ್ಕೆ ಅಗತ್ಯವಾದ ಪೌಷ್ಟಿಕ ಆಹಾರ ಸೇವಿಸುವುದರ ಜತೆಗೆ ಮಾನಸಿಕ ಆರೋಗ್ಯಕ್ಕೂ ಆದ್ಯತೆ ನೀಡಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದಾಗ ಮಾತ್ರ ವೈಯಕ್ತಿಕ ಸಾಧನೆ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ಮಾತನಾಡಿ, ನಮ್ಮ ಹೃದಯ ಸರಿಯಾಗಿ ಇರಬೇಕಾದರೆ ದಿನ ನಿತ್ಯದ ಆಹಾರ ಪದ್ಧತಿ ಸರಿಯಾಗಿರಬೇಕು. ನಿತ್ಯ ವ್ಯಾಯಾಮ, ನಡಿಗೆ ಸೇರಿದಂತೆ ಇತರೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಮನಸ್ಸು ಚೆನ್ನಾಗಿದ್ದಷ್ಟು ಹೃದಯವೂ ಶಾಂತವಾಗಿರುತ್ತದೆ. ಚಿಕ್ಕ ಮಕ್ಕಳಿಂದಿಡಿದು ಯುವಜನತೆಯಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಲು ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಕಾರಣ ಎಂದರು.ಹೃದಯಘಾತಕ್ಕೊಳಗಾದವರಿಗೆ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ಹೃದ್ರೋಗ ತಜ್ಞೆ ಡಾ.ಎಸ್.ಹೇಮಾ ಅವರು ಸಿಪಿಆರ್ ಮಾಡುವ ಮೂಲಕ ವಿದ್ಯಾರ್ಥಿಗಳು ಹಾಗೂ ಸಭಿಕರಿಗೆ ತೋರಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಸ್ಪಂದನ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಐ.ಸಿ.ಆದಿತ್ಯಗೌಡ, ಹೃದ್ರೋಗ ತಜ್ಞರಾದ ಡಾ.ಜೆ.ವಿನು, ಡಾ.ಸ್ಫೂರ್ತಿ ಭಾಗವಹಿಸಿದ್ದರು.ಬದಲಾಗುತ್ತಿರುವ ಜೀವನಶೈಲಿ, ದೈಹಿಕ ಚಟುವಟಿಕೆಗಳ ಕೊರತೆ, ಆಹಾರ ಪದ್ಧತಿಯಲ್ಲಿನ ವ್ಯತ್ಯಾಸ ಹಾಗೂ ದುಶ್ಚಟಗಳಿಂದ ಪುರುಷರು ಮತ್ತು ಮಹಿಳೆಯರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ. ಹೀಗಾಗಿ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ನಿಯಮಿತ ವ್ಯಾಯಾಮ, ನಡಿಗೆ ಮತ್ತು ಸಮತೋಲಿತ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು.- ಮೀರಾ ಶಿವಲಿಂಗಯ್ಯ, ಸಭಾಧ್ಯಕ್ಷರು, ರೆಡ್‌ಕ್ರಾಸ್ ಸಂಸ್ಥೆ