ಸರ್ಕಾರದ ಅನುದಾನ ಸಮರ್ಪಕವಾಗಿ ಬಳಸಿ ಪ್ರತಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ

ಹನುಮಸಾಗರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ. ರಸ್ತೆ ಮತ್ತು ಸಿಸಿ ರಸ್ತೆ ನಿರ್ಮಾಣದಿಂದ ಜನರ ದೈನಂದಿನ ಜೀವನ ಸುಲಭವಾಗುತ್ತದೆ ಎಂದು ಶಾಸಕ ದೊಡ್ಡನಗೌಡ ಎಚ್.ಪಾಟೀಲ ಹೇಳಿದರು.

ಸಮೀಪದ ಬಂಡ್ರಗಲ್ ಗ್ರಾಮದಿಂದ ಪುರತಗೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಕಾಮಗಾರಿ ಕೆಕೆಆರ್‌ಡಿಬಿ ಅನುದಾನದಡಿಯಲ್ಲಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈ ರಸ್ತೆ ಕಾಮಗಾರಿ ಗ್ರಾಮೀಣ ಪ್ರದೇಶದ ಜನರಿಗೆ ಸಂಚಾರ ವ್ಯವಸ್ಥೆ ಸುಗಮವಾಗಲಿದ್ದು, ಕೃಷಿ ಉತ್ಪನ್ನಗಳ ಸಾಗಾಣಿಕೆಗೂ ಹೆಚ್ಚಿನ ಅನುಕೂಲವಾಗಲಿದೆ. ಸರ್ಕಾರದ ಅನುದಾನ ಸಮರ್ಪಕವಾಗಿ ಬಳಸಿ ಪ್ರತಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಬಂಡ್ರಗಲ–ಪುರತಗೇರಿ ರಸ್ತೆ ಹಾಗೂ ಪುರತಗೇರಿ ಗ್ರಾಮದ ಸಿಸಿ ರಸ್ತೆ ಕಾಮಗಾರಿ ಗುಣಮಟ್ಟದೊಂದಿಗೆ ಸಮಯಕ್ಕೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಪುರತಗೇರಿ ಗ್ರಾಮದ ವಿವಿಧ ವಾರ್ಡ್‌ಗಳಲ್ಲಿ ಸಿಸಿ ರಸ್ತೆ ನಿರ್ಮಾಣದ ಕಾಮಗಾರಿಗೂ ಭೂಮಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಲ್ಲಣ್ಣ ಪಲ್ಲೆ, ಬಸವರಾಜ ಹಳ್ಳೂರು, ನಾಗರಾಜ ಕಮತರ, ಸುರೇಶಗೌಡ್ರ ಹುಲಗೇರಿ, ಬಾಲನಗೌಡ್ರು, ಗ್ರಾಪಂ ಅಧ್ಯಕ್ಷ, ಸರ್ವ ಸದಸ್ಯರು, ಗ್ರಾಮದ ಹಿರಿಯರು, ಯುವಕರು ಇತರರು ಇದ್ದರು.