ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದಂತೆ ‘ಪಂಚ ಗ್ಯಾರಂಟಿ’ ಅನ್ನು ಜಾರಿಗೊಳಿಸಿ ರಾಜ್ಯದ ಎಲ್ಲಾ ಜನರಿಗೆ ಒಂದಲ್ಲ ಒಂದು ಸೌಲಭ್ಯಗಳು ತಲುಪುವಂತೆ ಮಾಡುವಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಚುನಾವಣಾ ಸಂದರ್ಭದಲ್ಲಿನ ಆಶ್ವಾಸನೆಯಂತೆ ಪಂಚ ಗ್ಯಾರಂಟಿ ಯೋಜನೆಯನ್ನು ಈಡೇರಿಸಿ, ಜನರ ನಂಬಿಕೆ ಮತ್ತು ವಿಶ್ವಾಸವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉಳಿಸಿಕೊಂಡಿದೆ ಎಂದು ಭೋಸರಾಜು ಅವರು ಪ್ರತಿಪಾದಿಸಿದರು.ರಾಜ್ಯದಲ್ಲಿ 4 ಲಕ್ಷ ಕೋಟಿ ಬಜೆಟ್‍ನಲ್ಲಿ 55 ಸಾವಿರ ಕೋಟಿ ರು.ವನ್ನು ವಾರ್ಷಿಕವಾಗಿ ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತಿದೆ ಎಂದು ಹೇಳಿದರು.
ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 600 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಪ್ರತಿನಿತ್ಯ ಜಿಲ್ಲೆಯಲ್ಲಿ 16 ಸಾವಿರ ಮಂದಿ ಬಸ್‍ನಲ್ಲಿ ಸಂಚರಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ನಡೆಯುತ್ತಿದ್ದು, ಎಲ್ಲಾ ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.
ಕೊಟ್ಟ ಮಾತಿನಂತೆ ನಡೆದುಕೊಂಡಿದೆ:ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿದೆ. ಗ್ಯಾರಂಟಿ ಕಾರ್ಯಕ್ರಮಗಳು ಬಡ ಜನರ ಖಾತೆಗೆ ಹಣ ನೇರವಾಗಿ ತಲುಪುತ್ತಿದೆ. ಯಾವುದೇ ಯೋಜನೆ ಜಾರಿಗೊಳಿಸಲು ಜನ ಬೆಂಬಲ ಇರಬೇಕು. ಬಡವರ, ಶೋಷಿತರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆ ಜೊತೆ ವಸತಿ ಯೋಜನೆಯು ಗ್ಯಾರಂಟಿಯಾಗಿ ಜಾರಿಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.ಕೊಡಗು ಜಿಲ್ಲೆಯಲ್ಲಿ ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ವಸತಿ ಯೋಜನೆ ಜೊತೆಗೆ ಆಧಾರ್ ಕಾರ್ಡ್, ಪಡಿತರ ಇತರೆ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಡಾ.ಮಂತರ್ ಗೌಡ ಅವರು ಸಲಹೆ ಮಾಡಿದರು
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಮಾತನಾಡಿ ಜಿಲ್ಲೆಯಲ್ಲಿ ಶೇ.98 ಕ್ಕೂ ಹೆಚ್ಚು ಪಂಚ ಗ್ಯಾರಂಟಿ ಯೋಜನೆಗಳು ತಲುಪುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.‘ಇಂದಿರಾಗಾಂಧಿ ಕಾಲದಲ್ಲಿ 20 ಅಂಶಗಳ ಕಾರ್ಯಕ್ರಮ ಜಾರಿಗೊಳಿಸಿದ್ದರು. ವೃದ್ಧಾಪ್ಯ ವೇತನ, ವಿಕಲಚೇತನರ ವೇತನ, ಉಳುವವನಿಗೆ ಭೂಮಿ, ಬ್ಯಾಂಕ್‍ಗಳ ರಾಷ್ಟ್ರೀಕರಣ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರು, ಅದೇ ಅವಧಿಯಲ್ಲಿ ಡಿ.ದೇವರಾಜ ಅರಸು ಅವರು ಇಂದಿರಾಗಾಂಧಿ ಅವರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸಿದ್ದರು, ಡಿ.ದೇವರಾಜ ಅರಸು ಅವರ ಕಾರ್ಯಕ್ರಮಗಳು ಇಂದಿಗೂ ಸಹ ಸ್ಮರಣೀಯ ಎಂದರು.
