ಸಾರಾಂಶ
ಹಾವೇರಿ: ಪೋಕ್ಸೊ ಪ್ರಕರಣಗಳ ವಿಚಾರಣೆಯಲ್ಲಿ ವೈದ್ಯರ ಪಾತ್ರ ಬಹಳ ಪ್ರಮುಖವಾಗಿದೆ. ವೈದ್ಯರು ತಮ್ಮ ಜವಾಬ್ದಾರಿ ಹಾಗೂ ಕರ್ತವ್ಯವನ್ನು ತಿಳಿದುಕೊಂಡು ಧೈರ್ಯವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವಿಂದ್ರಪ್ಪಾ ಎನ್. ತಿಳಿಸಿದರು.ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಹಾಗೂ ಎಫ್‌ಒಜಿಎಸ್‌ಐ ಸಹಯೋಗದಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರಗಳ ನಿಷೇಧ ಕಾಯ್ದೆ ಕಾರ್ಯಕ್ರಮದಡಿ ಪೋಕ್ಸೊ ಕಾಯ್ದೆ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಎಲ್ಲಿಯವರೆಗೆ ಸಮಾಜದಲ್ಲಿ ತಲೆಯತ್ತಿ ನಿಲ್ಲುವುದಿಲ್ಲವೋ ಹಾಗೂ ಸಮಾಜದ ಪರವಾಗಿ ಕೆಲಸ ಮಾಡುವುದಿಲ್ಲವೋ ಅಲ್ಲಿಯವರೆಗೆ ಸಮಾಜ ಸರಿಯಾಗಲ್ಲ. ಹಾಗಾಗಿ ಸಮಾಜದ ಪರವಾಗಿ ಕೆಲಸ ಮಾಡಬೇಕು ಮತ್ತು ಸಮಾಜದ ಬಗ್ಗೆ ಕಾಳಜಿ ಇರಬೇಕು. ಪೋಕ್ಸೊ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆ ಕೊಡುವ ನಿಟ್ಟಿನಲ್ಲಿ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡಬೇಕು. ನಿಮಗೆ ಏನಾದರೂ ಸಮಸ್ಯೆ ಇದ್ದರೆ ನನ್ನನ್ನು ಸಂಪರ್ಕಿಸಿ ಎಂದು ವೈದ್ಯರಿಗೆ ಕರೆ ನೀಡಿದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ ಮಾತನಾಡಿ, ಪೋಕ್ಸೊ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ನಿಗದಿತ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ವೈದ್ಯರು ನಿಖರವಾದ ವರದಿ ನೀಡಬೇಕು. ಪೋಕ್ಸೊಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ ಮಾತನಾಡಿ, ವೈದ್ಯರು ಪೋಕ್ಸೊ ಪ್ರಕರಣಗಳಲ್ಲಿ ವಿಳಂಬವಾಗದಂತೆ ವರದಿ ನೀಡಬೇಕು. ವೈದ್ಯರಿಗೆ ಎಂಎಲ್‌ಸಿ ಮಾಡಲು ಅಧಿಕಾರವಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವರದಿ ಅನುಸಾರ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರು ಹೆಚ್ಚಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು. ಎಂಎಲ್‌ಸಿ ಹಾಗೂ ಎಫ್‌ಎಲ್‌ಸಿ ವರದಿಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು ಹಾಗೂ ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಧೈರ್ಯವಾಗಿ ಕೆಲಸ ಮಾಡಬೇಕು ಎಂದರು. ಜಿಲ್ಲಾ ಆಸ್ಪತ್ರೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ಸಂತೋಷಕುಮಾರ ಹಾಗೂ ಡಿಎಲ್ಎಸ್ಎ ಪೆನಲ್ ನ್ಯಾಯವಾದಿ ಆರ್.ಐ. ಚನ್ನಪಟ್ಟಣ ಅವರು ಪೋಕ್ಸೊ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೇವರಾಜ ಎಸ್., ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಾಲಮುಕುಂದ ರಮೇಶರಾವ ಮುತಾಲಿಕದೇಸಾಯಿ, ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಿ.ಆರ್. ಹಾವನೂರ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಎಸ್.ಎನ್. ಮರೆಕ್ಕನವರ, ಎಫ್‌ಒಜಿಎಸ್‌ಐ ಅಧ್ಯಕ್ಷ ಡಾ. ವಿದ್ಯಾ ವಾಸುದೇವಮೂರ್ತಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹಾಗೂ ಇತರರು ಇದ್ದರು. ಶ್ರೀಧರ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.