ಚಿಕ್ಕಮಗಳೂರುಕರ್ನಾಟಕ ರಾಜ್ಯದಲ್ಲಿ ಮಾಹಿತಿ ಆಯೋಗ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಬದ್ಧತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ ಡಾ.ಹರೀಶ್‌ಕುಮಾರ್ ಹೇಳಿದರು.

- ಮಾಹಿತಿ ಹಕ್ಕು ಅಧಿನಿಯಮ - 2005 ಕುರಿತು ಜಾಗೃತಿ ಕಾರ್ಯಾಗಾರ, ಸಂವಾದ । ಸರ್ಕಾರಿ ಅಧಿಕಾರಿಗಳಿಂದ ಆಯೋಗಕ್ಕೆ 10 ಕೋಟಿಯಷ್ಟು ದಂಡ ಜಮೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕರ್ನಾಟಕ ರಾಜ್ಯದಲ್ಲಿ ಮಾಹಿತಿ ಆಯೋಗ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಬದ್ಧತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ ಡಾ.ಹರೀಶ್‌ಕುಮಾರ್ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಪಂನಿಂದ ಶನಿವಾರ ಜಿಪಂನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಹಾಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ - 2005 ಕುರಿತ ಜಾಗೃತಿ ಕಾರ್ಯಾಗಾರ ಹಾಗೂ ಸಂವಾದದಲ್ಲಿ ಮಾತನಾಡಿದರು. ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಅಧ್ಯಯನ ಮತ್ತು ಸಾಮಾನ್ಯ ತಿಳುವಳಿಕೆ ಇರಬೇಕು. ಮಾಹಿತಿ ಬಯಸಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಕಾಯ್ದೆಯಲ್ಲಿ ಲಭ್ಯವಿರುವ ಸೆಕ್ಷನ್‌ಗಳ ಆಧಾರದ ಮೇಲೆ ಉತ್ತರ ಮತ್ತು ಮಾಹಿತಿ ಒದಗಿಸಬೇಕು. ಕಳೆದ ಹತ್ತು ವರ್ಷಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ವಯ ಮಾಹಿತಿ ನೀಡುವಲ್ಲಿ ವಿಳಂಬ. ಸರಿಯಾದ ಮಾಹಿತಿ ನೀಡದಿರುವುದು ಹಾಗೂ ಇತರ ಕಾರಣಗಳಿಂದ 10 ಕೋಟಿಯಷ್ಟು ದಂಡ ಸರ್ಕಾರಿ ಅಧಿಕಾರಿಗಳಿಂದ ಆಯೋಗಕ್ಕೆ ಜಮೆ ಆಗಿದೆ. ಆದ್ದರಿಂದ ಮಾಹಿತಿ ಅಧಿಕಾರಿಗಳು ಮಾಹಿತಿ ಕೋರಿ ಸಲ್ಲಿಕೆ ಯಾಗುವ ಅರ್ಜಿಗಳಿಗೆ ಕಾಲಮಿತಿಯಲ್ಲಿ ಉತ್ತರ ಒದಗಿಸಬೇಕೆಂದು ಹೇಳಿದರು. ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರು ಮಾಹಿತಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಅರ್ಜಿ ಸಲ್ಲಿಕೆಯಾದ 30 ದಿನಗಳಲ್ಲಿ ವಿಲೇವಾರಿ ಮಾಡಬೇಕು. ಮಾಹಿತಿ ಕೇಳಿ ಯಾವುದೇ ವ್ಯಕ್ತಿ ಸರ್ಕಾರದ ಉದ್ಯೋಗ, ಸೌಲಭ್ಯಗಳ ಬಗ್ಗೆ ಮಾಹಿತಿ ಕೇಳಿ ಅರ್ಜಿ ಸಲ್ಲಿಸಿದ್ದಲ್ಲಿ ಮಾಹಿತಿ ನೀಡಬೇಕಾಗುತ್ತದೆ. ಅಧಿಕಾರಿ ಹೆಸರು ಮತ್ತು ಹುದ್ದೆ ಸಾರ್ವಜನಿಕ ದಾಖಲೆಯಾಗಿರು ವುದರಿಂದ ಅವುಗಳನ್ನು ನೀಡಬೇಕಾಗುತ್ತದೆ. ಯಾವುದೇ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಅಥವಾ ತನಿಖೆ ಮುಕ್ತಾಯ ವಾಗಿ ಅಂತಿಮ ವರದಿ ಸಲ್ಲಿಸದಿರುವ ಅಥವಾ ತನಿಖೆ ಮುಕ್ತಾಯವಾದ ಬಗ್ಗೆ ಸಂಬಂಧಿಸಿದ ಅಧಿಕಾರಿ ಅಥವಾ ಸಂಸ್ಥೆ ದೃಢೀಕರಣ ನೀಡದ ಹೊರತು ಯಾವುದೇ ಮಾಹಿತಿ ನೀಡುವಂತಿಲ್ಲ. ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಕಾಯ್ದೆ ಮತ್ತು ಕಾನೂನುಗಳ ಸಾಮಾನ್ಯ ಜ್ಞಾನವು ಅಗತ್ಯವಾಗಿದೆ ಎಂದರು. ಮಾಹಿತಿ ಹಕ್ಕು ಕಾಯ್ದೆ 2005 ರಲ್ಲಿ ಜಾರಿಗೆ ಬಂದಿದ್ದರೂ ಸಹ ಹಿಂದಿನ 20 ವರ್ಷಗಳ ಮಾಹಿತಿಗಳಿಗೂ ಈ ಕಾಯ್ದೆ ಅನ್ವಯ ವಾಗುತ್ತದೆ. ಕಳೆದ 20 ವರ್ಷಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಉಚ್ಚ ನ್ಯಾಯಾಲಯ ಹಾಗೂ ಸರ್ವೋಚ್ಚ ನ್ಯಾಯಾಲಯಗಳಿಂದ ಹಲವಾರು ಆದೇಶಗಳು ಬಂದಿವೆ. ಈ ಆದೇಶಗಳು ಮಾಹಿತಿ ಹಕ್ಕು ಕಾಯ್ದೆ ಅನ್ವಯ ಅಳವಡಿಕೆ ಹಾಗೂ ವಿಸ್ತರಣೆಗಳಿಗೆ ಸಾಕಷ್ಟು ಬಲ ತುಂಬಿವೆ ಎಂದು ತಿಳಿಸಿದರು. ಮಾಹಿತಿ ಆಯುಕ್ತ ಕೆ. ಬದ್ರುದ್ದೀನ್ ಮಾತನಾಡಿ, ಅಧಿಕಾರಿಗಳು ಮಾಹಿತಿ ಕೋರಿ ಬಂದ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು. ಅರ್ಜಿಗಳ ವಿಲೇವಾರಿಯಲ್ಲಿ ಜಿಲ್ಲೆ ಪ್ರಥಮ ಸ್ಥಾನಕ್ಕೆ ಬರುವಂತೆ ಆಶಿಸಿದ ಅವರು, ಕೇವಲ ಸಿಸಿ ಟಿ.ವಿ.ದೃಶ್ಯಗಳು ಪ್ರಕರಣಗಳ ಬಗ್ಗೆ ಅಂತಿಮ ಆರೋಪ ಪಟ್ಟಿ, ಯಾವ ವ್ಯಕ್ತಿ ಮೇಲೆ ಎಷ್ಟು ಪ್ರಕರಣ ಗಳಿವೆ ಎಂಬುದು ಸೇರಿದಂತೆ ವೈಯಕ್ತಿಕ ಹಾಗೂ ವ್ಯಕ್ತಿಗತ ಮಾಹಿತಿ ನೀಡುವಾಗ ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್‌ಗಳನ್ನು ಸರಿಯಾಗಿ ತಿಳಿದು ಅರ್ಥೈಸಿಕೊಂಡು ಮುಂದುವರಿಯಬೇಕು. ಯಾವ ಮಾಹಿತಿ ನೀಡಲು ಅವಕಾಶವಿದೆ ಮತ್ತು ಯಾವು ದನ್ನು ನೀಡಲು ಅವಕಾಶವಿಲ್ಲ ಎಂಬುದರ ಬಗ್ಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತಿಳುವಳಿಕೆ ಇರಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಪ್ರಾಸ್ತಾವಿಕ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆ. ಸ್ವತಂತ್ರ ಭಾರತದಲ್ಲಿ ಹೆಚ್ಚು ಪರಿಣಾಮಕಾರಿಯಾದ ಹಾಗೂ ಹೆಚ್ಚು ಅವಶ್ಯಕತೆ ಇರುವ ಕಾಯ್ದೆ. ಸರ್ಕಾರಿ ದಾಖಲೆಗಳನ್ನು ಅಷ್ಟು ಸುಲಭವಾಗಿ ಯಾರಿಗೂ ನೀಡುತ್ತಿರಲಿಲ್ಲ. ಕಾಲಕ್ರಮೇಣ ಸಾಕಷ್ಟು ಬದಲಾವಣೆಗಳಾಗಿ ಕರ್ನಾಟಕ ಮುಂಚೂಣಿಯಲ್ಲಿತ್ತು. ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬರುವ ಮುನ್ನವೇ ಕರ್ನಾಟಕದಲ್ಲಿ ಸಾರ್ವಜನಿಕರಿಗೆ ದಾಖಲೆಗಳನ್ನು ಯಾವುದೇ ರಹಸ್ಯವಿಲ್ಲದೆ ಮುಕ್ತವಾಗಿ ನೀಡಬೇಕು ಎಂದು ತೀರ್ಮಾನವಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಕಾಯ್ದೆ ಜಾರಿಗೆ ಬಂದಿತ್ತು. ಬೇರೆ ರಾಜ್ಯಗಳು ಸಹ ಈ ದಿಸೆಯಲ್ಲಿ ಕೆಲವು ಪ್ರಯತ್ನ ಮಾಡಿದ್ದವು ಎಂದರು.

ಆಯುಕ್ತರಾದ ಮಹೇಶ್ ವಾಳ್ವೇಕರ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ.ಜಯಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

3 ಕೆಸಿಕೆಎಂ 3ಚಿಕ್ಕಮಗಳೂರು ಜಿ.ಪಂ. ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ - 2005 ಕುರಿತ ಜಾಗೃತಿ ಕಾರ್ಯಾಗಾರ ಹಾಗೂ ಸಂವಾದದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ಡಾ.ಹರೀಶ್‌ಕುಮಾರ್‌ ಮಾತನಾಡಿದರು.