ಸಾರಾಂಶ
ಉಳ್ಳವರು ತಮ್ಮ ಮಕ್ಕಳಿಗೆ ಉತ್ತಮ ಸೌಕರ್ಯ, ತರಬೇತಿ ನೀಡಿ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಡುತ್ತಾರೆ. ಅದರೆ ಬಡ ಮಕ್ಕಳಲ್ಲಿ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರತೆಗೆದು ಸೂಕ್ತ ವೇದಿಕೆಯನ್ನು ಕಲ್ಪಿಸುವ ಕೆಲಸ ಶಿಕ್ಷಕರು ಮಾಡಬೇಕು.
ಕಾರವಾರ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದರು.
ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬಾಲವಿಕಾಸ ಅಕಾಡೆಮಿ ಧಾರವಾಡ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಅಜ್ವಿ ಓಷನ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಉಳ್ಳವರು ತಮ್ಮ ಮಕ್ಕಳಿಗೆ ಉತ್ತಮ ಸೌಕರ್ಯ, ತರಬೇತಿ ನೀಡಿ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಡುತ್ತಾರೆ. ಅದರೆ ಬಡ ಮಕ್ಕಳಲ್ಲಿ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರತೆಗೆದು ಸೂಕ್ತ ವೇದಿಕೆಯನ್ನು ಕಲ್ಪಿಸುವ ಕೆಲಸ ಶಿಕ್ಷಕರು ಮಾಡಬೇಕು ಎಂದರು.
ಮಕ್ಕಳ ಬೆಳವಣಿಗೆ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಅವರಲ್ಲಿರುವ ಕಲೆ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಲು ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸುವ ಸಲುವಾಗಿ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಂತಹ ವೇದಿಕೆಯಲ್ಲಿ ಅವರಿಗೆ ಅವಕಾಶ ಕಲ್ಪಿಸುವುದು ಶಿಕ್ಷಕರು ಹಾಗೂ ಪೋಷಕರ ಕರ್ತವ್ಯವಾಗಿದೆ ಎಂದರು.ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ವೇದಿಕೆಯಲ್ಲಿ ಸ್ಪರ್ಧಿಸಲು ಸೂಕ್ತ ಅವಕಾಶ ಕಲ್ಪಿಸಿದಾಗ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗಲಿದೆ. ಶಾಲೆಗಳಲ್ಲಿ ಶಿಕ್ಷಣದ ಜತೆಗೆ ಸಮಾಜದಲ್ಲಿ ಸಂಭವಿಸುವ ಸಮಸ್ಯೆಗಳನ್ನು ಯಾವ ರೀತಿ ಎದುರಿಸಿ ನಿಲ್ಲಬೇಕು ಎಂಬುದರ ಬಗ್ಗೆ ಮಾಹಿತಿ ನೀಡಬೇಕು ಎಂದರು.ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಬೇಕು. ಸರ್ಕಾರದಿಂದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಗ್ರಂಥಾಲಯಗಳನ್ನು ಮಾಡಲಾಗಿದ್ದು, ಪೋಷಕರು ಮಕ್ಕಳನ್ನು ಕರೆದುಕೊಂಡು ಹೋಗುವ ಮೂಲಕ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸಬೇಕು. ಎಲ್ಲರೂ ಉತ್ತಮ ಅಭ್ಯಾಸ ಮಾಡಿ ಉನ್ನತ ಶ್ರೇಣಿಯಲ್ಲಿ ಹುದ್ದೆಯನ್ನು ಪಡೆದುಕೊಳ್ಳಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಆರ್. ಪಾಟೀಲ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿರೂಪಾಕ್ಷಗೌಡ ಪಾಟೀಲ್ ಮತ್ತಿತರರು ಇದ್ದರು.