ಸಾರಾಂಶ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಕ್ಯಾಂಪಸ್‌ಗೆ ತೆರಳುವ ಅಗಲೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಲಾಯಿತು.
ಕನ್ನಡಪ್ರಭ ವಾರ್ತೆ ಪುತ್ತೂರು
ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು. ಆದ್ದರಿಂದ ಎಲ್ಲೆಲ್ಲಿ ರಸ್ತೆಗೆ ಸಂಬಂಧಿಸಿದ ಸಮಸ್ಯೆಗಳು, ತಕರಾರುಗಳಿವೆಯೋ ಅವುಗಳನ್ನು ಗುರುತಿಸಿ ನ್ಯಾಯಮಾರ್ಗದಲ್ಲಿ ಪರಿಹರಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಬಪ್ಪಳಿಗೆಯಲ್ಲಿನ ಅಂಬಿಕಾ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ರಸ್ತೆಯ ಬಗೆಗಿದ್ದ ತಕರಾರನ್ನು ಮಾತುಕತೆಯ ಮೂಲಕ ಪರಿಹರಿಸಿ ರಸ್ತೆ ಅಗಲೀಕರಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ಅವರು ಶನಿವಾರ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಕ್ಯಾಂಪಸ್‌ಗೆ ತೆರಳುವ ಅಗಲೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಕಳೆದ ಹನ್ನೊಂದು ವರ್ಷಗಳಿಂದ ನಿರಂತರ ಪ್ರಯತ್ನ ಮಾಡಲಾಗುತ್ತಿದ್ದರೂ ರಸ್ತೆ ಅಗಲೀಕರಣಕ್ಕೆ ತಡೆಯಾಗಿತ್ತು. ಕಿರಿದಾದ ರಸ್ತೆಯಲ್ಲಿ ಸುಮಾರು ಒಂದೂವರೆ ಸಾವಿರದಷ್ಟು ವಿದ್ಯಾರ್ಥಿಗಳು ಹಾಗೂ ಹೆತ್ತವರು ಸಮಸ್ಯೆ ಎದುರಿಸುವ ಪರಿಸ್ಥಿತಿ ಇತ್ತು. ಆದರೆ ಶಾಸಕರು ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲ ಕಲ್ಪಿಸಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಎನ್.ಕೆ. ಜಗನ್ನಿವಾಸ ರಾವ್, ಸ್ಥಳೀಯ ಮುಖಂಡರಾದ ಶಿವರಾಮ ಆಳ್ವ ಬಳ್ಳಮಜಲು, ಜಯಪ್ರಕಾಶ್ ಬದಿನಾರು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ಸುರೇಶ ಶೆಟ್ಟಿ, ಪ್ರಸನ್ನ ಭಟ್, ಹೆತ್ತವರು, ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ., ಕ್ಯಾಂಪಸ್ ನಿರ್ದೇಶಕ ರಾಜೇಂದ್ರ, ಬೋಧಕ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ ಸ್ವಾಗತಿಸಿದರು. ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲ ರಾಕೇಶ ಕುಮಾರ್ ಕಮ್ಮಜೆ ವಂದಿಸಿದರು.