ಹೆಚ್ಚುತ್ತಿರುವ ಡೆಂಘೀ ಪ್ರಕರಣ: ಜಿಲ್ಲಾಸ್ಪತ್ರೆಗೆ ಅಧಿಕಾರಿಗಳ ತಂಡ ಭೇಟಿ

| Published : Jun 13 2024, 12:45 AM IST

ಸಾರಾಂಶ

ಚಿಕ್ಕಮಗಳೂರು, ಜಿಲ್ಲಾ ಕೇಂದ್ರ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ ತಂಡ ಬುಧವಾರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿತ್ತು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲಾ ಕೇಂದ್ರ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ ತಂಡ ಬುಧವಾರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿತ್ತು.

ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್‌ಬಾಬು, ಜಿಲ್ಲಾ ಸರ್ಜನ್ ಡಾ. ಮೋಹನ್‌ಕುಮಾರ್ ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲಿ ಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಜೂನ್ ತಿಂಗಳ ಆರಂಭ ದಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಚಿಕ್ಕಮಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಜ್ವರ ಕಾಣಿಸಿಕೊಂಡಿದ್ದರಿಂದ ಸದ್ಯ 49 ಡೆಂಘೀ ಪಾಸಿಟಿವ್‌ ಪ್ರಕರಣ ಇದ್ದು, ಇನ್ನುಳಿದ 35 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ ಎಂದು ಹೇಳಿದರು.

ಜ್ವರ ನಿಯಂತ್ರಣದ ಉದ್ದೇಶದಿಂದ ಚಿಕ್ಕಮಗಳೂರು ನಗರಸಭೆ ಆಯುಕ್ತರ ನೇತೃತ್ವದಲ್ಲಿ ಪ್ರತಿ ವಾರ್ಡ್‌ ನಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಘನ ತ್ಯಾಜ್ಯ ವಿಲೇವಾರಿ, ಚರಂಡಿ ಸ್ವಚ್ಛತೆ, ಫಾಗಿಂಗ್‌, ಲಾರ್ವಾ ಸರ್ವೆ ನಿರಂತರವಾಗಿ ನಡೆಸಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲೂ ಕೂಡ ಇದೇ ಮಾದರಿಯಲ್ಲಿ ಕ್ರಮ ವಹಿಸಲಾಗಿದೆ. ಅದ್ದರಿಂದ ಜನರು ಆತಂಕ ಪಡುವ ಅಗತ್ಯವಿಲ್ಲ. ಸುತ್ತಮುತ್ತಲಿನ ಪರಿಸರ ಸ್ವಚ್ಛ ವಾಗಿಟ್ಟುಕೊಳ್ಳಬೇಕು, ಮನೆಯಲ್ಲಿನ ನೀರು ಹೆಚ್ಚು ದಿನ ಶೇಖರಿಸಿ ಇಡಬಾರದು ಎಂದು ಹೇಳಿದರು.

ಡಿಎಚ್‌ಒ ಡಾ. ಅಶ್ವತ್‌ಬಾಬು ಮಾತನಾಡಿ, ಜೂನ್ ಹಾಗೂ ಜುಲೈ ತಿಂಗಳಲ್ಲಿ ಜ್ವರ ಪ್ರಕರಣಗಳು ಹೆಚ್ಚಾಗಿ, ನಂತರ ಕಡಿಮೆಯಾಗುತ್ತಾ ಹೋಗುತ್ತದೆ. ಹಾಗಾಗಿ ಜನರು ಆತಂಕ ಪಡಬಾರದು ಎಂದು ತಿಳಿಸಿದರು.12 ಕೆಸಿಕೆಎಂ 7

ಚಿಕ್ಕಮಗಳೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಎಸ್‌ಪಿ ಡಾ. ವಿಕ್ರಂ ಅಮಟೆ ಹಾಗೂ ಹಿರಿಯ ಅಧಿಕಾರಿಗಳು ಬುಧವಾರ ಭೇಟಿ ನೀಡಿದ್ದರು.