ಚಿಕ್ಕಮಗಳೂರು ಗ್ರಾಮೀಣಾಭಿವೃದ್ಧಿ ಇಲಾಖೆಯ ವಿಶೇಷ ಅನುದಾನದಡಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ₹1.50 ಕೋಟಿ ವೆಚ್ಚದಲ್ಲಿ ವಿವಿಧ ಕಾಂಕ್ರೀಟ್ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು
ಐನಳ್ಳಿಯಿಂದ ಕರ್ಕಿಪೇಟೆವರೆಗೆ ₹50 ಲಕ್ಷ ದಲ್ಲಿ ಕಾಂಕ್ರೀಟ್ ರಸ್ತೆ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು ಗ್ರಾಮೀಣಾಭಿವೃದ್ಧಿ ಇಲಾಖೆಯ ವಿಶೇಷ ಅನುದಾನದಡಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ₹1.50 ಕೋಟಿ ವೆಚ್ಚದಲ್ಲಿ ವಿವಿಧ ಕಾಂಕ್ರೀಟ್ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ನಗರದ ಐನಳ್ಳಿಯಿಂದ ಕರ್ಕಿಪೇಟೆವರೆಗೆ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ವಿಶೇಷ ಅನುದಾನದಡಿ ಐನಳ್ಳಿ–ಕರ್ಕಿಪೇಟೆ ರಸ್ತೆ ನಟ್ಟೇಕೆರೆನಹಳ್ಳಿ ಗ್ರಾಮ ಮತ್ತು ಚಿಕ್ಕನಹಳ್ಳಿಯಲ್ಲಿ ತಲಾ ₹50 ಲಕ್ಷ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶ ಗಳನ್ನು ಸಮನ್ವಯಗೊಳಿಸಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.ಟಾರ್ ದರ ಏರಿಕೆಯಿಂದ ಕೆಲವೆಡೆ ಡಾಂಬರು ರಸ್ತೆ ಕಾಮಗಾರಿ ವಿಳಂಬವಾಗಿದೆ. ಅಂತಹ ಕಡೆಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಅನುದಾನ ನೀಡುತ್ತಿದೆ. ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗಳಿಗೆ ಸುಮಾರು ₹430 ಕೋಟಿ ಜಮೆಯಾಗಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಕುಡಿಯುವ ನೀರು ಮತ್ತು ವಿದ್ಯುತ್ ಸಮಸ್ಯೆ ಸೆಪ್ಟೆಂಬರ್‌ನಲ್ಲೇ ಎದುರಾಗಿದೆ. ಬರ ಪರಿಹಾರವಾಗಿ ರಾಜ್ಯ ಸರ್ಕಾರ ರೈತರಿಗೆ ತಲಾ ₹2,500 ನೀಡಲು ಕ್ರಮ ಕೈಗೊಂಡಿದ್ದು, ಕೇಂದ್ರ ಸರ್ಕಾರವೂ ರೈತರಿಗೆ ನೇರವಾಗಿ ಬರ ಪರಿಹಾರ ನೀಡಬೇಕು ಎಂದು ಒತ್ತಾಯಿಸಲಾಗುವುದು ಎಂದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ನಗರಸಭಾ ಸದಸ್ಯರಾದ ಮಂಜುಳಾ, ಲಕ್ಷ್ಮಣ್, ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ ಜಯರಾಜ್ ಅರಸು ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಪೋಟೋ:ಚಿಕ್ಕಮಗಳೂರು ನಗರದ ಐನಳ್ಳಿಯಿಂದ ಕರ್ಕಿಪೇಟೆವರೆಗೆ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಚ್.ಡಿ. ತಮ್ಮಯ್ಯ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.