ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ತಾಲೂಕಿನ ಪ್ರತಿಯೊಬ್ಬ ಮತದಾರರು ತಮ್ಮ ಮನೆಗಳಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ದಾಖಲೆ ಸಹಿತ ಮಾಹಿತಿಗಳನ್ನು ಒದಗಿಸುವ ಮೂಲಕ ನಿಮ್ಮ ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.
ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನೋಂದಣಿಯಲ್ಲಿ ಆಗುತ್ತಿರುವ ಗೊಂದಲ ಸೇರಿದಂತೆ ಹಲವು ಸಮಸ್ಯೆಗಳನ್ನು ಖುದ್ದು ಪರಿಹರಿಸದಿದ್ದಲ್ಲಿ ಅರ್ಹರು ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಶಾಸಕ ಎನ್.ಚಲುವರಾಯಸ್ವಾಮಿ ಹೇಳಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಎಸ್‌ಐಆರ್ ಕುರಿತು ಶನಿವಾರ ಆಯೋಜಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಕ್ರೀಯವಾಗಿ ಭಾಗವಹಿಸಿ, ನೋಂದಣಿ ಮಾಡಿಸಿಕೊಳ್ಳುವ ಬಗ್ಗೆ ಪ್ರತಿಯೊಬ್ಬ ಅರ್ಹ ಮತದಾರರಿಗೂ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.
ರಾಜ್ಯಾದ್ಯಂತ ಜುಲೈ 29 ರವರೆಗೆ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಅಂಗವಾಗಿ ಮನೆ-ಮನೆ ಸಮೀಕ್ಷೆ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಪ್ರತಿಯೊಬ್ಬ ಮತದಾರರು ತಮ್ಮ ಮನೆಗಳಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ದಾಖಲೆ ಸಹಿತ ಮಾಹಿತಿಗಳನ್ನು ಒದಗಿಸುವ ಮೂಲಕ ನಿಮ್ಮ ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.ನಿರ್ಲಕ್ಷ್ಯ ವಹಿಸಿದರೆ ಮತದಾನದ ಹಕ್ಕಿನಿಂದ ವಂಚಿತರಾಗಬೇಕಾಗುತ್ತದೆ. ಹಾಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪ್ರತಿ ಮನೆಗೆ ಭೇಟಿ ಕೊಟ್ಟು ಎಸ್‌ಐಆರ್ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಈ ವೇಳೆ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಮೈಷುಗರ್ಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ರಾಜೇಗೌಡ, ಮುಖಂಡರಾದ ಎಚ್.ಟಿ.ಕೃಷ್ಣೇಗೌಡ ಸೇರಿದಂತೆ ಹಲವರು ಇದ್ದರು.