ನುಡಿದಂತೆ ನಡೆದಿದೆ:ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ಅವರು ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಹೆಣ್ಣು ಮಕ್ಕಳ ಕಣ್ಣೀರು ಒರೆಸುವ ಕೆಲಸ ಮಾಡಿದೆ ಎಂದು ಪ್ರತಿಪಾದಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಮಾತನಾಡಿ ಸರ್ಕಾರ ಎಲ್ಲರಿಗೂ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಬಲೀಕರಣ ಕಲ್ಪಿಸಲು ಶ್ರಮಿಸಿದೆ ಎಂದರು.ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಮುತ್ತುರಾಜ್ ಅವರು ಗ್ಯಾರಂಟಿ ಯೋಜನೆಯಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿಲ್ಲ. ಗ್ಯಾರಂಟಿ ಯೋಜನೆ ಅನುಷ್ಠಾನದಿಂದ ಪ್ರತಿಯೊಬ್ಬರ ಆರ್ಥಿಕ ಬೆಳವಣಿಗೆಗೆ ಅನುಕೂಲವಾಗಿದೆ. ಮಾರುಕಟ್ಟೆಯಲ್ಲಿ ಕೊಳ್ಳುವವರ ಶಕ್ತಿ ಹೆಚ್ಚಾಗಿದೆ. ಇದರಿಂದ ತೆರಿಗೆ ಸಂಗ್ರಹವು ದ್ವಿಗುಣಗೊಂಡಿದೆ ಎಂದರು.
ಶೇ.99 ರಷ್ಟು ಪ್ರಗತಿ:ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಮಾತನಾಡಿ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಕಾರ್ಯಕ್ರಮಗಳನ್ನು ಶೇ.99 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ತಲುಪುತ್ತಿದ್ದು, ಪ್ರಗತಿ ಸಾಧಿಸಲಾಗಿದೆ ಎಂದರು.ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾ ವೇದಿಕೆಯ ಈ.ರಾಜು ಮತ್ತು ತಂಡದವರು ಗ್ಯಾರಂಟಿ ಯೋಜನೆ ಕುರಿತು ಹಾಡು ಹಾಡಿ ಗಮನ ಸೆಳೆದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ವಾಗತಿಸಿದರು. ಪವನ್ ಕುಮಾರ್ ನಿರೂಪಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ವಂದಿಸಿದರು.ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾದ ಮಂದ್ರೀರ ಮೋಹನ್ದಾಸ್(ಮಡಿಕೇರಿ), ಕಾಂತರಾಜು(ಸೋಮವಾರಪೇಟೆ), ವಿ.ಪಿ.ಶಶಿಧರ (ಕುಶಾಲನಗರ), ಪಿ.ವಿ.ಜಾನ್ಸನ್(ವಿರಾಜಪೇಟೆ), ಕಾಳಿಮಾಡ ಪ್ರಶಾಂತ್(ಪೊನ್ನಂಪೇಟೆ), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಆಹಾರ ಇಲಾಖೆ ಜಂಟಿ ನಿರ್ದೇಶಕರಾದ ಮಂಟೆಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಡಿ.ಆರ್. ಪ್ರಸನ್ನ ಕುಮಾರ್, ಮಡಿಕೇರಿ ಘಟಕ, ಕ.ರಾ.ರ.ಸಾ ನಿಗಮ, ಸೆಸ್ಕ್ ಕಾರ್ಯಪಾಲಕ ಅಭಿಯಂತರರಾದ ರಾಮಚಂದ್ರ, ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರ ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥ ಸಿ.ಬಿ.ಇತರರು ಇದ್ದರು.
ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಕಾರ್ಯಕ್ರಮಗಳ ಕುರಿತು ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು. ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ವಸ್ತುಪ್ರದರ್ಶನ ಮಳಿಗೆ ಗಮನ ಸೆಳೆಯಿತು.;Resize=(128,128))
;Resize=(128,128))
;Resize=(128,128))
;Resize=(128,128))