ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತಕ್ಕೆ ರಸ್ತೆಗಳೆಲ್ಲ ಕೇಸರಿಮಯ

| Published : Aug 10 2025, 01:30 AM IST

ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತಕ್ಕೆ ರಸ್ತೆಗಳೆಲ್ಲ ಕೇಸರಿಮಯ
Share this Article
  • FB
  • TW
  • Linkdin
  • Email

ಸಾರಾಂಶ

ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ, ವಂದೇ ಭಾರತ ರೈಲುಗಳಿಗೆ ಚಾಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭಾನುವಾರ ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಭರ್ಜರಿ ಸ್ವಾಗತ ಕೋರಲು ಬಿಜೆಪಿ ನಾಯಕರು ಸಕಲ ಸಿದ್ಧತೆ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ, ವಂದೇ ಭಾರತ ರೈಲುಗಳಿಗೆ ಚಾಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭಾನುವಾರ ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಭರ್ಜರಿ ಸ್ವಾಗತ ಕೋರಲು ಬಿಜೆಪಿ ನಾಯಕರು ಸಕಲ ಸಿದ್ಧತೆ ನಡೆಸಿದ್ದಾರೆ.

ಮೇಖ್ರಿ ವೃತ್ತ, ಚಾಲುಕ್ಯ ವೃತ್ತ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತ, ಸೌತ್‌ ಎಂಡ್‌ ಸರ್ಕಲ್‌, ರಾಗೀಗುಡ್ಡ, ಎಲೆಕ್ಟ್ರಾನಿಕ್‌ ಸಿಟಿ ಪ್ರಮುಖ ರಸ್ತೆಗಳು, ವೃತ್ತಗಳು ಕೇಸರಿ ಮಯವಾಗಿವೆ. ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಬಾವುಟಗಳು, ಪ್ರಧಾನಿ ಮೋದಿಗೆ ಸ್ವಾಗತ ಕೋರುವ ಬಿಜೆಪಿ ನಾಯಕರ ದೊಡ್ಡ ಫ್ಲೆಕ್ಸ್‌ಗಳು ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಪ್ರಧಾನಿ ಮೋದಿ ಅವರನ್ನು ಕಣ್ತುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರು ರಸ್ತೆ ಮಾರ್ಗವಾಗಿ ಸಾಗುವಾಗ ಪ್ರಮುಖ ವೃತ್ತಗಳಲ್ಲಿ ಕಾರ್ಯಕರ್ತರತ್ತ ಕೈ ಬೀಸಲಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ ಮೋದಿ ಬಳಿಕ ಹೆಲಿಕಾಪ್ಟರ್‌ ಮುಖಾಂತರ ಮೇಖ್ರಿ ವೃತ್ತದ ಬಳಿಯ ಲಿಮಿಟರಿ ಬೇಸ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್‌ಆರ್‌) ರೈಲು ನಿಲ್ದಾಣಕ್ಕೆ ಬರಲಿದ್ದಾರೆ. ಮೂರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಮೆಟ್ರೋ ರೈಲಲ್ಲಿ ಪ್ರಯಾಣ:

ನಂತರ ಮೋದಿ ಅವರು ಬೆಳಗ್ಗೆ 11.30ಕ್ಕೆ ರಸ್ತೆ ಮಾರ್ಗವಾಗಿ ಆರ್‌.ವಿ.ರಸ್ತೆಯ ಮೆಟ್ರೋ ನಿಲ್ದಾಣ ತಲುಪಿ ಬೆಳಗ್ಗೆ 11.45ಕ್ಕೆ ಆರ್‌.ವಿ.ರಸ್ತೆಯ ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಮಧ್ಯಾಹ್ನ 12.55ಕ್ಕೆ ಆರ್‌.ವಿ.ರಸ್ತೆಯ(ರಾಗೀಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್‌ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.

ಮಧ್ಯಾಹ್ನ 1.30ಕ್ಕೆ ಮೋದಿ ಭಾಷಣ:

ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿಸಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ವೇದಿಕೆಯಲ್ಲಿ 10 ಮಂದಿಗೆ ಅವಕಾಶ:

ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯಪಾಲ ತಾವರ್‌ ಚಂದ್‌ ಗೆಹಲೋತ್‌, ಕೇಂದ್ರ ಸಚಿವರಾದ ಮನೋಹರ್‌ ಲಾಲ್‌, ಅಶ್ವಿನಿ ವೈಷ್ಣವ್‌, ಶೋಭಾ ಕರಂದ್ಲಾಜೆ, ಎಚ್‌.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಂಸದ ತೇಜಸ್ವಿ ಸೂರ್ಯ, ಸಂಸದ ಸಿ.ಎನ್‌. ಮಂಜುನಾಥ್‌

ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.ಕನ್ನಡದಲ್ಲಿ ಟ್ವಿಟ್ ಮಾಡಿದ ಮೋದಿ:

ಪ್ರಧಾನಿ ನರೇಂದ್ರ ಮೋದಿ ಅವರು ತಾವು ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಕನ್ನಡದಲ್ಲಿ ಟ್ವಿಟ್‌ ಮಾಡಿ ಮಾಹಿತಿ ನೀಡಿದ್ದಾರೆ. ಆ.10ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲುಗಳಿಗೆ ಕೆಎಸ್ಆರ್‌ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು. ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಬಳಿಕ ನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಾಗುವುದು ಎಂದು ಮೋದಿ ಟ್ವಿಟ್‌ ಮಾಡಿದ್ದಾರೆ.